ಹೈಕೋರ್ಟ್ ಕರಾವಳಿ ಸಂಚಾರಿ ಪೀಠ ಸ್ಥಾಪನೆ ಹೋರಾಟ ಸಮಿತಿ ನಿಯೋಗ ಹೈಕೋರ್ಟ್‌ನ ಮಾನ್ಯ ಮುಖ್ಯ ನ್ಯಾಯಮೂರ್ತಿ ಜಸ್ಟಿಸ್ ವಿಭು ಬಕ್ರು ಅವರನ್ನು ಭೇಟಿ ಮಾಡಿತು. ಐವನ ಡಿಸೋಜ, ಜಗದೀಶ್ ಶೇಣವ, ರೊನಾಲ್ಡ್ ಪ್ರವೀಣ್ ಮೊದಲಾದವರಿದ್ದರು.
ಮಂಗಳೂರು: ಕರಾವಳಿ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸಂಚಾರಿ ಪೀಠ ಸ್ಥಾಪನೆಗೆ ಸಂಬಂಧಿಸಿದಂತೆ ಸಮಿತಿ ರಚಿಸಿ, ಈ ಕುರಿತು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಕರ್ನಾಟಕ ಹೈಕೋರ್ಟ್‌ನ ಮಾನ್ಯ ಮುಖ್ಯ ನ್ಯಾಯಮೂರ್ತಿ ಜಸ್ಟಿಸ್ ವಿಭು ಬಕ್ರು ಭರವಸೆ ನೀಡಿದ್ದಾರೆ ಎಂದು ಹೈಕೋರ್ಟ್ ಕರಾವಳಿ ಸಂಚಾರಿ ಪೀಠ ಸ್ಥಾಪನೆ ಹೋರಾಟ ಸಮಿತಿಯ ಸಂಚಾಲಕ, ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ತಿಳಿಸಿದ್ದಾರೆ.
ಕರಾವಳಿ ಭಾಗದಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಕರ್ನಾಟಕ ಸರ್ಕಾರ ಈಗಾಗಲೇ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಅಗತ್ಯವಿರುವ ಎಲ್ಲ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಸರ್ಕಾರ ಸಿದ್ಧವಿದೆ. ಈ ಹಿನ್ನೆಲೆಯಲ್ಲಿ ಸಂಚಾರಿ ಪೀಠ ಸ್ಥಾಪನೆಗೆ ಸಂಬಂಧಿಸಿದಂತೆ ವಿವಿಧ ಕಡೆಗಳಲ್ಲಿ ವ್ಯಕ್ತವಾಗುತ್ತಿರುವ ಅಭಿಪ್ರಾಯಗಳು, ಜಿಲ್ಲೆಗಳ ನಡುವಿನ ಚರ್ಚೆಗಳು ಹಾಗೂ ಎದುರಾಗಿರುವ ಅಡೆತಡೆಗಳ ಕುರಿತು ಶುಕ್ರವಾರ ಹೋರಾಟ ಸಮಿತಿಯ ನಿಯೋಗವು ಬೆಂಗಳೂರಿನಲ್ಲಿ ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗಳನ್ನು ಅವರ ಕಚೇರಿಯಲ್ಲಿ ಭೇಟಿ ಮಾಡಿ ವಿಚಾರ ವಿನಿಮಯ ನಡೆಸಿತು.
ನಿಯೋಗದಲ್ಲಿ ಮಂಗಳೂರು ಬಾರ್ ಅಸೋಸಿಯೇಷನ್ ಅಧ್ಯಕ್ಷ ಜಗದೀಶ್ ಶೇಣವ, ಉಡುಪಿ ಬಾರ್ ಅಸೋಸಿಯೇಷನ್ ಅಧ್ಯಕ್ಷ ರೋನಾಲ್ಡ್ ಪ್ರವೀಣ್, ಮಾಜಿ ಮಂಗಳೂರು ಬಾರ್ ಅಸೋಸಿಯೇಷನ್ ಅಧ್ಯಕ್ಷ ರಾಘವೇಂದ್ರ ರಾವ್, ಪ್ರಧಾನ ಜಿಲ್ಲಾ ಸರ್ಕಾರಿ ವಕೀಲರು ಹಾಗೂ ಕರಾವಳಿ ಹೈಕೋರ್ಟ್ ಪೀಠ ಸಮಿತಿಯ ಪಿಆರ್‌ಒ ಎಂ. ಪಿ. ನೊರೋನ್ಹಾ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.
ಕರ್ನಾಟಕ ಸರ್ಕಾರವೂ ಮಂಗಳೂರಿನಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ನಡೆಸುವ ಸಂದರ್ಭದಲ್ಲಿ ಕರಾವಳಿ ಭಾಗದ ಸಮಗ್ರ ಅಭಿವೃದ್ಧಿಯೊಂದಿಗೆ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಯ ವಿಚಾರವೂ ಪ್ರಮುಖವಾಗಿರಲಿದೆ. ಸಂಚಾರಿ ಪೀಠ ಸ್ಥಾಪನೆಗೆ ಅಗತ್ಯವಿರುವ ಎಲ್ಲ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಸರ್ಕಾರ ಸಿದ್ಧವಿದೆ ಎಂದು ಐವನ್ ಡಿಸೋಜ ತಿಳಿಸಿದರು.