ವಿಜಯಪುರ: ನಗರದ ಕಂದಗಲ್ಲ ಹನುಮಂತರಾಯ ರಂಗಮಂದಿರದಲ್ಲಿ ನ. 26 ರ ಸಂವಿಧಾನ ದಿನಾಚರಣೆ ಹಾಗೂ ವಿಚಾರ ಸಂಕಿರಣ -2024 ಮತ್ತು ಡಾ. ಬಿ.ಆರ್. ಅಂಬೇಡ್ಕರ್ ಅವರ ಜೀವನದ ಪ್ರಮುಖ ಘಟ್ಟಗಳ ಕುರಿತಾಗಿರುವ ಛಾಯಚಿತ್ರಗಳ ಪ್ರದರ್ಶನ ಹಮ್ಮಿಕೊಳ್ಳಲಾಗಿದೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆಯಿಂದ ಕಾರ್ಯಕ್ರಮ ನಡೆಯಲಿದೆ. ಅಂದು ಬೆಳಗ್ಗೆ 9.30ಕ್ಕೆ ನಗರದ ಸಿದ್ಧೇಶ್ವರ ದೇವಸ್ಥಾನದಿಂದ ಕಂದಗಲ್ಲ ಶ್ರೀ ಹನುಮಂತರಾಯ ರಂಗಮಂದಿರದವರೆಗೆ ಭಾರತದ ಸಂವಿಧಾನ ಜಾಗೃತಿ ಜಾಥಾ ನಡೆಯಲಿದ್ದು, ಬೆಳಗ್ಗೆ 10.30ಕ್ಕೆ ಕಂದಗಲ್ಲ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ.
ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ. ಪಾಟೀಲ ಉದ್ಘಾಟಿಸುವರು. ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅಧ್ಯಕ್ಷತೆ ವಹಿಸಲಿದ್ದಾರೆ.
ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಎಸ್.ಪಾಟೀಲ, ಕರ್ನಾಟಕ ಸರ್ಕಾರದ ನವದೆಹಲಿಯ ವಿಶೇಷ ಪ್ರತಿನಿಧಿ ಹಾಗೂ ವಿಧಾನ ಪರಿಷತ್ ಸದಸ್ಯ ಪ್ರಕಾಶ ಹುಕ್ಕೇರಿ, ಕರ್ನಾಟಕ ಸೋಪ್ಸ್ ಮತ್ತು ಡಿಟಜೆರ್ಂಟ್ ನಿಯಮಿತದ ಅಧ್ಯಕ್ಷರು ಹಾಗೂ ಶಾಸಕರಾದ ಅಪ್ಪಾಜಿ ಸಿ.ಎಸ್. ನಾಡಗೌಡ, ಸಂಸದ ರಮೇಶ ಜಿಗಜಿಣಗಿ, ಸುಧಾ ಮೂರ್ತಿ ಮತ್ತಿತರರು ಭಾಗವಹಿಸುವರು.
ಹಿರಿಯ ಸಾಹಿತಿ ಡಾ. ಎಚ್.ಟಿ. ಪೋತೆ ಆಶಯ ನುಡಿಗಳನ್ನಾಡಲಿದ್ದಾರೆ. ಭಾರತ ಸಂವಿಧಾನದ ಹೆಜ್ಜೆಗಳು ಕುರಿತಾಗಿ ಕೂಡಗಿ ಸರ್ಕಾರಿ ಪದವಿ ಪೂರ್ವ ಮಹಾವಿದ್ಯಾಲಯದ ಉಪನ್ಯಾಸಕ ಬಸವರಾಜ ಜಾಲವಾದ ವಿಷಯ ಮಂಡಿಸುವರು. ಭಾರತದ ಸಂವಿಧಾನದ ಪ್ರಸ್ತಾವನೆ ಆಶಯಗಳ ಕುರಿತು ಲಚ್ಯಾಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಭೀಮರಾವ ಗೊಣಸಗಿ ಅವರು ವಿಷಯ ಮಂಡನೆ ಮಾಡಲಿದ್ದಾರೆ. ಈ ಗೋಷ್ಠಿಗೆ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅಧ್ಯಕ್ಷತೆ ವಹಿಸಲಿದ್ದಾರೆ.
ಸಂವಿಧಾನದ ಮೂಲಭೂತ ಹಕ್ಕು ಮತ್ತು ಕರ್ತವ್ಯಗಳು ಹಾಗೂ ಕಲ್ಯಾಣ ರಾಜ್ಯದ ಪರಿಕಲ್ಪನೆ ವಿಷಯದ ಕುರಿತು ವಿಜಯಪುರದ ನ್ಯಾಯವಾದಿಗಳ ಸಂಘದ ಗೌರವ ಕಾರ್ಯದರ್ಶಿ ಸುರೇಶ ಚೂರಿ ವಿಷಯ ಮಂಡನೆ ಮಾಡಲಿದ್ದಾರೆ. ಸಂವಿಧಾನ ಅಂದು ಮತ್ತು ಮುಂದು ವಿಷಯದ ಕುರಿತು ತಾಳಿಕೋಟೆಯ ಎಸ್.ಕೆ. ಕಲಾ ವಾಣಿಜ್ಯ ಮತ್ತು ವಿಜ್ಞಾನ ಮಹಾವಿದ್ಯಾಲಯದ ಕನ್ನಡ ಸಹಾಯಕ ಪ್ರಾಧ್ಯಾಪಕಿ ಡಾ.ಸುಜಾತ ಚಲವಾದಿ ವಿಷಯ ಮಂಡನೆ ಮಾಡಲಿದ್ದಾರೆ. ವಿಜಯಪುರದ ಸಹಕಾರಿ ಇಲಾಖೆಯ ನಿವೃತ್ತ ಉಪ ನಿರ್ದೇಶಕಬಿ. ಆರ್ ಬನಸೋಡೆ ಅಧ್ಯಕ್ಷತೆ ವಹಿಸಲಿದ್ದಾರೆ.
ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರ ಹಾಗೂ ಸಂವಿಧಾನದ ಕುರಿತು ಗಾಯನ ಕಾರ್ಯಕ್ರಮ, ಡಾ.ಬಿ. ಆರ್. ಅಂಬೇಡ್ಕರ್ ಅವರ ಹೋರಾಟದ ಹಾದಿಯ ಕುರಿತು ರಂಗನಾಥ್ ಬತ್ತಾಸಿ ಅವರ ತಂಡದಿಂದ ನೃತ್ಯರೂಪಕ ಪ್ರದರ್ಶನಗೊಳ್ಳಲಿದೆ ಎಂದು ಪ್ರಕಟಣೆ ತಿಳಿಸಿದೆ.