ಜಿಲ್ಲೆ

ಮೂಲ ಸೌಕರ್ಯ ಕಲ್ಪಿಸಲು ಸರ್ಕಾರ ಬದ್ಧ: ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಭರವಸೆ

ಕೆ.ಎನ್.ರಾಘವೇಂದ್ರ

ನಾಗಮಂಗಲ: ಗ್ರಾಮೀಣ ಪ್ರದೇಶ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಪೂರಕವಾಗಿ ಅಗತ್ಯ ಮೂಲ ಸೌಕರ್ಯ ಒದಗಿಸಲು ಸರ್ಕಾರ ಬದ್ಧವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು.

ತಾಲೂಕಿನ ದೇವಲಾಪುರ ಹ್ಯಾಂಡ್‌ಪೋಸ್ಟ್‌ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ 85 ಲಕ್ಷ ರೂ ವೆಚ್ಚದ ಆಡಿಟೋರಿಯಂ ಕಟ್ಟಡ ನಿರ್ಮಾಣ ಮತ್ತು ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಆವರಣದಲ್ಲಿ 2.5 ಕೋಟಿ ರೂ ವೆಚ್ಚದ ಸೆಮಿನಾರ್ ಹಾಲ್ ಮತ್ತು ಪ್ರಯೋಗಾಲಯ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ಪದವಿ ಮತ್ತು ಡಿಪ್ಲೊಮೋ ವ್ಯಾಸಂಗ ಮಾಡುತ್ತಿರುವ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಸಾಧನೆಯ ಗುರಿಯೊಂದಿಗೆ ಶಿಕ್ಷಣ ಪಡೆದು ದೇಶಕ್ಕೆ ಕೊಡುಗೆ ನೀಡಲು ಗಂಭೀರವಾಗಿ ಚಿಂತಿಸಬೇಕು ಎಂದು ಸಲಹೆ ನೀಡಿದರು.

ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಸಾಕಷ್ಟು ಆವಿಷ್ಕಾರಗಳು ನಡೆಯುತ್ತಿರುವುದರಿಂದ ಜಗತ್ತು ಇಂದು ಸಾಕಷ್ಟು ಮುಂದೆ ಹೋಗಿದೆ. ಯಾವುದೇ ಕ್ಷೇತ್ರದಲ್ಲಾದರೂ ಸರಿ ವಿದ್ಯಾರ್ಥಿಗಳು ಒಂದು ಗುರಿ ಇಟ್ಟುಕೊಂಡ ಮೇಲೆ ಹಿಂದೆ ತಿರುಗಿ ನೋಡಬಾರದು. ಮುಂದಿನ ಅಭ್ಯುದಯದ ದಷ್ಠಿಕೋನದೊಂದಿಗೆ ಶ್ರದ್ಧೆಯಿಂದ ಮುಂದೆ ಸಾಗಬೇಕು. ಆಗ ಮಾತ್ರ ಜೀವನದಲ್ಲಿ ಯಶಸ್ಸು ಸಾಸಲು ಸಾಧ್ಯ ಎಂದರು.

ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿಗೆ ಅಗತ್ಯವಿರುವ ಮೂಲ ಸೌಕರ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಕ್ರಮ ವಹಿಸಲಾಗುವುದು. ವಿದ್ಯಾರ್ಥಿಗಳ ಭವಿಷ್ಯದ ದಷ್ಟಿಯಿಂದ ಪ್ರಾಂಶುಪಾಲರು ಮತ್ತು ಪ್ರಾಧ್ಯಾಪಕರು ಶಿಕ್ಷಣದ ಜತೆಗೆ ಸಂಸ್ಕಾರವನ್ನೂ ಕಲಿಸಬೇಕು ಎಂದು ತಿಳಿಸಿದರು.

ಮನ್‌ಮುಲ್ ನಿರ್ದೇಶಕ ಎನ್.ಅಪ್ಪಾಜಿಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎನ್.ಜೆ.ರಾಜೇಶ್, ಮಾಜಿ ಅಧ್ಯಕ್ಷ ಎಚ್.ಟಿ.ಕೃಷ್ಣೇಗೌಡ, ಪುರಸಭೆ ಅಧ್ಯಕ್ಷ ಅಲಿ ಅನ್ಸರ್‌ಪಾಷ, ಪ್ರಾಂಶುಪಾಲೆ ವೈ.ಎನ್.ನೇತ್ರಾವತಿ ಇತರರಿದ್ದರು.