ಜಿಲ್ಲೆ

ಹೊರ ರಾಜ್ಯದ ವಿದ್ಯಾರ್ಥಿಗಳಿಗೆ ಕೋವಿಡ್ ಪರೀಕ್ಷೆ ಕಡ್ಡಾಯ: ಜಿಲ್ಲಾಧಿಕಾರಿ ಜಿ.ಜಗದೀಶ್

Udupi

ಉಡುಪಿ: ಜಿಲ್ಲೆಯಲ್ಲಿ ಶಿಕ್ಷಣ ಸಂಸ್ಥೆಗಳು ತೆರೆಯುವ ಸಂದರ್ಭ ಹೊರರಾಜ್ಯಗಳಿಂದ ಆಗಮಿಸುವ ವಿದ್ಯಾರ್ಥಿಗಳಿಗೆ ಕಡ್ಡಾಯವಾಗಿ ಕೋವಿಡ್ ಪರೀಕ್ಷೆ ಮಾಡಿಸಬೇಕು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದರು.

ಸೋಮವಾರ ಜಿಲ್ಲಾ ತಜ್ಞರ ಸಮಿತಿ ಸಭೆ ನಡೆಸಿದ ಅವರು, ಯಾವುದೇ ಸಭೆ ಸಮಾರಂಭಗಳಲ್ಲಿ ಮಾರ್ಗಸೂಚಿಯಲ್ಲಿ ನಿಗದಿ ಮಾಡಿರುವುದಕ್ಕಿಂತ ಹೆಚ್ಚಿನ ಜನ ಸೇರದಂತೆ ಅಧಿಕಾರಿಗಳು ಎಚ್ಚರವಹಿಸಬೇಕು. ಪರಿಶೀಲನೆಗೆ ಅಧಿಕಾರಿಯೊಬ್ಬರನ್ನು ನಿಯೋಜಿಸಬೇಕು. ಖಾಸಗಿ ಆಸ್ಪತ್ರೆಗಳಲ್ಲಿ ತೀವ್ರತರ ಕಾಯಿಲೆಗಳಿಗೆ ದಾಖಲಾಗುವ ರೋಗಿಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಬೇಕು ಎಂದರು.

ಜಿಲ್ಲೆಯಲ್ಲಿ 2ನೇ ಹಂತದ ಕೋವಿಡ್ ಹರಡದಂತೆ ಸಾರ್ವಜನಿಕರು ಎಚ್ಚರ ವಹಿಸಬೇಕು. ತಜ್ಞರ ಸಮಿತಿ ನೀಡುವಂತಹ ಸಲಹೆಗಳನ್ನು ಚಾಚೂ ತಪ್ಪದೇ ಪಾಲಿಸಬೇಕು ಎಂದ ಅವರು, ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣಕ್ಕೆ ಸರ್ಕಾರಿ ಮತ್ತು ಖಾಸಗಿ ವೈದ್ಯರು ಉತ್ತಮವಾಗಿ ಸೇವೆ ಸಲ್ಲಿಸಿದ್ದು, ಇದಕ್ಕಾಗಿ ಅವರಿಗೆ ಜಿಲ್ಲಾಡಳಿತದ ಪರವಾಗಿ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದರು.

ಡಿಎಚ್‌ಒ ಡಾ.ಸುಧೀರ್ ಚಂದ್ರ ಸೂಡ, ಜಿಲ್ಲಾ ಕೋವಿಡ್ ನೋಡಲ್ ಅಧಿಕಾರಿ ಡಾ.ಪ್ರಶಾಂತ ಭಟ್, ಡಾ.ಪ್ರೇಮಾನಂದ್ ಹಾಗೂ ತಜ್ಞರ ಸಮಿತಿಯ ವೈದ್ಯರು ಉಪಸ್ಥಿತರಿದ್ದರು.