ಜಿಲ್ಲೆ

ಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಆನಂದಕುಮಾರ ಅಂಗಡಿ

ಹುಬ್ಬಳ್ಳಿ : ಇಂಧನ ಹಾಗೂ ಅಡುಗೆ ಸಿಲೆಂಡರ್ ದರ ಏರಿಕೆ ಮಾಡಿದ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.

ಪೆಟ್ರೋಲ್ ಹಾಗೂ ಡೀಸೆಲ್ ದರಗಳಲ್ಲಿ ಲೀಟರ್​ಗೆ 2 ರೂ. ಹೆಚ್ಚಳ, ಎಲ್​ಪಿಜಿ ಗ್ಯಾಸ್ೆ 50 ರೂ. ಏರಿಕೆ ಮಾಡುವ ಮೂಲಕ ಕೇಂದ್ರ ಸರ್ಕಾರ ಜನವಿರೋಧಿ ನೀತಿ ಅನುಸರಿಸುತ್ತಿದೆ. ಬೆಲೆ ಏರಿಕೆಯಿಂದಾಗಿ ಜನರು ಜೀವನ ನಡೆಸುವುದು ದುಸ್ತರವಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಸಂಗೊಳ್ಳಿ ರಾಯಣ್ಣ ವೃತ್ತದಿಂದ ಮಿನಿ ವಿಧಾನಸೌಧದವರೆಗೆ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು, ಅಡುಗೆ ಸಿಲೆಂಡರ್ ಇಟ್ಟು ಪ್ರತಿಭಟಿಸಿದರು. ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಿದ್ದರಿಂದ ಇತರ ನಿತ್ಯೋಪಯೋಗಿ ವಸ್ತುಗಳ ಬೆಲೆಯೂ ಏರಿಕೆಯಾಗುತ್ತದೆ. ಆದಕಾರಣ, ಬೆಲೆ ಏರಿಕೆಯ ನಿರ್ಧಾರವನ್ನು ಸರ್ಕಾರ ತಕ್ಷಣ ಹಿಂಪಡೆಯಬೇಕು ಎಂದು ಒತ್ತಾಯಿಸಿದರು.

ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕೇಂದ್ರ ಸರ್ಕಾರಕ್ಕೆ ತಹಸೀಲ್ದಾರರ ಮುಖಾಂತರ ಮನವಿ ಸಲ್ಲಿಸಿದರು.

ಹುಬ್ಬಳ್ಳಿ-ಧಾರವಾಡ ಮಹಾನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಲ್ತಾಫ ಹಳ್ಳೂರ, ಧಾರವಾಡ ಗ್ರಾಮೀಣ ಜಿಲ್ಲಾ ಅಧ್ಯಕ್ಷ ಅನಿಲಕುಮಾರ ಪಾಟೀಲ, ಅರ್ಜುನ ಪಾಟೀಲ, ಸದಾನಂದ ಡಂಗನವರ, ಎಂ.ಎಚ್. ಚಳ್ಳಮರದ ಶೇಖ ಹಾಗೂ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.