ಬೆಂಗಳೂರು: ನೆರೆಯ ಮಹಾರಾಷ್ಟ್ರ, ಕೇರಳ ಹಾಗೂ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಕರೊನಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವುದನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ.
ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕಠಿಣ ಕ್ರಮಕೈಗೊಳ್ಳುವ ಚಿಂತನೆ ನಡೆಸಿದ್ದಾರೆ. ಇದಕ್ಕಾಗಿಯೇ ವಿಧಾನ ಸೌಧದಲ್ಲಿ ಸೋಮವಾರ ಸಂಜೆ 5ಕ್ಕೆ ಅಧಿಕಾರಿಗಳು ಮತ್ತು ತಜ್ಞರೊಂದಿಗೆ ಸಭೆ ಕರೆದಿದ್ದಾರೆ.
ಈಗಾಗಲೇ ಹಲವು ನಿರ್ಬಂಧಗಳನ್ನು ಜಾರಿಗೊಳಿಸಿದಾಗ್ಯೂ ಪ್ರಕರಣಗಳ ಸಂಖ್ಯೆ ನಿಯಂತ್ರಣಕ್ಕೆ ಬಂದಿಲ್ಲ. ಮಹಾರಾಷ್ಟ್ರದ ಹಲವೆಡೆ ರಾತ್ರಿ ಕರ್ಫ್ಯೂ ವಿಧಿಸಲಾಗಿದೆ. ಹೀಗಾಗಿ ಸಿಎಂ ಬಿಎಸ್ವೈ ಕರೆದಿರುವ ಸಭೆ ಹೆಚ್ಚಿನ ಮಹತ್ವ ಪಡೆದುಕೊಂಡಿದೆ.
ಕರೊನಾ 2ನೇ ಅಲೆಯ ಭೀತಿ ಬಗ್ಗೆ ತಜ್ಞರು ಎಚ್ಚರಿಕೆ ಗಂಟೆ ಬಾರಿಸಿದ್ದು, ಬಳ್ಳಾರಿ ಸಹಿತ ಕೆಲವು ಜಿಲ್ಲೆಗಳಲ್ಲಿ ರೂಪಾಂತರಿ ಕರೊನಾ ಪ್ರಕರಣಗಳು ಪತ್ತೆಯಾಗಿರುವುದು ಆತಂಕಕ್ಕೆ ಎಡೆಮಾಡಿಕೊಟ್ಟಿದೆ.