ಜಿಲ್ಲೆ

ಸಮ ಸಮಾಜ ನಿರ್ಮಾಣ ಸಂವಿಧಾನದ ಆಶಯ

ಎ. ಆರ್. ರಘುರಾಮ

ಹನೂರು: ಸಂವಿಧಾನ ನೀಡಿರುವ ಹಕ್ಕುಗಳು ಪ್ರತಿಯೊಬ್ಬರಿಗೂ ದೊರೆಯದಾಗ ಮಾತ್ರ ಸಂವಿಧಾನದ ಆಶಯ ಈಡೇರುತ್ತದೆ. ಆದ್ದರಿಂದ ಮಕ್ಕಳಿಗೆ ಸಂವಿಧಾನದ ಬಗ್ಗೆ ಅರಿವು ಮೂಡಿಸಬೇಕು ಎಂದು ಶಾಸಕ ಎಂ.ಆರ್ ಮಂಜುನಾಥ್ ತಿಳಿಸಿದರು.

ಪಟ್ಟಣದ ಖಾಸಗಿ ಬಸ್ ನಿಲ್ದಾಣದ ಬಳಿ ಬುಧವಾರ ತಾಲೂಕು ಆಡಳಿತ, ಸಮಾಜ ಕಲ್ಯಾಣ ಇಲಾಖೆ ಹಾಗೂ ಪಟ್ಟಣ ಪಂಚಾಯಿತಿ ವತಿಯಿಂದ ಆಯೋಜಿಸಿದ್ದ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಡಾ.ಬಿ.ಆರ್.ಅಂಬೇಡ್ಕರ್ ಅವರು ರಚಿಸಿರುವ ಸಂವಿಧಾನ ವಿಶ್ವದಲ್ಲಿಯೇ ಶ್ರೇಷ್ಠವೆನಿಸಿದ್ದು, ಶಾಸಕಾಂಗ, ಕಾರ್ಯಾಂಗ ಹಾಗೂ ನ್ಯಾಯಾಂಗ ಸರಿಯಾದ ರೀತಿಯಲ್ಲಿ ಕಾರ್ಯನಿರ್ವಹಿಸುವಲ್ಲಿ ಮುಖ್ಯಪಾತ್ರ ವಹಿಸಿದೆ. ಆ ಮೂಲಕ ಸದೃಢ ರಾಷ್ಟ್ರ ನಿರ್ಮಾಣಕ್ಕೆ ಸಹಕಾರಿಯಾಗಿದೆ. ಸಂವಿಧಾನದ ಆಶಯದಂತೆ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸಂವಿಧಾನ ನೀಡಿರುವ ಹಕ್ಕುಗಳು ಸಿಗಬೇಕು. ಆದರೆ ಈ ಬಗ್ಗೆ ಕೊರತೆ ಎದ್ದು ಕಾಣುತ್ತಿದೆ. ಹಾಗಾಗಿ ಕ್ಷೇತ್ರ ವ್ಯಾಪ್ತಿಯಲ್ಲಿ ಸಾಮಾನ್ಯ ಜನರಿಗೂ ಹಕ್ಕುಗಳನ್ನು ತಲುಪಿಸುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ ಎಂದು ತಿಳಿಸಿದರು.

ಯುವಕರಿಗೆ ದಾರಿದೀಪ: ಸಮ ಸಮಾಜವನ್ನು ನಿರ್ಮಿಸುವುದು ಸಂವಿಧಾನದ ಆಶಯ. ಹಾಗಾಗಿ, ಎಲ್ಲ ವರ್ಗಕ್ಕೂ ಸಮಾನತೆಯನ್ನು ಕಲ್ಪಿಸುವ ನಿಟ್ಟಿನಲ್ಲಿ ದೇಶಕ್ಕೆ ಸಂವಿಧಾನವನ್ನು ಕೊಡುಗೆಯಾಗಿ ನೀಡಿದ ಡಾ.ಬಿ.ಆರ್ ಅಂಬೇಡ್ಕರ್ ಅವರು ಒಂದು ಸಮುದಾಯಕ್ಕೆ ಮಾತ್ರ ಸೀಮಿತವಲ್ಲ. ಈ ಬಗ್ಗೆ ಪ್ರತಿಯೊಬ್ಬರೂ ಮನದಟ್ಟು ಮಾಡಿಕೊಳ್ಳಬೇಕು. ಈ ನಿಟ್ಟಿನಲ್ಲಿ ಅವರ ಜೀವನ ಮತ್ತು ಆದರ್ಶಗಳನ್ನು ಪ್ರತಿಯೊಬ್ಬರೂ ಪಾಲಿಸಿದಾಗ ಸ್ವತಂತ್ರ ಬದುಕಿನ ಜತೆಗೆ ಉತ್ತಮ ಸಮಾಜ ನಿರ್ಮಾಣ ಸಾಧ್ಯ. ಇದು ಯುವ ಪೀಳಿಗೆಗೆ ಸ್ಫೂರ್ತಿದಾಯಕ. ಅಲ್ಲದೆ, ಭವಿಷ್ಯದಲ್ಲಿ ಉತ್ತಮ ಬದುಕನ್ನು ರೂಪಿಸಿಕೊಳ್ಳಲು ಸಹಕಾರಿಯಾಗಿದೆ. ಈ ದಿಸೆಯಲ್ಲಿ ಸರ್ಕಾರ ಸಂವಿಧಾನದ ಬಗ್ಗೆ ಜಾಗೃತಿ ಮೂಡಿಸುತ್ತಿರುವುದು ಮೆಚ್ಚುಗೆಯ ಸಂಗತಿ ಎಂದು ತಿಳಿಸಿದರು.

ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಕೇಶವಮೂರ್ತಿ ಮಾತನಾಡಿದರು. ಪ್ರಾಂಶುಪಾಲ ಮಹೇಶ್ ಅವರು ಸಂವಿಧಾನದ ಬಗ್ಗೆ ವಿಸ್ತೃತ ಮಾಹಿತಿಯನ್ನು ತಿಳಿಸಿದರು. ತಹಸೀಲ್ದಾರ್ ವೈ.ಕೆ.ಗುರುಪ್ರಸಾದ್, ಬಿಇಒ ಶಿವರಾಜು, ಪಪಂ ಮುಖ್ಯಾಧಿಕಾರಿ ಮಹೇಶ್‌ಕುಮಾರ್, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಮಹಾದೇವ, ಶಿಕ್ಷಣ ಸಂಯೋಜಕರಾದ ಕಿರಣ್‌ಕುಮಾರ್, ಕಂದವೇಲು, ಪಪಂ ಸದಸ್ಯರಾದ ಗಿರೀಶ್, ಹರೀಶ್, ಸುದೇಶ್, ಸಂಪತ್‌ಕುಮಾರ್, ಮಹೇಶ್, ಸೋಮಶೇಖರ್, ಮಹೇಶ್‌ನಾಯ್ಕ, ಮಮ್ತಾಜ್ ಬಾನು, ಮಂಜುಳಾ ಹಾಗೂ ಇನ್ನಿತರರು ಇದ್ದರು.

ವಿಜೃಂಭಣೆಯ ಮೆರವಣಿಗೆ: ಕಾರ್ಯಕ್ರಮಕ್ಕೂ ಮುನ್ನ ಆರ್.ಎಸ್.ದೊಡ್ಡಿ ಗ್ರಾಮಕ್ಕೆ ಆಗಮಿಸಿದ ಸಂವಿಧಾನ ಜಾಗೃತಿ ಜಾಥಾವನ್ನು ಶಾಸಕ ಎಂ.ಆರ್ ಮಂಜುನಾಥ್, ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಪುಷ್ಪನಮನ ಸಲ್ಲಿಸುವುದರ ಮೂಲಕ ಅದ್ದೂರಿಯಾಗಿ ಸ್ವಾಗತಿಸಿದರು. ಬಳಿಕ ವಾದ್ಯ ಮೇಳ ಸಮೇತ ಮಲೆಮಹದೇಶ್ವರ ಬೆಟ್ಟದ ಮುಖ್ಯರಸ್ತೆಯ ಮೂಲಕ ಪೆಟ್ರೋಲ್ ಬಂಕ್‌ವರೆಗೆ ವಿಜೃಂಭಣೆಯಿಂದ ಮೆರವಣಿಗೆ ನಡೆಯಿತು. ಈ ವೇಳೆ ಯುವಕರು ವಾದ್ಯದ ತಾಳಕ್ಕೆ ಕುಣಿದು ಕುಪ್ಪಳಿಸಿ ಸಂಭ್ರಮಿಸಿದರು. ನೂರಾರು ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳು ಮೆರವಣಿಗೆಯಲ್ಲಿ ಹೆಜ್ಜೆ ಹಾಕಿದರು.