ಜಿಲ್ಲೆ

ಮಾನವೀಯ ಮೌಲ್ಯ ಬೆಳೆಸಿಕೊಳ್ಳಿ

ವಸಂತಕುಮಾರ್ ಬಿ

ವಿರಾಜಪೇಟೆ: ವಿದ್ಯಾರ್ಥಿಗಳು ಶೈಕ್ಷನಿಕ ಹಂತದಲ್ಲೇ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು ಎಂದು ತಿತಿಮತಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಚಾರ್ಲ್ಸ್ ಡಿಸೋಜಾ ಸಲಹೆ ನೀಡಿದರು.

ವಿರಾಜಪೇಟೆ ಪಟ್ಟಣದ ಸೇಂಟ್ ಆನ್ಸ್ ಪದವಿ ಕಾಲೇಜಿನಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಎನ್ನೆಸ್ಸೆಸ್ ಹಾಗೂ ಯುವ ರೆಡ್ ಕ್ರಾಸ್ ಘಟಕವನ್ನು ಉದ್ಘಾಟಿಸಿ ಮಾತನಾಡಿದರು.

ವಿದ್ಯಾರ್ಥಿಗಳು ಯಾವುದೇ ಕೆಲಸವನ್ನು ಸ್ವಇಚ್ಛೆಯಿಂದ ಮಾಡಬೇಕು. ಸ್ವಇಚ್ಛೆಯಿಂದ ಮಾಡುವ ಕಾರ್ಯ ಶ್ಲಾಘನೀಯವಾಗಿರುತ್ತದೆ. ಆ ನಿಟ್ಟಿನಲ್ಲಿ ಎನ್‌ಎಸ್‌ಎಸ್ ಮತ್ತು ರೆಡ್ ಕ್ರಾಸ್‌ನ ಸಾಮಾಜಿಕ ಕಾರ್ಯಗಳು ಪ್ರಮುಖವಾಗಿದೆ ಎಂದು ಅಭಿಪ್ರಾಯಪಟ್ಟರು.

ಸಮಾರಂಭದ ಸಾನ್ನಿಧ್ಯ ವಹಿಸಿದ್ದ ಸಂತ ಅನ್ನಮ್ಮ ಪಿಯು ಕಾಲೇಜಿನ ಪ್ರಾಂಶುಪಾಲ ಹಾಗೂ ಪದವಿ ಕಾಲೇಜಿನ ವ್ಯವಸ್ಥಾಪಕ ರೆ.ಫಾ. ಮದಲೈ ಮುತ್ತು ಅವರು ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಭೋದಿಸಿ ಮಾತನಾಡಿ, ಮಕ್ಕಳು ವಿದ್ಯಾರ್ಥಿ ಜೀವನದಲ್ಲೇ ಸೇವಾ ಮನೋಭಾವ ಬೆಳೆಸಿಕೊಳ್ಳಬೇಕು. ಪರರ ಸೇವೆಯಲ್ಲಿ ತೊಡಗಿಸಿಕೊಂಡು ನಿಸ್ವಾರ್ಥ ಸೇವೆಗೆ ಬದ್ಧರಾಗಿರಬೇಕು. ಪರಸ್ಪರ ಸಹಕಾರ, ಪ್ರೀತಿ, ವಿಶ್ವಾಸವು ಉತ್ತಮ ವ್ಯಕ್ತಿಯನ್ನಾಗಿ ಮಾಡುತ್ತದೆ. ಮಾನವೀಯ ಆದರ್ಶಗಳನ್ನು ಬೆಳೆಸಿ ಸಮಾಜ ಹಾಗೂ ರಾಷ್ಟ್ರಕ್ಕೆ ಕೊಡುಗೆ ನೀಡಿ ಎಂದು ಸಲಹೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪದವಿ ಕಾಲೇಜಿನ ಪ್ರಾಂಶುಪಾಲ ತೃಪ್ತಿ ಬೋಪಣ್ಣ ಮಾತನಾಡಿ, ಕಾಲೇಜಿನ ಎನ್ನೆಸ್ಸೆಸ್ ಘಟಕ ಹಾಗೂ ಯುವ ರೆಡ್ ಕ್ರಾಸ್ ಘಟಕಗಳು ಪ್ರಮುಖ ಘಟಕಗಳಾಗಿದ್ದು, ವಿದ್ಯಾರ್ಥಿಗಳು ಈ ಘಟಕಗಳಲ್ಲಿ ಕ್ರಿಯಾಶೀಲರಾಗಿ ಪಾಲ್ಗೊಂಡು ಸಂಸ್ಥೆಯ ಅಭಿವೃದ್ಧಿಗೆ ಶ್ರಮಿಸಬೇಕು ಎಂದರು. ಕಾಲೇಜಿನ ಎನ್‌ಎಸ್ಸೆಸ್ ಅಧಿಕಾರಿಗಳಾದ ಬಿ.ಎನ್.ಶಾಂತಿಭೂಷಣ್ ಪ್ರಾಸ್ತಾವಿಕವಾಗಿ ಮಾತನಾಡಿದರು.

ವೇದಿಕೆಯಲ್ಲಿ ಕಾಲೇಜಿನ ಐಕ್ಯುಎಸಿ ಸಂಚಾಲಕಿ ಬಿ.ಡಿ.ಹೇಮಾ, ಯುವ ರೆಡ್ ಕ್ರಾಸ್ ಘಟಕದ ಅಧಿಕಾರಿ ವಿಲೀನ ಗೋನ್ಸಾಲ್ವೇಸ್ ಇತರರು ಉಪಸ್ಥಿತರಿದ್ದರು. ರಾಷ್ಟ್ರೀಯ ಭಾವೈಕ್ಯತಾ ಶಿಬಿರ ಹಾಗೂ ಜಿಲ್ಲಾ ಮಟ್ಟದ ಮ್ಯಾರಥಾನ್‌ನಲ್ಲಿ ಭಾಗವಹಿಸಿದ ಎನ್‌ಎಸ್‌ಎಸ್ ವಿದ್ಯಾರ್ಥಿಗಳಿಗೆ ಪ್ರಶಂಸನಾ ಪ್ರಮಾಣ ಪತ್ರವನ್ನು ನೀಡಲಾಯಿತು. ಈ ಸಂದರ್ಭದಲ್ಲಿ ಉಪನ್ಯಾಸಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.