ಜಿಲ್ಲೆ

ಒತ್ತಡ ನಿವಾರಣೆಗೆ ಕ್ರೀಡಾಕೂಟ ಪೂರಕ: ಜಿಲ್ಲಾಧಿಕಾರಿ ಡಾ.ಕುಮಾರ ಅಭಿಮತ

ಮಂಡ್ಯ: ಇಲಾಖೆ ಅಧಿಕಾರಿಗಳು ಹಾಗೂ ಮಾಧ್ಯಮದವರು ಸದಾ ಒತ್ತಡದಲ್ಲಿ ಕೆಲಸ ನಿರ್ವಹಿಸುತ್ತಿರುತ್ತಾರೆ. ಆದರೂ ದೇಹಕ್ಕೆ ವಿಶ್ರಾಂತಿ ಅಗತ್ಯವಾಗಿರುತ್ತದೆ. ಆದ್ದರಿಂದ ಇದಕ್ಕೆ ಕ್ರೀಡಾಕೂಟ ಪೂರಕವಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಹೇಳಿದರು.

ನಗರದ ಪಿಇಟಿ ಕ್ರೀಡಾಂಗಣದಲ್ಲಿ ಸ್ವಾತಂತ್ರೊೃೀತ್ಸವ ದಿನಾಚರಣೆ ಅಂಗವಾಗಿ ಶನಿವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ್ದ ಸೌಹಾರ್ದಯುತ ಕ್ರಿಕೆಟ್ ಪಂದ್ಯಾವಳಿ ಉದ್ಘಾಟಿಸಿ ಮಾತನಾಡಿದ ಅವರು, ಆರೋಗ್ಯಕರ ದೇಹ ಮಾತ್ರ ಉತ್ತಮ ಮನಸ್ಸನ್ನು ರೂಪಿಸಲು ಸಾಧ್ಯ. ಮನಸ್ಸು ಚೆನ್ನಾಗಿರಬೇಕು ಎಂದರೆ ದೇಹ ಕೂಡ ಚೆನ್ನಾಗಿರಬೇಕು. ಈ ಹಿನ್ನೆಲೆಯಲ್ಲಿ ಕ್ರೀಡಾ ತುಂಬಾ ಅಗತ್ಯವಾಗಿದೆ ಎಂದು ಹೇಳಿದರು.

ಸ್ವಾತಂತ್ರೊೃೀತ್ಸವದ ಅಂಗವಾಗಿ ಕ್ರಿಕೆಟ್ ಪಂದ್ಯಾವಳಿ ಏರ್ಪಡಿಸುವ ಕುರಿತು ಚರ್ಚೆ ನಡೆಯಿತು. ಈ ಬಗ್ಗೆ ಪೊಲೀಸ್ ಅಧೀಕ್ಷಕರು ಮತ್ತು ಜಿ.ಪಂ ಸಿಇಒ ಜತೆ ಚರ್ಚೆ ನಡೆಸಿದ ಬಳಿಕ ಕ್ರೆಡಾ ಇಲಾಖೆ ಸಹಾಯಕ ನಿರ್ದೇಶಕರಿಗೆ ಅಗತ್ಯ ಸಿದ್ಧತೆ ನಡೆಸುವಂತೆ ಸೂಚನೆ ನೀಡಲಾಗಿತ್ತು. ಅದರಂತೆ ಕಂದಾಯ, ಜಿಲ್ಲಾ ಪಂಚಾಯಿತಿ, ಆರೋಗ್ಯ ಇಲಾಖೆ, ನಗರಸಭೆ, ಪತ್ರಕರ್ತರ ಸಂಘ, ಪೊಲೀಸ್ ಇಲಾಖೆ ತಂಡಗಳ ನಡುವೆ ಕ್ರಿಕೆಟ್ ಪಂದ್ಯಾವಳಿ ಏರ್ಪಡಿಸಲಾಗಿತ್ತು. ವಿಜೇತ ತಂಡಕ್ಕೆ ಸ್ವಾತಂತ್ರೊೃೀತ್ಸವ ದಿನದಂದು ಪ್ರಶಸ್ತಿ ಪತ್ರ ವಿತರಿಸಲಾಗುವುದು ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್ ಮಾತನಾಡಿ, ಕ್ರೀಡೆಯಲ್ಲಿ ಸೋಲು ಗೆಲುವು ಮುಖ್ಯವಲ್ಲ. ಕ್ರೀಡಾ ಸ್ಪೂರ್ತಿಯಿಂದ ಭಾಗವಹಿಸುವಿಕೆ ಮುಖ್ಯವಾಗಿರುತ್ತದೆ. ಸಣ್ಣ ಪುಟ್ಟ ವಿಚಾರಗಳಿಗೆ ಭಿನ್ನಾಭಿಪ್ರಾಯಗಳು ಬರಬಹುದು. ಆದರೆ ಅದನ್ನು ದೊಡ್ಡದು ಮಾಡಬಾರದು. ಎಲ್ಲರೂ ತೀರ್ಪುಗಾರರ ತೀರ್ಪನ್ನು ಒಪ್ಪಿಕೊಳ್ಳಬೇಕು. ಖುಷಿಯಿಂದ ಆಟವಾಡಿ ಎಲ್ಲರೂ ಗೆದ್ದಿದ್ದೇವೆ ಎಂಬ ಆಶಯವನ್ನಿಟ್ಟುಕೊಂಡು ಹೋಗಬೇಕು ಎಂದು ಸಲಹೆ ನೀಡಿದರು.

ಜಿಪಂ ಸಿಇಒ ಶೇಖ್ ತನ್ವೀರ್ ಆಸಿಫ್, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ಸಿ.ಮಂಜುನಾಥ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಓಂಪ್ರಕಾಶ್ ಇತರರಿದ್ದರು. ಟೂರ್ನಿಯಲ್ಲಿ ಆರೋಗ್ಯ ಇಲಾಖೆ ಪ್ರಥಮ ಹಾಗೂ ಪೊಲೀಸ್ ಇಲಾಖೆ ದ್ವಿತೀಯ ಸ್ಥಾನ ಪಡೆದವು.