ನಾಪೋಕ್ಲು: ಹೋಬಳಿ ವ್ಯಾಪ್ತಿಯಲ್ಲಿ ಮೂರು ದಿನಗಳಿಂದ ನಿರಂತರ ಮಳೆ ಸುರಿಯುತ್ತಿದ್ದು, ಮಳೆಯ ಪರಿಣಾಮದಿಂದ ಕಾವೇರಿ ನದಿ ತುಂಬಿ ಹರಿಯುತ್ತಿದೆ.
ನಾಪೋಕ್ಲು-ಮೂರ್ನಾಡು ಸಂಪರ್ಕ ರಸ್ತೆಯ ಹೊದ್ದೂರು ಗ್ರಾಮದ ಬೊಳಿಬಾಣೆ ಎಂಬಲ್ಲಿ ಶುಕ್ರವಾರದಿಂದ ರಸ್ತೆಯಲ್ಲಿ ಕಾವೇರಿ ಪ್ರವಾಹದಿಂದ ಜಲಾವೃತವಾಗಿದೆ. ವಾಹನ ಸಂಚಾರ ಸ್ಥಗಿತಗೊಂಡ ಕಾರಣ ನಾಪೋಕ್ಲು ಕೊಟ್ಟಮುಡಿ, ಕೇಮಾಟ್, ಕುಯ್ಯಂಗೇರಿ ಹೊದ್ದೂರು ಮಾರ್ಗವಾಗಿ ಮೂರ್ನಾಡಿಗೆ ತೆರಳಬೇಕಾಗಿದೆ.
ಚೆರಿಯಪರಂಬುವಿನಲ್ಲೂ ರಸ್ತೆ ಜಲಾವೃತವಾಗಿ ನಾಪೋಕ್ಲು-ಕಲ್ಲುಮೊಟ್ಟೆ ರಸ್ತೆ ಸಂಪರ್ಕ ಕಡಿತಗೊಂಡಿದೆ. ಕರಡ ಗ್ರಾಮದ ಉಲ್ಲಾಸ್ ಎಂಬುವರ ಮನೆ ಭಾಗಶಃ ಕುಸಿದಿದ್ದು, ಸ್ಥಳಕ್ಕೆ ನಾಪೋಕ್ಲು ಕಂದಾಯ ಪರಿವೀಕ್ಷಕ ರವಿಕುಮಾರ್, ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಳೆತಾಲೂಕಿನ ಅಬುಬಕ್ಕರ್ (ಹೌಕು) ಎಂಬುವರ ಹೋಟೆಲಿನ ಸೀಟುಗಳು ಹಾರಿಹೋಗಿದ್ದು, ನಷ್ಟ ಉಂಟಾಗಿದೆ.