ಕಡಬ: ಸರ್ಕಾರದಿಂದ ಲಭ್ಯವಾಗುವ ಅನುದಾನವನ್ನು ಸಮರ್ಪಕವಾಗಿ ಹಾಗೂ ಪಾರದರ್ಶಕವಾಗಿ ಬಳಸಿಕೊಂಡು ಸಾರ್ವಜನಿಕರಿಗೆ ಗರಿಷ್ಠ ಮೂಲಸೌಲಭ್ಯ ಒದಗಿಸಬೇಕು. ಅಭಿವೃದ್ಧಿ ಕಾಮಗಾರಿಗಳಲ್ಲಿ ಗುಣಮಟ್ಟ ಕಾಪಾಡುವುದರ ಜತೆಗೆ, ಸಾರ್ವಜನಿಕರ ಸಮಸ್ಯೆಗಳಿಗೆ ಅಧಿಕಾರಿಗಳು ತ್ವರಿತವಾಗಿ ಸ್ಪಂದಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಸೂಚಿಸಿದರು.
ಬುಧವಾರ ಕಡಬ ಪಟ್ಟಣ ಪಂಚಾಯಿತಿಗೆ ಭೇಟಿ ನೀಡಿದ ಅವರು, ಪಪಂ ವ್ಯಾಪ್ತಿಯಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿವಿಧ ಅಭಿವೃದ್ಧಿ ಯೋಜನೆಗಳ ಅನುಷ್ಠಾನ ಮತ್ತು ಸಾರ್ವಜನಿಕ ಸಮಸ್ಯೆಗಳ ಕುರಿತು ಪ್ರಗತಿ ಪರಿಶೀಲನಾ ಸಭೆ ನಡೆಸಿದರು.
15ನೇ ಹಣಕಾಸು ಆಯೋಗ, ರಾಜ್ಯ ಹಣಕಾಸು ಆಯೋಗದ ಅನುದಾನ, ಅಮೃತ ನಗರೋತ್ಥಾನ ಯೋಜನೆಯಡಿ ಕೈಗೊಳ್ಳಲಾಗುತ್ತಿರುವ ಸಾರ್ವಜನಿಕ ಹಾಗೂ ವೈಯಕ್ತಿಕ ಕಾಮಗಾರಿಗಳು, ಡಾ.ಬಿ.ಆರ್.ಅಂಬೇಡ್ಕರ್ ವಸತಿ ಯೋಜನೆ ಸೇರಿದಂತೆ ವಿವಿಧ ಯೋಜನೆಗಳ ಪ್ರಗತಿ ಪರಿಶೀಲಿಸಿದರು.
ಪಪಂ ವ್ಯಾಪ್ತಿಯ ಎಲ್ಲ ವಸತಿ ಹಾಗೂ ವಾಣಿಜ್ಯ ಕಟ್ಟಡಗಳಿಂದ ಹಸಿ ಮತ್ತು ಒಣ ಕಸ ಸಮರ್ಪಕವಾಗಿ ಸಂಗ್ರಹಿಸುವುದು, ಸ್ವಚ್ಛತೆಗೆ ಆದ್ಯತೆ ನೀಡುವುದು, ವೈಜ್ಞಾನಿಕವಾಗಿ ಘನತ್ಯಾಜ್ಯ ವಿಲೇವಾರಿ ಮಾಡುವುದು ಹಾಗೂ ಕಟ್ಟಡ ತೆರಿಗೆ ಸೇರಿದಂತೆ ವಿವಿಧ ತೆರಿಗೆ ಸಮರ್ಪಕವಾಗಿ ಸಂಗ್ರಹಿಸುವ ಕುರಿತು ಚರ್ಚಿಸಲಾಯಿತು.
ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಅಧ್ಯಕ್ಷೆ ತಮನ್ನಾ ಜಬೀನ್, ಉಪಾಧ್ಯಕ್ಷೆ ನೀಲಾವತಿ ಶಿವರಾಮ್, ಸ್ಥಾಯಿ ಸಮಿತಿ ಅಧ್ಯಕ್ಷ ಹಾಜಿ ಹನೀಫ್ ಕೆ.ಎಂ., ಆಡಳಿತ ಮಂಡಳಿ ಸದಸ್ಯರು, ಮುಖ್ಯಾಧಿಕಾರಿ ಲೀಲಾವತಿ ಇ., ಇಂಜಿನಿಯರ್ ಶಿವಕುಮಾರ್ ಉಪಸ್ಥಿತರಿದ್ದರು.
ಕಡಬ ಪಟ್ಟಣ ಪಂಚಾಯಿತಿಗೆ ಸಮಗ್ರ ಕುಡಿಯುವ ನೀರಿನ ಯೋಜನೆ, ನಿವೇಶನ ವಿತರಿಸಲು ಜಮೀನು ಮಂಜೂರಾತಿ, ಖಾಲಿ ಹುದ್ದೆಗಳ ಭರ್ತಿ, ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಹೆಚ್ಚಿನ ಅನುದಾನ ಸೇರಿದಂತೆ ಹಲವು ಬೇಡಿಕೆ ಈಡೇರಿಸುವಂತೆ ಪಪಂ ಆಡಳಿತ ಮಂಡಳಿ ಮನವಿ ಸಲ್ಲಿಸಿತು. ಘನತ್ಯಾಜ್ಯ ನಿರ್ವಹಣಾ ಘಟಕಕ್ಕೆ ಭೇಟಿ ನೀಡಿ ಪರಿಶೀಲಿಸಿದ ಕಿಶೋಕ್ ಕುಮಾರ್ ಪುತ್ತೂರು, ಘಟಕವನ್ನು ಇನ್ನಷ್ಟು ಪರಿಣಾಮಕಾರಿಯಾಗಿ ನಿರ್ವಹಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.
ಸ್ವಚ್ಛತೆ ಮತ್ತು ಮೂಲ ಸೌಲಭ್ಯಗಳು ಪ್ರತಿಯೊಬ್ಬ ನಾಗರಿಕನ ಹಕ್ಕು. ಕಡಬ ಪಪಂ ವ್ಯಾಪ್ತಿಯಲ್ಲಿ ಸ್ವಚ್ಛ, ಸುಂದರ ಹಾಗೂ ಸುಸಜ್ಜಿತ ವಾತಾವರಣ ನಿರ್ಮಾಣಕ್ಕೆ ಎಲ್ಲ ಅಗತ್ಯ ಕ್ರಮ ಕೈಗೊಳ್ಳಬೇಕು. ಸರ್ಕಾರದ ಯೋಜನೆಗಳ ಪ್ರಯೋಜನ ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು.ಕಿಶೋರ್ ಕುಮಾರ್, ವಿಧಾನ ಪರಿಷತ್ ಸದಸ್ಯ