ಬಂಟ್ವಾಳ ಪುರಸಭೆಯ ನೀರು ಶುದ್ದೀಕರಣ ಘಟಕಕ್ಕೆ ಜಿಲ್ಲಾ ಯೋಜನಾ ಕೋಶದ ಯೋಜನಾ ನಿರ್ದೇಶಕ ಸಂತೋಷ್ ಕುಮಾರ್ ಭೇಟಿ ನೀಡಿ ಪರಿಶೀಲಿಸಿದರು. ತೇಜಮೂರ್ತಿ, ಪುರಂದರ, ಪ್ರಸಾದ್, ತೀರ್ಥಪ್ರಸಾದ್ ಮತ್ತಿತರರಿದ್ದರು. 
ದಕ್ಷಿಣ ಕನ್ನಡ

ಬಂಟ್ವಾಳ ನೀರು ಶುದ್ಧೀಕರಣ ಘಟಕ ಸ್ವಚ್ಛತೆ

ಶಾಸಕರ ಸೂಚನೆ ಮೇರೆಗೆ ಕ್ರಮ

ಬಂಟ್ವಾಳ: ಪುರಸಭಾ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಪೂರೈಕೆ ಹಾಗೂ ನಿರ್ವಹಣೆಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ನಿರಂತರ ದೂರುಗಳು ಕೇಳಿಬರುತ್ತಿದ್ದು, ಇದೀಗ ನೀರು ಶುದ್ಧೀಕರಣ ಘಟಕದ ಸ್ವಚ್ಛತಾ ಕಾರ್ಯಕ್ಕೆ ಪುರಸಭೆ ಮುಂದಾಗಿದೆ.

ಪುರಸಭಾ ವ್ಯಾಪ್ತಿಯ ಜನರಿಗೆ ಪೂರೈಕೆಯಾಗುತ್ತಿರುವ ಕುಡಿಯುವ ನೀರಿನ ಗುಣಮಟ್ಟದ ಬಗ್ಗೆ ಸಾರ್ವಜನಿಕರಿಂದ ದೂರುಗಳು ವ್ಯಕ್ತವಾಗಿದ್ದ ಹಿನ್ನೆಲೆ ಶಾಸಕ ರಾಜೇಶ್ ನಾಕ್ ನೀರು ಶುದ್ಧೀಕರಣ ಘಟಕಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಸ್ವಚ್ಛತಾ ಕಾರ್ಯ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದರು.

ಮಂಗಳವಾರ ಘಟಕ ವೀಕ್ಷಿಸಿದ ಜಿಲ್ಲಾ ಯೋಜನಾ ಕೋಶದ ಯೋಜನಾ ನಿರ್ದೇಶಕ ಸಂತೋಷ್ ಕುಮಾರ್, ನೀರು ಶುದ್ಧೀಕರಣ ಘಟಕದ ಸ್ವಚ್ಛತೆ ಕುರಿತು ಶಾಸಕರು ಗಮನಕ್ಕೆ ತಂದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಲಾಗಿದೆ. ಸಮಸ್ಯೆ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಪುರಸಭೆ ಮುಖ್ಯಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಈಗಾಗಲೇ ಸ್ವಚ್ಛತಾ ಕಾರ್ಯ ಆರಂಭಗೊಂಡಿದೆ ಎಂದರು.

ಎ.ಇ.ಇ.ತೇಜಮೂರ್ತಿ, ಎಕ್ಸಿಕ್ಯೂಟಿವ್ ಇಂಜಿನಿಯರ್ ಪುರಂದರ, ಪ್ರಸಾದ್, ಪುರಸಭೆ ಮುಖ್ಯಾಧಿಕಾರಿ ತೀರ್ಥಪ್ರಸಾದ್, ಪುರಸಭೆಯ ನಿಕಟಪೂರ್ವ ಸದಸ್ಯರಾದ ಎ.ಗೋವಿಂದ ಪ್ರಭು, ಹರಿಪ್ರಸಾದ್, ಸಾಮಾಜಿಕ ಕಾರ್ಯಕರ್ತ ಸಮಾದ್ ಕೈಕಂಬ ಮೊದಲಾದವರು ಉಪಸ್ಥಿತರಿದ್ದರು.