ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ರಾಜೀನಾಮೆಗೆ ಒತ್ತಾಯಿಸಿ ಕಾಂಗ್ರೆಸ್ ಕಾರ್ಯಕರ್ತರು ಮಂಗಳವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು. 
ಜಿಲ್ಲೆ

ಎಚ್‌ಡಿಕೆ ರಾಜೀನಾಮೆಗೆ ಆಗ್ರಹಿಸಿ ಮೈಸೂರಿನಲ್ಲಿ ಕಾಂಗ್ರೆಸ್ ಪ್ರತಿಭಟನೆ

ಮೈಸೂರು: ಸ್ಟಿಂಗ್ ಆಪರೇಷನ್‌ಗೆ ಸಂಬಂಧಿಸಿದ ಸಾಕ್ಷೃ ನಾಶಪಡಿಸಲು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಪ್ರಯತ್ನ ನಡೆಸುತ್ತಿದ್ದು, ಕೂಡಲೇ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಪಾರದರ್ಶಕ ತನಿಖೆಗೆ ಸಹಕಾರ ನೀಡಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರು ಮಂಗಳವಾರ ನಗರದ ಚಿಕ್ಕಗಡಿಯಾರ ಆವರಣದಲ್ಲಿ ಪ್ರತಿಭಟನೆ ನಡೆಸಿದರು.

ನಗರ ಕಾಂಗ್ರೆಸ್ ವಕ್ತಾರ ಎಸ್. ರಾಜೇಶ್ ಮಾತನಾಡಿ, ಕುಮಾರಸ್ವಾಮಿ ಅವರು ಕೇಂದ್ರ ಸಚಿವರ ಅಧಿಕೃತ ನಿವಾಸವನ್ನು ದುರುಪ ಯೋಗ ಪಡಿಸಿಕೊಂಡು ಪ್ರಕರಣದ ತನಿಖೆಯ ದಿಕ್ಕು ತಪ್ಪಿಸುವ ಪ್ರಯತ್ನ ಮಾಡುತ್ತಿದ್ದಾರೆ. ಗೃಹ ಸಚಿವ ಪ್ರಿಯಾಂಕ್ ಖರ್ಗೆ, ಸಚಿವರಾದ ಬಾಲಕೃಷ್ಣ ಹಾಗೂ ಚಲುವರಾಯಸ್ವಾಮಿ ಮೇಲೆ ಐ.ಟಿ ಮತ್ತು ಇ.ಡಿ ದಾಳಿ ನಡೆಸಲು ಪ್ರಧಾನಿ ನರೇಂದ್ರ ಮೋದಿ ಮೇಲೆ ಕುಮಾರಸ್ವಾಮಿ ಒತ್ತಡ ಹೇರುತ್ತಿದ್ದಾರೆ ಎಂದು ಆರೋಪಿಸಿದರು.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಡುವೆ ಬಿರುಕು ಮೂಡಿಸಲು, ರಾಜಕೀಯ ಲಾಭಕ್ಕಾಗಿ ಈ ಷಡ್ಯಂತ್ರ ರೂಪಿಸಲಾಗಿದೆ. ಪ್ರಕರಣದ ಸತ್ಯಾಸತ್ಯತೆ ಹೊರಬರಬೇಕಾದರೆ ಮತ್ತು ನಿಷ್ಪಕ್ಷಪಾತ ತನಿಖೆ ನಡೆಯಬೇಕಾದರೆ ಕುಮಾರಸ್ವಾಮಿ ಕೂಡಲೇ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಕಾಂಗ್ರೆಸ್ ಮುಖಂಡರಾದ ಬಸವಣ್ಣ, ಸೈಯದ್ ಫಾರೂಕ್ ಸುನಿಲ್ ನಾರಾಯಣ, ರವಿ ನಾಯಕ, ರದಿವುಲ್ಲಾ ಖಾನ್, ಕುಕ್ಕರಹಳ್ಳಿ ನಂಜುಂಡಸ್ವಾಮಿ, ಎಸ್.ಎ.ರಹೀಂ ಭಾಗವಹಿಸಿದ್ದರು.