ಅರಕಲಗೂಡು: ತಾಲೂಕಿನ ಹಂಪಾಪುರ ಗ್ರಾಮದಲ್ಲಿ ಸಾಲಬಾಧೆ ತಾಳಲಾರದೆ ವಿಷ ಸೇವಿಸಿ ಆಸ್ಪತ್ರೆಗೆ ದಾಖಲಾಗಿದ್ದ ರೈತ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.
ಗ್ರಾಮದ ಜಯಣ್ಣ (48) ಮೃತರು. ಇವರು ಒಂದು ಎಕರೆ ಜಮೀನಿನಲ್ಲಿ ಮುಸುಕಿನ ಜೋಳ ಬಿತ್ತನೆ ಮಾಡಿದ್ದರು. ಅತಿಯಾದ ಮಳೆಗೆ ಬೆಳೆ ಕೈಕೊಟ್ಟಿತ್ತು. ಬೆಳೆಗಾಗಿ ವಿವಿಧ ಸಂಘ, ಸಂಸ್ಥೆಗಳಲ್ಲಿ 1.45 ಲಕ್ಷ ರೂ. ಸಾಲ ಮಾಡಿದ್ದರು. ಬೆಳೆ ನಾಶವಾದ ಕಾರಣ ಸಾಲ ತೀರಿಸಲಾಗದೆ ಮನನೊಂದು ಆ.25ರಂದು ಜಮೀನು ಬಳಿ ವಿಷ ಸೇವಿಸಿ ಅಸ್ವಸ್ಥಗೊಂಡಿದ್ದರು. ತಕ್ಷಣ ಕೊಣನೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಹಾಸನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಸೋಮವಾರ ರಾತ್ರಿ ಮೃತಪಟ್ಟಿದ್ದಾರೆ. ಇವರಿಗೆ ಪತ್ನಿ, ಪುತ್ರ, ಪುತ್ರಿ ಇದ್ದಾರೆ. ಕೊಣನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.