ಸಾಂದರ್ಭಿಕ ಚಿತ್ರ 
ದಕ್ಷಿಣ ಕನ್ನಡ

ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ

ಮಂಗಳೂರು : ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಪ್ರಕರಣ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ(ಪೋಕ್ಸೊ-ಎಫ್ ಟಿ ಎಸ್ ಸಿ 2)ದಲ್ಲಿ ಸಾಬೀತಾಗಿದ್ದು, ಅಪರಾಧಿಗೆ 20 ವರ್ಷಗಳ ಕಠಿನ ಸಜೆ ವಿಧಿಸಿ ನ್ಯಾಯಾಧೀಶರಾದ ಮಾನು ಕೆ.ಎಸ್ ಅವರು ತೀರ್ಪು ನೀಡಿದ್ದಾರೆ.
ಉಳ್ಳಾಲದ ಅಬೂಬಕರ್ (53) ಶಿಕ್ಷೆಗೊಳಗಾದ ಅಪರಾಧಿ.
* ಪ್ರಕರಣದ ಹಿನ್ನೆಲೆ
ಅಬೂಬಕರ್ 2025ರ ಮಾ.29ರಂದು ತನ್ನ ನೆರೆಮನೆಯ ಬಾಲಕಿಯನ್ನು ಆಕೆ ಮನೆಯಲ್ಲಿ ಒಬ್ಬಳೇ ಇದ್ದಾಗ ಎಳೆದೊಯ್ದು ಯಾರೂ ವಾಸವಿಲ್ಲದ ಮನೆಯೊಂದರ ಬಳಿ ಲೈಂಗಿಕ ದೌರ್ಜನ್ಯ ಎಸಗಿದ್ದ. ಅಲ್ಲದೆ ಈ ವಿಚಾರವನ್ನು ಯಾರಿಗೂ ಹೇಳದಂತೆ ಬೆದರಿಕೆ ಹಾಕಿದ್ದ. ಆರೋಪಿ ಇದಕ್ಕೂ ಮೊದಲು 3 ಬಾರಿ ದೌರ್ಜನ್ಯ ಎಸಗಿ ಬೆದರಿಕೆ ಹಾಕಿದ್ದ. ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇನ್ಸ್ ಪೆಕ್ಟರ್ ಶಿವಕುಮಾರ್ ಬಿ. ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ವಿಚಾರಣೆ ನಡೆಸಿದ ನ್ಯಾಯಾಧೀಶರು ಮಂಗಳವಾರದಂದು ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ. ಬಿಎನ್ ಎಸ್ ಕಲಂ 64(1) ಹಾಗೂ ಪೊಕ್ಸೊ ಕಾಯಿದೆಯ ಕಲಂ 6 ರಡಿ ಆರೋಪಿಗೆ 20 ವರ್ಷಗಳ ಕಠಿನ ಸಜೆ ಹಾಗು 45,000ರೂ. ದಂಡ ವಿಧಿಸಿದ್ದಾರೆ. ದಂಡ ಪಾವತಿಸಲು ತಪ್ಪಿದರೆ ಹೆಚ್ಚುವರಿಯಾಗಿ 4 ತಿಂಗಳು ಸಾದಾ ಸಜೆ ವಿಧಿಸಿ ತೀರ್ಪು ನೀಡಿದ್ದಾರೆ. ಬಿಎನ್ ಎಸ್ ಕಲಂ 351(2) ನಡಿಯಲ್ಲಿ 3 ತಿಂಗಳ ಸಾದಾ ಸಜೆ ಮತ್ತು 5,000 ದಂಡ ವಿಧಿಸಿದ್ದಾರೆ. ದಂಡ ಪಾವತಿಸಲು ತಪ್ಪಿದರೆ ಹೆಚ್ಚುವರಿಯಾಗಿ 15 ದಿನ ಸಾದಾ ಸಜೆ ವಿಧಿಸಿ ತೀರ್ಪು ನೀಡಿದ್ದಾರೆ.
ಸಂತ್ರಸ್ತೆಗೆ ದಂಡದ ಮೊತ್ತವಾದ 50,000 ರೂ. ಹಾಗೂ ಪ್ರತ್ಯೇಕವಾಗಿ 3.50 ಲ.ರೂ.ಗಳನ್ನು ಪರಿಹಾರವಾಗಿ ನೀಡುವಂತೆ ನ್ಯಾಯಾಧೀಶರು ಕಾನೂನು ಸೇವಾ ಪ್ರಾಧಿಕಾರಕ್ಕೆ ನಿರ್ದೇಶನ ನೀಡಿದ್ದಾರೆ. ಪ್ರಾಸಿಕ್ಯೂಷನ್ ಪರವಾಗಿ ಪೊಕ್ಸೋ ವಿಶೇಷ ಸರ್ಕಾರಿ ಅಭಿಯೋಜಕಿ ಸಹನಾ ದೇವಿ ಬೋಳೂರು ವಾದಿಸಿದ್ದರು.