ಹನೂರು: ಗಣಪತಿ ಮೂರ್ತಿ ಪ್ರತಿಷ್ಠಾಪಿಸುವ ಆಯೋಜಕರು ಕಡ್ಡಾಯವಾಗಿ ಏಕಗವಾಕ್ಷಿ ಸಮಿತಿಯಿಂದ ಅನುಮತಿ ಪಡೆದುಕೊಳ್ಳಬೇಕು. ಜತೆಗೆ ಸಂಜೆ 6 ಗಂಟೆಯೊಳಗೆ ಮೂರ್ತಿಯನ್ನು ವಿಸರ್ಜಿಸಬೇಕು ಎಂದು ಇನ್ಸ್‌ಪೆಕ್ಟರ್ ಶಶಿಕುಮಾರ್ ತಿಳಿಸಿದರು.
ಪಟ್ಟಣದ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ಗಣೇಶ ಮೂರ್ತಿ ಪ್ರತಿಷ್ಠಾಪಿಸುವ ಸಂಬಂಧ ಆಯೋಜಿಸಿದ್ದ ವಿವಿಧ ಗ್ರಾಮದ ಮುಖಂಡರು ಹಾಗೂ ಯುವಕರ ಸಮಿತಿ ಪದಾಧಿಕಾರಿಗಳ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.
ಸರ್ಕಾರದ ಮಾರ್ಗಸೂಚಿ ಅನ್ವಯ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಗೌರಿ ಗಣೇಶ ಹಬ್ಬದಲ್ಲಿ ಮೂರ್ತಿ ಪ್ರತಿಷ್ಠಾಪಿಸುವ ಸಂಬಂಧ ಗಣೇಶೋತ್ಸವ ಆಯೋಜಕರಿಗೆ ಅನುಮತಿ ನೀಡುವ ಸಲುವಾಗಿ ಏಕಗವಾಕ್ಷಿ ಸಮಿತಿಯನ್ನು ಜಾರಿಗೆ ತಂದಿದೆ. ಆದ್ದರಿಂದ ಸರ್ಕಾರದ ಆದೇಶ ಪಾಲಿಸುವುದು ನಮ್ಮೆಲ್ಲರ ಕರ್ತವ್ಯ. ಹಾಗಾಗಿ ಆಯೋಜಕರು ಸೆಸ್ಕ್, ಪೊಲೀಸ್, ಪಟ್ಟಣ ಪಂಚಾಯಿತಿ, ಗ್ರಾಮ ಪಂಚಾಯಿತಿ, ಅಗ್ನಿಶಾಮಕ ಸೇರಿದಂತೆ ಇನ್ನಿತರ ಇಲಾಖೆಯಿಂದ ಕಡ್ಡಾಯವಾಗಿ ಅನುಮತಿ ಪಡೆದುಕೊಳ್ಳಬೇಕು. ಮೂರ್ತಿ ಪ್ರತಿಷ್ಠಾಪನೆ ಸಂಬಂಧ ಸಂಪೂರ್ಣ ಜವಾಬ್ದಾರಿ ವಹಿಸಿಕೊಳ್ಳಬೇಕು. ಯಾವುದೇ ಗುಂಪು ಘರ್ಷಣೆಗಳಿಗೆ ಆಸ್ಪದ ನೀಡದಂತೆ ಅಗತ್ಯ ಕ್ರಮ ವಹಿಸಬೇಕು. ಅಲ್ಲದೆ ಮೂರ್ತಿ ಪ್ರತಿಷ್ಠಾಪಿಸುವ ಸ್ಥಳದಲ್ಲಿ ಸ್ವಯಂ ಸೇವಕರನ್ನು ನಿಯೋಜಿಸಬೇಕು. ಅಗತ್ಯವಿದ್ದಲ್ಲಿ ಸಿಸಿ ಕ್ಯಾಮರಾ ಅಳವಡಿಸಬೇಕು ಎಂದರು.
ಜತೆಗೆ ಜಲಾಶಯ, ಕೆರೆಕಟ್ಟೆಗಳಲ್ಲಿ ಮೂರ್ತಿ ವಿಸರ್ಜಿಸದಂತೆ ಕೋರ್ಟ್ ಆದೇಶ ಹೊರಡಿಸಿದೆ. ಆದ್ದರಿಂದ ವಿಸರ್ಜಜನೆ ಸ್ಥಳ ಹಾಗೂ ಪ್ರತಿಷ್ಠಾಪನೆ ಸ್ಥಳದ ಬಗ್ಗೆ ಮಾಹಿತಿ ನೀಡಬೇಕು. ಹೆಚ್ಚು ಶಬ್ದವನ್ನು ಹೊರಸೂಸುವ ಧ್ವನಿವರ್ಧಕವನ್ನು ಸಂಪೂರ್ಣ ನಿಷೇಧಿಸಲಾಗಿದೆ. ಒಂದು ವೇಳೆ ಬಳಸಿದಲ್ಲಿ ಮುಟ್ಟುಗೋಲು ಹಾಕಿಕೊಳ್ಳುವುದರ ಜತೆಗೆ ಸಂಬಂಧಪಟ್ಟವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು. ಆದ್ದರಿಂದ ಈ ಬಗ್ಗೆ ಪ್ರತಿಯೊಬ್ಬರೂ ಎಚ್ಚರ ವಹಿಸಬೇಕು. ಈ ನಿಟ್ಟಿನಲ್ಲಿ ಹಬ್ಬವನ್ನು ಶಾಂತಿಯುತವಾಗಿ ಆಚರಿಸುವುದರ ಮೂಲಕ ಕಾನೂನು ಸುವ್ಯವಸ್ಥೆಗೆ ಸಹಕಾರ ನೀಡಬೇಕು ಎಂದರು.
ಸಭೆಯಲ್ಲಿ ಸಬ್ ಇನ್ಸ್‌ಪೆಕ್ಟರ್ ಸಿ. ಮಂಜುನಾಥ್ ಪ್ರಸಾದ್, ಪಪಂ ಸದಸ್ಯರಾದ ಗಿರೀಶ್, ಸುದೇಶ್, ಹರೀಶ್‌ಕುಮಾರ್, ಮುಖಂಡರಾದ ಶಿವರಾಜು, ಮಾದೇವ, ನಿಂಗರಾಜು, ಸುರೇಶ್ ಇತರರಿದ್ದರು.