ಶಿವಮೊಗ್ಗ: ನಮ್ಮ ವ್ಯಕ್ತಿತ್ವವನ್ನು ಉನ್ನತೀಕರಿಸುವ ಶಕ್ತಿ ಸಾಹಿತ್ಯಕ್ಕಿದೆ ಎಂದು ಮಲೆನಾಡು ಅಭಿವೃದ್ಧಿ ಮಂಡಳಿ ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡ ಅಭಿಪ್ರಾಯಪಟ್ಟರು.
ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆಯಿಂದ ಭಾನುವಾರ ಏರ್ಪಡಿಸಿದ್ದ ಸಾಹಿತ್ಯ ಹುಣ್ಣಿಮೆ ಉದ್ಘಾಟಿಸಿ ಮಾತನಾಡಿ, ಕಾರ್ಯಕ್ರಮ ಸರಣಿ ಶಿವಮೊಗ್ಗದ ಅಸ್ಮಿತೆಯಾಗಿ ರೂಪುಗೊಳ್ಳುತ್ತಿದೆ. ಜನರ ಬಳಿಗೆ ಸಾಹಿತ್ಯ, ಸಾಂಸ್ಕೃತಿಕ ವಾತಾವರಣವನ್ನು ತಲುಪಿಸುವ ಕಾರ್ಯ ಎರಡು ದಶಕಗಳಿಂದ ನಡೆಸಿಕೊಂಡು ಬರುತ್ತಿರುವುದು ವಿಶೇಷ ಎಂದರು.
ಸೂಡಾ ಅಧ್ಯಕ್ಷ ಎಚ್.ಎಸ್.ಸುಂದರೇಶ್ ಮಾತನಾಡಿ, ಸದಾ ಕ್ರಿಯಾಶೀಲ ಚಟುವಟಿಕೆ ನಡೆಸುವಂತಹ ಸಾಹಿತ್ಯ ಯೋಜನೆಗಳ ಅಭಿವೃದ್ಧಿಗೆ ನಾವೆಲ್ಲರೂ ಬದ್ಧ ಎಂದು ಹೇಳಿದರು.
ಮುಖ್ಯಮಂತ್ರಿ ಸೇವಾ ಪದಕಕ್ಕೆ ಭಾಜನರಾದ ಮಂಡಗದ್ದೆ ಆರ್‌ಎಫ್‌ಒ ಎಂ.ಪಿ.ಆದರ್ಶ ಅವರನ್ನು ಸನ್ಮಾನಿಸಲಾಯಿತು. ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಎಸ್.ಕೆ.ಮರಿಯಪ್ಪ, ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ಅಧ್ಯಕ್ಷ ಡಿ.ಮಂಜುನಾಥ, ಡಿಸಿಸಿ ಬ್ಯಾಂಕ್ ನಿರ್ದೇಶಕ ಮಹಾಲಿಂಗಯ್ಯ ಶಾಸ್ತ್ರಿ, ವರದಾಂಜನೇಯ ಸ್ವಾಮಿ ದೇವಾಲಯ ಸಮಿತಿ ಅಧ್ಯಕ್ಷ ವಿ.ಟಿ.ಅರುಣ್, ಪ್ರಮುಖರಾದ ಬಿ.ಚನ್ನಬಸಪ್ಪ ಇದ್ದರು.