ಮಂಗಳೂರು: ನಗರದ ಕೊಡಿಯಾಲ್‌ಬೈಲ್‌ನಲ್ಲಿರುವ ಟಿ.ಎಂ.ಎ. ಪೈ ಸಭಾಂಗಣದಲ್ಲಿ ನಡೆದ ಮದುವೆ ಸಮಾರಂಭದ ವೇಳೆ ಮೂರೂವರೆ ವರ್ಷದ ಬಾಲಕಿಯ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಕಳವು ಮಾಡಿದ ಮಹಿಳೆಯೊಬ್ಬರನ್ನು ಬರ್ಕೆ ಠಾಣೆಯ ಪೊಲೀಸರು 24 ಗಂಟೆಯೊಳಗೆ ಬಂಧಿಸಿ, ಕಳವಾದ ಚಿನ್ನದ ಸರವನ್ನು ವಶಪಡಿಸಿಕೊಂಡಿದ್ದಾರೆ.
ಮೂಲತಃ ಕೋಟೆಪುರ, ಉಳ್ಳಾಲದ ನಿವಾಸಿಯಾಗಿದ್ದು, ಪ್ರಸ್ತುತ ಉಳ್ಳಾಲದ ಅಕ್ಕರಕೆರೆಯ ಆರ್‌ಸಿಸಿ ಅಪಾರ್ಟ್‌ಮೆಂಟ್‌ನಲ್ಲಿ ವಾಸಿಸುತ್ತಿರುವ ಮಿನ್ನತ್ (42) ಬಂಧಿತ ಆರೋಪಿತೆ.
ಅ.18ರಂದು ಮಧ್ಯಾಹ್ನ ಮದುವೆ ಸಮಾರಂಭ ನಡೆಯುತ್ತಿದ್ದ ಸಂದರ್ಭದಲ್ಲಿ ಅಪರಿಚಿತ ಮಹಿಳೆಯೊಬ್ಬರು ಬಾಲಕಿಯ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಎಳೆದುಕೊಂಡು ಪರಾರಿಯಾಗಿದ್ದರು. ಪೆಂಡೆಂಟ್ ಹೊಂದಿದ್ದ ಸುಮಾರು 1.35 ಲಕ್ಷ ರೂ. ಮೌಲ್ಯದ 10 ಗ್ರಾಂ ತೂಕದ ಚಿನ್ನದ ಸರ ಇದಾಗಿತ್ತು.
ಈ ಸಂಬಂಧ ಶೀಮಾಬಾನು ಅವರು ನೀಡಿದ ದೂರಿನ ಮೇರೆಗೆ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿತ್ತು.
ತನಿಖೆ ನಡೆಸಿದ ಪೊಲೀಸರು, ಅ.19ರಂದು ಆರೋಪಿತೆಯನ್ನು ಬಂಧಿಸಿ, ಕಳವಾದ ಚಿನ್ನದ ಸರವನ್ನು ವಶಪಡಿಸಿಕೊಳ್ಳಲಾಗಿದ್ದು, ಅ. 20ರಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಆರೋಪಿತೆಯ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಮೂರು ಹಾಗೂ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಐದು ಕಳವು ಪ್ರಕರಣಗಳು ಸೇರಿದಂತೆ ಹಲವು ಪ್ರಕರಣಗಳು ದಾಖಲಾಗಿದ್ದು, ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ. ಹಲವು ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದ ಹಿನ್ನೆಲೆಯಲ್ಲಿ ಈ ಪ್ರಕರಣದ ತನಿಖೆಯನ್ನು ಭಾರತೀಯ ನ್ಯಾಯ ಸಂಹಿತೆಯ ಕಲಂ 112ರ ಅಡಿಯಲ್ಲಿನ ಸಂಘಟಿತ ಅಪರಾಧದ ಅಂಶವನ್ನೂ ಪರಿಗಣಿಸಿ ಮುಂದುವರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಪತ್ತೆ ಕಾರ್ಯದಲ್ಲಿ ಬರ್ಕೆ ಪೊಲೀಸ್ ಠಾಣೆಯ ಪಿಎಸ್‌ಐಗಳಾದ ಗುರುಪ್ಪ ಕಾಂತಿ, ವಿನಾಯಕ ತೋರಗಲ್ ಹಾಗೂ ಅಪರಾಧ ವಿಭಾಗದ ಸಿಬ್ಬಂದಿ ಭಾಗವಹಿಸಿದ್ದರು.