ಚಾಮರಾಜನಗರ: ಮಾಜಿ ಸಚಿವ ಆರಗ ಜ್ಞಾನೇಂದ್ರ ಅವರನ್ನು ಬಂಧಿಸುವಂತೆ ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ಘಟಕದಿಂದ ಪ್ರತಿಭಟನೆ ನಡೆಸಲಾಯಿತು.
ನಗರದ ಶ್ರೀ ಚಾಮರಾಜೇಶ್ವರ ದೇವಸ್ಥಾನದ ಮುಂಭಾಗ ಜಮಾಯಿಸಿದ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಅಲ್ಲಿಂದ ಮೆರವಣಿಗೆ ಹೊರಟು, ಶ್ರೀ ಭವನೇಶ್ವರಿ ವೃತ್ತದಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆಯುವ ಮೂಲಕ ಕೆಲಕಾಲ ಪ್ರತಿಭಟನೆ ನಡೆಸಿದರು. ಆರಗ ಜ್ಞಾನೇಂದ್ರ ವಿರುದ್ಧ ೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಶಾಸಕ ಸಿ.ಪುಟ್ಟರಂಗಶೆಟ್ಟಿ ಮಾತನಾಡಿ, ನಮ್ಮ ಪಕ್ಷದ ಹಿರಿಯ ನಾಯಕ ಮಲ್ಲಿಕಾರ್ಜುನ್ ಖರ್ಗೆ ಹಾಗೂ ಅರಣ್ಯ ಸಚಿವ ಈಶ್ವರ್ ಖಂಡ್ರೆ ವಿರುದ್ಧ ಬಿಜೆಪಿಯ ಮುಖಂಡ ಆರಗ ಜ್ಞಾನೇಂದ್ರ ಮಾತನಾಡಿರುವುದು, ಬಿಜೆಪಿ ನಾಯಕರು ಮಾನಸಿಕ ಸ್ಥಿಮಿತ ಕಳೆದುಕೊಂಡಿರುವುದನ್ನು ತೋರಿಸುತ್ತದೆ. ಜ್ಞಾನೇಂದ್ರ ಹೇಳಿಕೆ ಬಿಜೆಪಿಯ ಕೀಳುಮಟ್ಟದ ಮನಸ್ಥಿತಿಯನ್ನು ತೋರುತ್ತದೆ. ಹಿರಿಯರ ಬಗ್ಗೆ ಯಾವ ರೀತಿ ಮಾತನಾಡಬೇಕು ಎಂಬುದನ್ನು ಅರಿತುಕೊಳ್ಳದೆ ತಮ್ಮ ನಾಲಗೆಯನ್ನು ಹರಿಬಿಟ್ಟಿದ್ದಾರೆ. ಬಿಜೆಪಿಯ ಸಂಸ್ಕೃತಿಯೇ ಇದಾಗಿದೆ. ಆಗಾಗಿ ಕೂಡಲೇ ಜ್ಞಾನೇಂದ್ರ ಅವರನ್ನು ಬಂಧಿಸಬೇಕು ಎಂದು ಒತ್ತಾಯಿಸಿದರು.
ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ ಮಾತನಾಡಿ, ಕಸ್ತೂರಿ ರಂಗನ್ ವರದಿ ಜಾರಿ ಮಾಡುವ ವಿಚಾರದಲ್ಲಿ ಮಾಜಿ ಸಚಿವ, ಹಾಲಿ ಶಾಸಕ ಆರಗ ಜ್ಞಾನೇಂದ್ರ ಮಾತನಾಡುತ್ತಾ, ಬಹಳ ಅವಹೇಳನಕಾರಿಯಾಗಿ ಮಲ್ಲಿಕಾರ್ಜುನ ಖರ್ಗೆ ಹಾಗೂ ಈಶ್ವರ್ ಖಂಡ್ರೆ ವಿರುದ್ಧ ಕಪ್ಪು ವರ್ಣದ ಬಗ್ಗೆ ಮಾತನಾಡಿರುವುದು ಅತ್ಯಂತ ಖಂಡನೀಯ. ಈ ವಿಚಾರದಲ್ಲಿ ಜ್ಞಾನೇಂದ್ರ ಜಾತಿ ಲೇಪನವನ್ನು ಮಾಡುವ ಪ್ರಯತ್ನ ಮಾಡಿದ್ದಾರೆ. ಈ ಬಗ್ಗೆ ಸರ್ಕಾರ ತಕ್ಷಣ ಕ್ರಮಕೈಗೊಂಡು ಅವರನ್ನು ಕೂದಲೇ ಬಂಧಿಸಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಗುಂಡ್ಲುಪೇಟೆ ಶಾಸಕ ಎಚ್.ಎಂ.ಗಣೇಶ್ ಪ್ರಸಾದ್, ಜಿಲ್ಲಾಧ್ಯಕ್ಷ ಪಿ.ಮರಿಸ್ವಾಮಿ, ಉಪಾಧ್ಯಕ್ಷ ಬಿ.ಕೆ.ರವಿಕುಮಾರ್, ಪ್ರಧಾನ ಕಾರ್ಯದರ್ಶಿ ಆರ್.ಮಹದೇವ್, ಚಿಕ್ಕಮಾದು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ಅಸ್ಗರ್ ಮುನ್ನಾ, ಗುರುಸ್ವಾಮಿ, ಎಸ್ಸಿ ಘಟಕದ ಅಧ್ಯಕ್ಷ ನಲ್ಲೂರು ಸೋಮೇಶ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಸದಾಶಿವಮೂರ್ತಿ, ಕೆರೆಹಳ್ಳಿ ನವೀನ್, ವಕೀಲ ಅರುಣ್ ಕುಮಾರ್ ಹಾಗೂ ಇತರರು ಭಾಗವಹಿಸಿದ್ದರು.