ಎಂಆರ್ ಪಿಎಲ್ ದಟ್ಟ ಹೊಗೆ ಕಾಣಿಸಿಕೊಂಡಿದೆ. 
ದಕ್ಷಿಣ ಕನ್ನಡ

MRPLನ CHT ಘಟಕದಲ್ಲಿ ಭಾರಿ ಸ್ಫೋಟ: ಓರ್ವನಿಗೆ ಸುಟ್ಟ ಗಾಯ

ಬೆಂಕಿ ನಿಯಂತ್ರಣಕ್ಕೆ; 6 ಮಂದಿಗೆ ಸಣ್ಣಪುಟ್ಟ ಗಾಯ

ಮಂಗಳೂರು: ಎಂಆರ್‌ಪಿಎಲ್‌ನ ಹೈಡ್ರೋ ಸಲ್ಫರ್ ಟ್ರೀಟ್‌ಮೆಂಟ್ (CHT) ಘಟಕದಲ್ಲಿ ಬುಧವಾರ ಭಾರಿ ಸ್ಫೋಟ ಸಂಭವಿಸಿ ಬಳಿಕ ಬೆಂಕಿ ಕಾಣಿಸಿಕೊಂಡಿದ್ದು, ಸದ್ಯ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ.

ಸ್ಫೋಟದ ವೇಳೆ ಘಟಕದಲ್ಲಿದ್ದ ರಾಜೇಶ್ ಬ್ಯಾಪ್ಟಿಸ್ಟ್ ಎಂಬವರಿಗೆ ಶೇ.35ರಷ್ಟು ಸುಟ್ಟ ಗಾಯಗಳಾಗಿದ್ದು, ಅವರನ್ನು ಶ್ರೀನಿವಾಸ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರು ಅಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಸದ್ಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಘಟಕದ ಪಕ್ಕದ ಕಚೇರಿಯಲ್ಲಿದ್ದ ಆರು ಮಂದಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಎಲ್ಲರೂ ಹೊರರೋಗಿಗಳ ವಿಭಾಗದಲ್ಲಿ ಚಿಕಿತ್ಸೆ ಹಾಗೂ ತಪಾಸಣೆ ಪಡೆದುಕೊಂಡಿದ್ದಾರೆ. ಯಾವುದೇ ಗಂಭೀರ ಗಾಯಗಳಾಗಿಲ್ಲ ಎಂದು ತಿಳಿದುಬಂದಿದೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ., ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಹಾಗೂ ಜಿಲ್ಲಾ ಪಂಚಾಯಿತಿ ಸಿಇಒ ನರ್ವಡೆ ವಿನಾಯಕ್ ಕಾರ್ಭಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪರಿಸ್ಥಿತಿಯನ್ನು ಅಧಿಕಾರಿಗಳು ಪರಿಶೀಲಿಸಿದ್ದು, ಸದ್ಯ ಯಾವುದೇ ಹೆಚ್ಚಿನ ಆತಂಕದ ಪರಿಸ್ಥಿತಿ ಇಲ್ಲ ಎಂದು ತಿಳಿಸಲಾಗಿದೆ.

ಸ್ಫೋಟಕ್ಕೆ ಕಾರಣವೇನು ಎಂಬುದು ಇನ್ನಷ್ಟೇ ತಿಳಿದುಬರಬೇಕಿದ್ದು, ಘಟಕದ ಸುರಕ್ಷತಾ ಕ್ರಮಗಳ ಕುರಿತು ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.:::