ಜಿಲ್ಲೆ

ಕಾಂಗ್ರೆಸ್ ಸರ್ಕಾರಕ್ಕೆ ರೈತರ ಹಿತಕ್ಕಿಂತ ರಾಜಕೀಯವೇ ಮುಖ್ಯ: ಬಿಜೆಪಿ ಜಿಲ್ಲಾಧ್ಯಕ್ಷ ಸಿ.ಪಿ.ಉಮೇಶ್ ಟೀಕೆ

ಮಂಡ್ಯ: ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ರೈತರ ಹಿತ ಬೇಕಾಗಿಲ್ಲ. ರಾಜಕೀಯ ಮಾಡುವ ಉದ್ದೇಶದಿಂದ ಕೆಆರ್‌ಎಸ್ ಡ್ಯಾಂನಿಂದ ತಮಿಳುನಾಡಿಗೆ ನೀರು ಹರಿಸುವ ಮೂಲಕ ಕಾವೇರಿ ಪ್ರಾಂತ್ಯದ ರೈತರನ್ನು ಬಲಿಕೊಡಲು ಮುಂದಾಗಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸಿ.ಪಿ.ಉಮೇಶ್ ಟೀಕಿಸಿದರು.

ನಗರದ ಬಿಜೆಪಿ ಕಚೇರಿಯಲ್ಲಿ ಮಂಗಳವಾರ ಆಯೋಜಿಸಿದ್ದ ಮತದಾರರ ಚೇತನ ಮಹಾಭಿಯಾನ ಕಾರ್ಯಕ್ರಮ ಹಾಗೂ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದ ಸಂಕಷ್ಟ ಪರಿಸ್ಥಿತಿಯನ್ನು ಕಾವೇರಿ ನಿರ್ವಹಣಾ ಪ್ರಾಧಿಕಾರಕ್ಕೆ ಮನವರಿಕೆ ಮಾಡಿಕೊಡುವಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಈ ಬಾರಿ ನೀರಿನ ಕೊರತೆ ಉಂಟಾಗಿದೆ. ಇಂತಹ ಸಂದರ್ಭದಲ್ಲಿ ವಸ್ತುಸ್ಥಿತಿಯನ್ನು ಮನವರಿಕೆ ಮಾಡಿಕೊಡುವಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸಂಪೂರ್ಣ ವಿಫಲರಾಗಿದ್ದಾರೆ. ಬದಲಿಗೆ ಸಿಎಂ, ಡಿಸಿಎಂ ಸೇರಿದಂತೆ ಸಚಿವರು ಆಪರೇಷನ್ ಹಸ್ತ ಕಾರ್ಯಾಚರಣೆಯಲ್ಲಿ ಮುಳುಗಿ ಹೋಗಿದ್ದಾರೆ. ರೈತರ ಹಿತ ಅವರಿಗೆ ಬೇಕಾಗಿಲ್ಲ ಎಂದು ವಾಗ್ದಾಳಿ ನಡೆಸಿದರು.

ಈ ಹಿಂದೆ ಜಲಸಂಪನ್ಮೂಲ ಸಚಿವರಾಗಿದ್ದ ಬಸವರಾಜ ಬೊಮ್ಮಾಯಿ ಹಾಗೂ ಎಂ.ಬಿ.ಪಾಟೀಲ್ ಅವರು ಕಾವೇರಿ ನದಿ ಪ್ರಾಧಿಕಾರದ ಸಭೆ ಅಥವಾ ಸುಪ್ರೀಂ ಕೋರ್ಟಿನಲ್ಲಿ ಕಾವೇರಿ ನದಿ ನೀರು ವಿಚಾರಣೆಗೆ ಬಂದಾಗಲೆಲ್ಲಾ ರಾಜ್ಯದ ಪರ ಕಾನೂನು ತಂಡದೊಂದಿಗೆ ಇದ್ದು, ಅವರಿಗೆ ಸರಿಯಾದ ಮಾಹಿತಿ ನೀಡುತ್ತಿದ್ದರು. ಆದರೆ ಈ ಕೆಲಸವನ್ನು ಜಲಸಂಪನ್ಮೂಲ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮರೆತು ಕೇವಲ ಆಪರೇಷನ್ ಹಸ್ತ ಮಾಡಲು ಟೊಂಕ ಕಟ್ಟಿ ನಿಂತಿದ್ದಾರೆ ಎಂದು ಟೀಕಿಸಿದರು.

ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಬಸವರಾಜು, ಕಾಂತರಾಜು, ಜಿಲ್ಲಾ ವಕ್ತಾರ ಸಿ.ಟಿ.ಮಂಜುನಾಥ್, ಮಾಧ್ಯಮ ವಕ್ತಾರ ನಾಗಾನಂದ್, ಮುಖಂಡ ಪೈಲ್ವಾನ್ ಮಹದೇವು ಇದ್ದರು.