ವಿಜಯವಾಣಿ ಸುದ್ದಿಜಾಲ ಮೂಡುಬಿದಿರೆ
ಮೂಡುಬಿದಿರೆ ಬಸ್ ನಿಲ್ದಾಣದಲ್ಲಿ ಕಳೆದ ಕೆಲವು ವಷರ್ಗಳಿಂದ ಪಾರ್ಕಿಂಗ್ ಸೇರಿದಂತೆ ವಿವಿಧ ಅವ್ಯವಸ್ಥೆಗಳು ಮುಂದುವರಿದಿದ್ದು, ಸಮಸ್ಯೆ ಪರಿಹಾರಕ್ಕೆ ಹಲವು ಸಭೆ ಹಾಗೂ ಸ್ಥಳ ಪರಿಶೀಲನೆಗಳು ನಡೆದರೂ ನಿರೀಕ್ಷಿತ ಸುಧಾರಣೆ ಕಂಡುಬಂದಿಲ್ಲ.
ಇತ್ತೀಚೆಗಷ್ಟೇ ಎಸಿಪಿ ನೇತೃತ್ವದಲ್ಲಿ ಬಸ್ ನಿಲ್ದಾಣದ ಪಾರ್ಕಿಂಗ್ ವ್ಯವಸ್ಥೆ ಹಾಗೂ ಅವ್ಯವಸ್ಥೆ ಸರಿಪಡಿಸುವ ಕುರಿತು ಸಭೆ ನಡೆಸಿ ಚರ್ಚಿಸಲಾಗಿತ್ತು. ಆದರೆ ಸಭೆಯ ಬಳಿಕವೂ ಪರಿಸ್ಥಿತಿಯಲ್ಲಿ ಗಮನಾರ್ಹ ಬದಲಾವಣೆ ಕಂಡುಬಂದಿಲ್ಲ ಎಂಬುದು ಸಾರ್ವಜನಿಕರ ಅಸಮಾಧಾನಕ್ಕೆ ಕಾರಣವಾಗಿದೆ.
ಮೂಡುಬಿದಿರೆ ಪುರಸಭೆಯಿಂದ ಬಸ್ ನಿಲ್ದಾಣದೊಳಗೆ ನೋ ಪಾರ್ಕಿಂಗ್ ಗೆರೆಗಳನ್ನು ಎಳೆಯಲಾಗಿದ್ದರೂ ದ್ವಿಚಕ್ರ ವಾಹನಗಳು ಹಾಗೂ ಕಾರುಗಳನ್ನು ಅದೇ ಪ್ರದೇಶದಲ್ಲಿ ಅಡ್ಡಾದಿಡ್ಡಿಯಾಗಿ ನಿಲುಗಡೆ ಮಾಡಲಾಗುತ್ತಿದೆ. ಇದರಿಂದ ಬಸ್ ನಿಲ್ದಾಣದಲ್ಲಿ ಸಂಚರಿಸುವ ಪ್ರಯಾಣಿಕರು ಹಾಗೂ ಶೌಚಗೃಹಕ್ಕೆ ಬರುವ ಸಾರ್ವಜನಿಕರು ತೊಂದರೆ ಅನುಭವಿಸುವಂತಾಗಿದೆ.
ಬಸ್ ನಿಲ್ದಾಣದಲ್ಲಿರುವ ಇಂದಿರಾಗಾಂಧಿ ಕಾಂಪ್ಲೆಕ್ಸ್‌ನ ಬಾಡಿಗೆದಾರರು ಹಾಗೂ ಗ್ರಾಹಕರಿಗೂ ವಾಹನಗಳ ಅಡ್ಡಾದಿಡ್ಡಿ ನಿಲುಗಡೆಯಿಂದ ಸಮಸ್ಯೆಯಾಗುತ್ತಿದೆ. ವಾಹನಗಳನ್ನು ನಿಯಮಬಾಹಿರವಾಗಿ ನಿಲುಗಡೆ ಮಾಡುತ್ತಿದ್ದರೂ ಸಂಬಂಧಪಟ್ಟವರು ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲ ಎಂಬ ಆರೋಪಗಳು ಕೇಳಿಬರುತ್ತಿವೆ.
ಸಭೆ, ಸ್ಥಳ ಪರಿಶೀಲನೆ ಹಾಗೂ ನೋ ಪಾಕಿರ್ಂಗ್ ಗೆರೆಗಳ ಮೂಲಕ ಸಮಸ್ಯೆ ಪರಿಹರಿಸಲು ಪ್ರಯತ್ನ ನಡೆದಿದ್ದರೂ, ಅನುಷ್ಠಾನದ ಕೊರತೆಯಿಂದಾಗಿ ಬಸ್ ನಿಲ್ದಾಣದ ಪಾರ್ಕಿಂಗ್ ಅವ್ಯವಸ್ಥೆ ಮುಂದುವರಿದಿದೆ. ಪ್ರಯಾಣಿಕರು ಹಾಗೂ ಸಾರ್ವಜನಿಕರಿಗೆ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವ ನಿಟ್ಟಿನಲ್ಲಿ ಸಂಬಂಧಪಟ್ಟವರು ಶೀಘ್ರ ಕ್ರಮ ಕೈಗೊಳ್ಳಬೇಕೆಂಬ ಆಗ್ರಹ ಕೇಳಿಬರುತ್ತಿದೆ.
ಮೂಡುಬಿದಿರೆ ಬಸ್‌ಸ್ಟಾಂಡ್‌ನಲ್ಲಿ ಅನಧಿಕೃತವಾಗಿ ಅಡ್ಡಾದಿಡ್ಡಿ ನಿಲ್ಲಿಸಲಾಗಿದ್ದ ಬೈಕ್ ಸಹಿತ ವಾಹನಗಳ ವಿರುದ್ಧ ಮೂಡುಬಿದಿರೆ ಪೊಲೀಸರು ಶನಿವಾರ ಕಾರ್ಯಾಚರಣೆ ನಡೆಸಿದರು. ಸಾರ್ವಜನಿಕರಿಂದ ಹಲವು ಬಾರಿ ದೂರುಗಳು ಬಂದ ಹಿನ್ನೆಲೆಯಲ್ಲಿ ಬಸ್‌ಸ್ಟಾೃಂಡ್ ಪ್ರದೇಶದಲ್ಲಿ ವಾಹನ ಪಾರ್ಕಿಂಗ್‌ನಿಂದ ಉಂಟಾಗಿದ್ದ ಸಮಸ್ಯೆಗೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಸಾರ್ವಜನಿಕರಿಗೆ ತೊಂದರೆಯಾಗದಂತೆ ಹಾಗೂ ಬಸ್‌ಗಳ ಸುಗಮ ಸಂಚಾರಕ್ಕೆ ಅಡ್ಡಿಯಾಗದಂತೆ ಇಂತಹ ಕಾರ್ಯಾಚರಣೆ ನಿರಂತರವಾಗಿ ನಡೆಯಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.