ಜಿಲ್ಲೆ

ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಗೆ ಆಕ್ರೋಶ: ನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ

reportermys

ಮಂಡ್ಯ: ವಾಣಿಜ್ಯ ಮತ್ತು ಗೃಹಬಳಕೆಯ ಗ್ಯಾಸ್ ಸಿಲಿಂಡರ್‌ಗಳ ಬೆಲೆ ಏರಿಕೆ ವಿರೋಧಿಸಿ ನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಸರ್‌ಎಂವಿ ಪ್ರತಿಮೆ ಎದುರು ಜಮಾಯಿಸಿದ ಕಾರ್ಯಕರ್ತರು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ದೇಶದಲ್ಲಿ ಬಡವರು ಮತ್ತು ಸಾಮಾನ್ಯ ವರ್ಗದ ಜನರ ಬದುಕು ಸಂಕಷ್ಟಕ್ಕೆ ಸಿಲುಕುತ್ತಿರುವುದು ಬಿಜೆಪಿಗರಿಗೆ ಕಾಣುತ್ತಿಲ್ಲವೇ?. ಜನರ ನೋವಿಗೆ ಸ್ಪಂದಿಸದ ಬಿಜೆಪಿ ಸರ್ಕಾರವನ್ನು ಅಧಿಕಾರದಿಂದ ಕಿತ್ತೊಯ್ಯುವ ದಿನಗಳು ದೂರವಿಲ್ಲ ಎಂದು ಟೀಕಿಸಿದರು.

ವರ್ಷಕ್ಕೆ ಎರಡು ಮೂರು ಬಾರಿ ಗ್ಯಾಸ್ ಸಿಲಿಂಡರ್‌ಗಳ ಬೆಲೆ ಏರಿಕೆ ಮಾಡುತ್ತಿರುವುದು ಬಡವರ ಹೊಟ್ಟೆಯ ಮೇಲೆ ಹೊಡೆದಂತೆ ಆಗುತ್ತಿದೆ. ಇಂತಹ ಹೀನಾಯ ಸರ್ಕಾರವನ್ನು ಮತದಾರರು ಐದು ವರ್ಷಗಳಿಂದ ಗಮನಿಸುತ್ತಿದ್ದಾರೆ. ಮುಂದಿನ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಪ್ರತಿಭಟನೆಯಲ್ಲಿ ಮಾಜಿ ಸಚಿವ ಎಂ.ಎಸ್.ಆತ್ಮಾನಂದ, ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿ.ಎಂ.ದ್ಯಾವಪ್ಪ, ನಗರ ಬ್ಲಾಕ್ ಸಮಿತಿ ಅಧ್ಯಕ್ಷ ಎಚ್.ಕೆ.ರುದ್ರಪ್ಪ, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅಂಜನಾ ಶ್ರೀಕಾಂತ್, ನಗರಸಭಾ ಸದಸ್ಯ ಶ್ರೀಧರ್, ಕೆ.ಕೆ.ರಾಧಾಕೃಷ್ಣ ಕೀಲಾರ, ಹೊಸಹಳ್ಳಿ ಶಿವಲಿಂಗೇಗೌಡ, ಡಾ.ಕೃಷ್ಣ, ವೀಣಾ, ಜಯಲಕ್ಷ್ಮೀ, ಪಲ್ಲವಿ ಇತರರಿದ್ದರು.