ಶಬಿಕ್ ಅಹಮ್ಮದ್ ಶೇಖ್  
ದಕ್ಷಿಣ ಕನ್ನಡ

ಕಳ್ಳತನಕ್ಕೆಂದೇ ತಮಿಳುನಾಡಿನಿಂದ ಬರುತ್ತಿದ್ದ ಆರೋಪಿ ಬಂಧನ

ಮಂಗಳೂರು: ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕೆಂಜಾರು ಗ್ರಾಮದ ಶ್ರೀ ರಾಮಾಂಜನೇಯ ದೇವಸ್ಥಾನದ ಕಾಣಿಕೆ ಹುಂಡಿಯ ಹಣ ಕಳವು ಪ್ರಕರಣದಲ್ಲಿ ಅಂತಾರಾಜ್ಯ ಆರೋಪಿಯನ್ನು ಬಜಪೆ ಪೊಲೀಸರು ಬಂಧಿಸಿದ್ದಾರೆ.
ಕೆಂಜಾರು ಗ್ರಾಮದ ಶ್ರೀ ರಾಮಾಂಜನೇಯ ದೇವಸ್ಥಾನದ ಬಾಗಿಲನ್ನು ಮುರಿದು ದೇವಸ್ಥಾನಕ್ಕೆ ಒಳನುಗ್ಗಿ, 3 ಕಾಣಿಕೆ ಹುಂಡಿಗಳಲ್ಲಿದ್ದ ಸುಮಾರು 25,000 ರೂ. ಕಳ್ಳತನವಾಗಿರುವ ಬಗ್ಗೆ ದೂರು ದಾಖಲಾಗಿತ್ತು.
ಈ ಹಿನ್ನೆಲೆಯಲ್ಲಿ ಆರೋಪಿಯ ಪತ್ತೆಗೆ ತಂಡವನ್ನು ರಚಿಸಿದ ಪೊಲೀಸರು ಆರೋಪಿ ತಮಿಳುನಾಡಿನ ಶಬಿಕ್ ಅಹಮ್ಮದ್ ಶೇಖ್ ಅಬ್ದುಲ್ ಖಾದರ್(25) ಎಂಬಾತನನ್ನು ಬಜಪೆ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ವಿಚಾರಣೆ ವೇಳೆ ಆತ ಕೆಂಜಾರು ಶ್ರೀ ರಾಮಾಂಜನೇಯ ದೇವಸ್ಥಾನದ ಕಾಣಿಕೆ ಹುಂಡಿಯಲ್ಲಿದ್ದ ಹಣವನ್ನು ಕಳ್ಳತನ ಮಾಡಿರುವುದಾಗಿ ಒಪ್ಪಿಕೊಂಡಿದ್ದು, ಕಳವಾಗಿದ್ದ ಕಾಣಿಕೆ ಹುಂಡಿಯನ್ನು ವಶಕ್ಕೆ ಪಡೆಯಲಾಗಿದೆ.
ಈತ ಉಡುಪಿ ಜಿಲ್ಲೆಯ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ದಾಖಲಾದ ಕಳವು ಪ್ರಕರಣದ ಆರೋಪಿ. ಅಲ್ಲದೆ ಇದೇ ವರ್ಷದ ಫೆಬ್ರವರಿ ತಿಂಗಳ ಕೊನೆಯ ವಾರದಲ್ಲಿ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ ತೋಕೂರು-ಜೊಕಟ್ಟೆ ಪ್ರದೇಶದಲ್ಲಿ ಪ್ಯಾಷನ್ ಪ್ರೋ ಮೋಟಾರ್ ಸೈಕಲ್ ಕಳವು ಪ್ರಕರಣದಲ್ಲೂ ಭಾಗಿಯಾಗಿದ್ದಾನೆ. ಆರೋಪಿಯು ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕಳ್ಳತನ ಮಾಡಿ, ಮತ್ತೆ ತಮಿಳುನಾಡಿಗೆ ತೆರಳಿ ತಪ್ಪಿಸಿಕೊಳ್ಳುವ ಪ್ರವೃತ್ತಿ ಹೊಂದಿದವನಾಗಿದ್ದಾನೆ.
ಬಜಪೆ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಬಾಲಕೃಷ್ಣ ಮತ್ತು ಠಾಣಾ ಕ್ರೈಂ ಸಿಬ್ಬಂದಿಗಳಾದ ನೂತನ್, ರಾಜೇಶ್ ಮತ್ತು ಪ್ರಕಾಶ್ ರವರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.