ಜಿಲ್ಲೆ

ಕೂಲಿ ಕಾರ್ಮಿಕರ ಸಮಸ್ಯೆ ಬಗೆಹರಿಸಿ: ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಮಂಡ್ಯ: ಕೃಷಿ ಕೂಲಿ ಕಾರ್ಮಿಕರು ಸಮಸ್ಯೆಗಳನ್ನು ಪರಿಹರಿಸಲು ಸಂಬಂಧಿಸಿದ ಮನವಿಗಳನ್ನು ಜಿಲ್ಲಾಡಳಿತಕ್ಕೆ ಸಲ್ಲಿಸಿದ್ದು, ನಿಯಮಾನುಸಾರ ಪರಿಹರಿಸಬಹುದಾದ ಸಮಸ್ಯೆಗಳನ್ನು ಶೀಘ್ರವಾಗಿ ಇತ್ಯರ್ಥಗೊಳಿಸಿ ವರದಿ ನೀಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಸೂಚಿಸಿದರು.

ನಗರದ ಜಿಲ್ಲಾ ಪಂಚಾಯಿತಿ ಕಚೇರಿಯ ಕಾವೇರಿ ಸಭಾಂಗಣದಲ್ಲಿ ಅಧಿಕಾರಿಗಳು ಹಾಗೂ ಸಂಘಟನೆಗಳ ಮುಖಂಡರೊಂದಿಗೆ ಆಯೋಜಿಸಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ವಸತಿ ಹಾಗೂ ನಿವೇಶನ ರಹಿತ ಬಡ ಕುಟುಂಬಗಳಿಗೆ ಗ್ರಾಮೀಣ ಭಾಗದಲ್ಲಿ ನಿವೇಶನ ಒದಗಿಸಲು ಸರ್ಕಾರಿ ಭೂಮಿ ಇದ್ದಲ್ಲಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸಭೆ ನಡೆಸಿ ಕ್ರಮ ಕೈಗೊಳ್ಳಿ ಎಂದರು.

ಅಂತೆಯೇ ಗ್ರಾಮಗಳಲ್ಲಿ ಹಕ್ಕು ಪತ್ರ, ನಿವೇಶನ ಕುರಿತು ಸಮಸ್ಯೆಗಳಿದ್ದಲ್ಲಿ ತಹಸೀಲ್ದಾರ್, ತಾಲೂಕು ಪಂಚಾಯಿತಿ ಇಒ ಹಾಗೂ ಶಾಸಕರ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ, ಸಮಸ್ಯೆ ಪರಿಹಾರವಾಗದಿದ್ದಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಗಮನಕ್ಕೆ ತನ್ನಿ ಎಂದು ತಿಳಿಸಿದರು.

ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯಡಿ 100 ದಿನ ಕೂಲಿ ಕೊಡಬೇಕು ಎಂಬ ನಿಯಮವಿದ್ದರೂ, ಕೇಂದ್ರ ಸರ್ಕಾರದಿಂದ ನಿಗದಿಪಡಿಸುವ ಮಾನವ ದಿನಗಳಿಗೆ ಅನುದಾನ ಬಿಡುಗಡೆಯಾಗುತ್ತದೆ. 100 ದಿನವಿದೆ ಎಂದು ಕೆಲಸ ಕೊಟ್ಟು ಕೂಲಿ ಪಾವತಿಗೆ ಹಣ ಬಿಡುಗಡೆಯಾಗದಿದ್ದರೆ ಮುಂದಿನ ದಿನಗಳಲ್ಲಿ ಕಷ್ಟವಾಗುತ್ತದೆ. ಈ ಕುರಿತಂತೆ ಪಂಚಾಯತ್ ರಾಜ್ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಚರ್ಚಿಸಿ ನಂತರ ಈ ಸಮಸ್ಯೆ ಪರಿಹರಿಸಲಾಗುವುದು ಎಂದರು.

ನರೇಗಾ ಕೆಲಸಗಳಿಗೆ ಕಡಿಮೆ ಹಾಗೂ ಹೆಚ್ಚಿನ ಬೇಡಿಕೆ ಇರುವ ತಾಲೂಕುಗಳನ್ನು ಪಟ್ಟಿ ಮಾಡಿಕೊಂಡು ಯಾವುದೇ ತೊಂದರೆ ಇಲ್ಲದ ರೀತಿ ಸರಿದೂಗಿಸಿ. ನರೇಗಾ ಯೋಜನೆಯಡಿ ಕೂಲಿ ಕಾರ್ಮಿಕರಿಗೆ ಆದ್ಯತೆ ನೀಡಬೇಕು. ಅಂತೆಯೇ ಯೋಜನೆಯಲ್ಲಿ ಗುತ್ತಿಗೆದಾರರಿಗೆ ಕಾಮಗಾರಿ ರೂಪದಲ್ಲಿ ನೀಡುವುದನ್ನು ನಿಲ್ಲಿಸಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಕೃಷಿ ಕೂಲಿ ಕಾರ್ಮಿಕರಿಗೆ ಯಾವುದೇ ಆಧಾರವಿಲ್ಲದೆ ಬ್ಯಾಂಕ್ ಗಳಿಂದ 2 ಲಕ್ಷ ರೂ ಸಾಲ ನೀಡಬೇಕು ಎನ್ನುವ ಚರ್ಚೆ ನಡೆದ ಸಂದರ್ಭದಲ್ಲಿ ಸ್ಪಂದಿಸಿದ ಸಚಿವ ಎನ್.ಚಲುವರಾಯಸ್ವಾಮಿ, ಬ್ಯಾಂಕ್ ವಿಷಯಗಳಿಗೆ ಸಂಬಂಧಿಸಿದಂತೆ ವ್ಯಕ್ತಿವಾರು ಮಾಹಿತಿ ನೀಡಿ. ಆ ನಂತರ ಸಂಬಂಧಿಸಿದ ಬ್ಯಾಂಕ್ ಅಧಿಕಾರಿಗಳೊಂದಿಗೆ ಚರ್ಚಿಸುವುದು ಸುಲಭ. ಈ ಹಿನ್ನೆಲೆಯಲ್ಲಿ ಬ್ಯಾಂಕ್ ವಿಷಯಗಳಿಗೆ ಪ್ರತ್ಯೇಕವಾಗಿ ಸಭೆ ನಡೆಸುವುದಾಗಿ ತಿಳಿಸಿದರು.

ಜಿಲ್ಲಾಧಿಕಾರಿ ಡಾ.ಕುಮಾರ ಮಾತನಾಡಿ, ಮಂಡ್ಯ ನಗರ ವ್ಯಾಪ್ತಿಯಲ್ಲಿ 2000ಕ್ಕೂ ಹೆಚ್ಚು ಜನ ನಿವೇಶನ ರಹಿತ ಬಡವರಿದ್ದು, ಅವರಿಗೆ ನಿವೇಶನ ಒದಗಿಸಲು 35 ಎಕರೆ ಭೂಮಿ ಬೇಕಿದೆ. ಆದರೆ ಮಂಡ್ಯ ನಗರ ವ್ಯಾಪ್ತಿಯಲ್ಲಿ ಇರುವುದಿಲ್ಲ. 10 ಕಿ.ಮೀ ವ್ಯಾಪ್ತಿಗೆ ಹೋದರೆ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಬರುತ್ತದೆ. ಈ ಹಿನ್ನೆಲೆಯಲ್ಲಿ ವಿಶೇಷ ಪ್ರಕರಣ ಎಂದು ಪರಿಗಣಿಸಿ ನಿವೇಶನ ಒದಗಿಸಲು ಸಮಸ್ಯೆ ಪರಿಹರಿಸಿಕೊಡುವಂತೆ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ. ಇದಲ್ಲದೆ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸಮುದಾಯ ಆರೋಗ್ಯ ಕೇಂದ್ರಕ್ಕೆ ಮೇಲ್ದರ್ಜೆಗೆ ಏರಿಸುವುದು ಕುರಿತಂತೆ ಸರ್ಕಾರದ ನಿಯಮಗಳಿಗೆ ಅನುಸಾರವಾಗಿ ಕ್ರಮ ಕೈಗೊಳ್ಳಬೇಕಿದೆ ಎಂದು ಮಾಹಿತಿ ನೀಡಿದರು.

ಜಿಪಂ ಸಿಇಒ ಕೆ.ಆರ್.ನಂದಿನಿ ಮಾತನಾಡಿ, ಜಿಲ್ಲೆಗೆ ಕಳೆದ ವರ್ಷಗಳಲ್ಲಿ ನರೇಗಾ ಯೋಜನೆಯಡಿ 30 ಲಕ್ಷ ಮಾನವ ದಿನಗಳನ್ನು ನೀಡಲಾಗಿತ್ತು. ಈ ಬಾರಿ 50 ಲಕ್ಷ ಬೇಡಿಕೆಯ ಪ್ರಸ್ತಾವನೆಯನ್ನು ಕಳುಹಿಸಿಕೊಡಲಾಗಿತ್ತು. ಆದರೆ ಈ ಬಾರಿ ನೀಡಿರುವುದು 19 ಲಕ್ಷ ಎಂದು ಸಭೆಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ವಿವಿಧ ಸಂಘಟನೆಗಳ ಮುಖ್ಯಸ್ಥರು ಉಪಸ್ಥಿತರಿದ್ದರು.