ಬೆಂಗಳೂರು: ಎರವಲು ಸೇವೆಯ ಆಧಾರದಲ್ಲಿ ಅನೇಕ ವರ್ಷಗಳಿಂದ ಬಿಬಿಎಂಪಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಜಂಟಿ ಆಯುಕ್ತರು, ಉಪ ಆಯುಕ್ತರು, ಹಿರಿಯ ಹಾಗೂ ಕಿರಿಯ ಆರೋಗ್ಯ ಪರಿವೀಕ್ಷಕರನ್ನು ಮಾತೃ ಇಲಾಖೆಗೆ ವಾಪಸ್ ಕಳುಹಿಸುವ ಸಂಬಂಧ 8 ವಾರಗಳಲ್ಲಿ ಕ್ರಮ ಕೈಗೊಳ್ಳುವಂತೆ ಹೈಕೋರ್ಟ್ ನಿರ್ದೇಶಿಸಿದೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಎ. ಅಮೃತ್ರಾಜ್ ಸಲ್ಲಿಸಿರುವ ಪ್ರತ್ಯೇಕ ಅರ್ಜಿಗಳನ್ನು ನ್ಯಾಯಮೂರ್ತಿ ಸುಜಾತ ಅವರಿದ್ದ ಪೀಠ ಸೋಮವಾರ ವಿಚಾರಣೆ ನಡೆಸಿತು. ಕೆಲ ಕಾಲ ವಾದ ಆಲಿಸಿದ ನ್ಯಾಯಪೀಠ, ಎರವಲು ಅಧಿಕಾರಿಗಳನ್ನು ಅವರ ಮಾತೃ ಇಲಾಖೆಗೆ ವಾಪಸ್ ಕಳುಹಿಸುವ ಸಂಬಂಧ ಅರ್ಜಿದಾರರು ಸಲ್ಲಿಸಿರುವ ಮನವಿಯನ್ನು ಪರಿಗಣಿಸಿ 8 ವಾರಗಳಲ್ಲಿ ಕ್ರಮ ಕೈಗೊಳ್ಳುವಂತೆ ಪಾಲಿಕೆ ಹಾಗೂ ಸರ್ಕಾರಕ್ಕೆ ಸೂಚಿಸಿ ಅರ್ಜಿ ವಿಚಾರಣೆ ಮುಂದೂಡಿತು.
ಅರ್ಜಿದಾರರ ಮನವಿ ಏನು?: ವಿವಿಧ ಇಲಾಖೆಗಳಿಂದ ಎರವಲು ಸೇವೆಯಲ್ಲಿ ಬಂದು ಹತ್ತಾರು ವರ್ಷಗಳಿಂದ ಅವಧಿ ಮೀರಿ ಕರ್ತವ್ಯ ನಿರ್ವಹಿಸುತ್ತಿರುವ ಜಂಟಿ ಆಯುಕ್ತರು, ಉಪ ಆಯುಕ್ತರನ್ನು ಅವರ ಮಾತೃ ಇಲಾಖೆಗೆ ವಾಪಸ್ ಕಳುಹಿಸಬೇಕು. ಆ ಜಾಗಕ್ಕೆ ಐಎಎಸ್, ಕೆಎಎಸ್ ಅಧಿಕಾರಿಗಳನ್ನು ನೇಮಕ ಮಾಡಬೇಕು. ಅದೇ ರೀತಿ ಎರವಲು ಸೇವೆಯಲ್ಲಿರುವ ಹಿರಿಯ ಮತ್ತು ಕಿರಿಯ ಅರೋಗ್ಯ ಪರಿವೀಕ್ಷಕರನ್ನು ಮಾತೃ ಇಲಾಖೆಗೆ ಹಿಂದಿರುಗಿಸಬೇಕು. ಈ ಕುರಿತು 2019ರ ಮೇ 22ರಂದು ನೀಡಿರುವ ಮನವಿಯನ್ನು ಪರಿಗಣಿಸುವಂತೆ ಪಾಲಿಕೆಗೆ ನಿರ್ದೇಶಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.