ಜಿಲ್ಲೆ

ಆರ್‌ಎಸ್‌ಎಸ್, ಬಿಜೆಪಿಯಿಂದ ಬೆದರಿಕೆ ಸರಿಯಲ್ಲ: ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಿ.ಡಿ.ಗಂಗಾಧರ ಖಂಡನೆ

ಕೆ.ಎನ್.ರಾಘವೇಂದ್ರ

ಮಂಡ್ಯ: ಸಚಿವ ಪ್ರಿಯಾಂಕ್ ಖರ್ಗೆ ಅವರು ಆರ್‌ಎಸ್‌ಎಸ್ ಚಟುವಟಿಕೆಯನ್ನು ಸರ್ಕಾರಿ ಸ್ಥಳಗಳಲ್ಲಿ ನಡೆಸದಂತೆ ಕ್ರಮ ವಹಿಸಲು ಬರೆದ ಪತ್ರದ ಬೆನ್ನಲ್ಲೇ ಆರ್‌ಎಸ್‌ಎಸ್ ಮತ್ತು ಬಿಜೆಪಿ ಮುಖಂಡರು ಬೆದರಿಕೆ ಹಾಕುತ್ತಿರುವುದು ಖಂಡನಾರ್ಹ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಿ.ಡಿ.ಗಂಗಾಧರ ಆಕ್ರೋಶ ವ್ಯಕ್ತಪಡಿಸಿದರು.

ಸಚಿವರು ಆರ್‌ಎಸ್‌ಎಸ್‌ಗೆ ನಿರ್ಬಂಧ ಹೇರುವಂತೆ ಪತ್ರ ಬರೆದಿಲ್ಲ. ಸರ್ಕಾರಿ ಸ್ಥಳಗಳಲ್ಲಿ ಚಟುವಟಿಕೆ ನಡೆಸದಂತೆ ಕ್ರಮ ವಹಿಸಲು ಹೇಳಿದ್ದನ್ನು ನಿಷೇಧಿಸುವಂತೆ ಬಿಜೆಪಿ ಮತ್ತು ಆರ್‌ಎಸ್‌ಎಸ್‌ನವರು ಬಿಂಬಿಸಿ ಜನರನ್ನು ಎತ್ತಿಕಟ್ಟುವ ಕೆಲಸ ಮಾಡುತ್ತಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.

ಸಚಿವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ, ನಿರಂತರವಾಗಿ ಬೆದರಿಕೆ ಕರೆಗಳು ಬರುತ್ತಿವೆ. ಬಿಜೆಪಿ ಮತ್ತು ಆರ್‌ಎಸ್‌ಎಸ್‌ನಿಂದ ನೀಡಲಾಗುತ್ತಿರುವ ಪ್ರತಿಕ್ರಿಯೆಯಿಂದಾಗಿ ಒಂದು ವಿಷಯದ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸುವ ಸಾಂವಿಧಾನಿಕ ಅಭಿವ್ಯಕ್ತಿ ಸ್ವಾತಂತ್ರ್ಯ ಹಕ್ಕಿನ ಮೇಲೆ ದಾಳಿ ನಡೆಸುತ್ತಿವೆ. ಈ ಮೂಲಕ ಸಂವಿಧಾನ ವಿರೋಧಿ ಕ್ರಮವನ್ನು ಅನುಸರಿಸುತ್ತಿವೆ. ಇದೇ ರೀತಿ ವರ್ತನೆ ಮುಂದುವರೆದರೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.

ಸಣ್ಣ ಕೈಗಾರಿಕೆ ಅಭಿವೃದ್ಧಿ ನಿಗಮದ ಉಪಾಧ್ಯಕ್ಷೆ ವಿಜಯಲಕ್ಷ್ಮೀ ರಘುನಂದನ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಸುಂಡಹಳ್ಳಿ ಮಂಜುನಾಥ್, ಎಸ್ಸಿ ಮತ್ತು ಎಸ್ಟಿ ವಿಭಾಗದ ಜಿಲ್ಲಾ ಉಪಾಧ್ಯಕ್ಷ ವಿಜಯ್‌ಕುಮಾರ್, ಜಿಲ್ಲಾ ವಕ್ತಾರ ಸಿ.ಎಂ.ದ್ಯಾವಪ್ಪ, ಎಂ.ಪಿ.ಮಂಜುನಾಥ್ ಇದ್ದರು.