ಬೆಂಗಳೂರು: ಮಾಂಡೌಸ್ ಚಂಡಮಾರುತ ಪರಿಣಾಮ ರಾಜ್ಯದಲ್ಲಿ ಎರಡು ದಿನಗಳಿಂದ ಸುರಿಯುತ್ತಿದ್ದ ಮಳೆ ತುಸು ತಗ್ಗಿದ್ದರೂ, ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿಯಿಂದ ಮತ್ತೆ ಮಳೆ ಹೆಚ್ಚಾಗುವ ಸಾಧ್ಯತೆ ಇದೆ.
ಸೋಮವಾರವೂ ಬೆಂಗಳೂರು ಸೇರಿ ರಾಜ್ಯದ ವಿವಿಧ ಭಾಗಗಳಲ್ಲಿ ವರ್ಷಧಾರೆಯಾಗಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಾಮರಾಜನಗರ, ಚಿಕ್ಕಮಗಳೂರು, ಕೊಡಗು, ಮೈಸೂರು ಮತ್ತು ಶಿವಮೊಗ್ಗದಲ್ಲಿ ಮಂಗಳವಾರ (ಡಿ.13) ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ರಾಮನಗರ, ತುಮಕೂರು, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿಯಲ್ಲಿ ಮುಂದಿನ 24 ಗಂಟೆ ಗುಡುಗು ಮಿಂಚು ಸಹಿತ ಮಳೆ ಬೀಳಲಿದೆ.
ಮುಂದಿನ ಎರಡು ದಿನ ಮೋಡ ಕವಿದ ವಾತಾವರಣ ಮುಂದುವರಿಯಲಿದೆ. ಚಂಡಮಾರುತ ಪ್ರಭಾವ, ಮೋಡ ಕವಿದ ವಾತಾವರಣ ಹಾಗೂ ತಾಪಮಾನ ಏರಿಳಿತದಿಂದ ತೀವ್ರಗೊಂಡಿರುವ ಶೀತಗಾಳಿ ಜತೆಗೆ ಚಳಿಯೂ ಇರಲಿದೆ.