ಮಂಗಳೂರು: ರಾಷ್ಟ್ರೀಯ ಅಪರಾಧ ತನಿಖಾ ದಳದ ನಿರ್ದೇಶಕ/ಅಧಿಕಾರಿ ಎಂದು ಸುಳ್ಳು ಪರಿಚಯಿಸಿಕೊಂಡು ವಂಚನೆ ಹಾಗೂ ಸುಲಿಗೆ ನಡೆಸುತ್ತಿದ್ದ ಆರೋಪದಲ್ಲಿ ಬಂಧಿತನಾಗಿ, ಜಾಮೀನಿನ ಮೇಲೆ ಬಿಡುಗಡೆಗೊಂಡು ಬಳಿಕ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಸುಮಾರು ಮೂರು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ನಗರ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ಸ್ಯಾಮ್ ಪೀಟರ್ ಅಲಿಯಾಸ್ ಡ್ಯಾನಿ ತಾರಕನ್ ಅಲಿಯಾಸ್ ಆಂಟನಿ (64) ಎಂದು ಗುರುತಿಸಲಾಗಿದೆ. ಕೇರಳ ಮೂಲದ ಈತ ಪ್ರಸ್ತುತ ಉತ್ತರ ಪ್ರದೇಶದ ಲಖನೌನಲ್ಲಿ ವಾಸಿಸುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿ ತನ್ನದೇ ಗ್ಯಾಂಗ್ ರಚಿಸಿಕೊಂಡು ರಾಷ್ಟ್ರೀಯ ತನಿಖಾ ಸಂಸ್ಥೆಗಳ ಅಧಿಕಾರಿಗಳಂತೆ ನಟಿಸುತ್ತಿದ್ದ. ಹಣಕಾಸು ವಿವಾದ, ಬ್ಯಾಂಕ್ ವಂಚನೆ ಹಾಗೂ ತೆರಿಗೆ ವಂಚನೆ ಪ್ರಕರಣಗಳಲ್ಲಿ ಸಿಲುಕಿರುವವರನ್ನು ಗುರಿಯಾಗಿಸಿಕೊಂಡು, ತಾನು ಪ್ರಭಾವಿ ಅಧಿಕಾರಿಯೆಂದು ನಂಬಿಸಿ ಹಣ ಪಡೆದು ವಂಚನೆ ಹಾಗೂ ಸುಲಿಗೆ ನಡೆಸುತ್ತಿದ್ದ.
ಈ ಸಂಬಂಧ 2019ರ ಆ.16ರಂದು ಮಂಗಳೂರಿನ ಪಂಪ್‌ವೆಲ್‌ನ ಲಾಡ್ಜ್‌ವೊಂದರಲ್ಲಿ ಕದ್ರಿ ಪೊಲೀಸರು ಕಾರ್ಯಾಚರಣೆ ನಡೆಸಿ ಸ್ಯಾಮ್ ಪೀಟರ್ ಸೇರಿದಂತೆ ಆತನ ಗ್ಯಾಂಗ್‌ನ ಎಂಟು ಮಂದಿಯನ್ನು ಬಂಧಿಸಿದ್ದರು. ಬಳಿಕ ಜಾಮೀನಿನ ಮೇಲೆ ಬಿಡುಗಡೆಯಾದ ಆರೋಪಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ.
11ಕ್ಕೂ ಹೆಚ್ಚು ಹೆಸರುಗಳಲ್ಲಿ ವಾಸ
ತನ್ನ ನಿಜವಾದ ಗುರುತನ್ನು ಮರೆಮಾಚಲು ಆರೋಪಿ ಹಲವು ಸ್ಥಳಗಳಲ್ಲಿ ವಿವಿಧ ಹೆಸರುಗಳನ್ನು ಬಳಸಿಕೊಂಡು ವಾಸಿಸುತ್ತಿದ್ದ. ಆಂಟನಿ, ರಾಹುಲ್ ಪೀಟರ್, ಸ್ಯಾಮ್ ಪೀಟರ್, ರಾಜೇಶ್ ರಾಬಿನ್ಸನ್, ರೀತು ರಿಚರ್ಡ್, ರಾಯ್ ಜೇಕಬ್, ರಾಬಿನ್ ರಿಚರ್ಡ್ಸನ್, ರಾಬಿನ್ ಸನ್, ಆಂಟೋನಿ ಪ್ರಾನ್ಸಿಸ್, ಶಾರೂನ್ ಪ್ರಾನ್ಸಿಸ್ ಹಾಗೂ ಡ್ಯಾನಿ ತಾರಕನ್ ಸೇರಿದಂತೆ ಹಲವು ಹೆಸರುಗಳನ್ನು ಬಳಸಿಕೊಂಡಿದ್ದಾನೆ. ಒಂದು ಸ್ಥಳದಲ್ಲಿ ಅಪರಾಧ ಎಸಗಿ ಬಳಿಕ ಮತ್ತೊಂದು ಸ್ಥಳಕ್ಕೆ ತೆರಳಿ ಹೆಸರು ಬದಲಿಸಿಕೊಂಡು ವಾಸಿಸುವುದು ಆತನ ಕಾರ್ಯವಿಧಾನವಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿ ಸ್ಯಾಮ್ ಪೀಟರ್ ಒಬ್ಬ ಕುಖ್ಯಾತ ವಂಚಕನಾಗಿದ್ದು, ರಾಹುಲ್ ಪೀಟರ್ ಹೆಸರಿನಲ್ಲಿ ಆತನ ವಿರುದ್ಧ 2001ರಿಂದ ಇಂಟರ್ಪೋಲ್ ರೆಡ್ ಕಾರ್ನರ್ ನೋಟಿಸ್ ಜಾರಿ ಮಾಡಿದೆ. ಆರೋಪಿಯ ವಿರುದ್ಧ ಮಂಗಳೂರು ನಗರದ ಪೂರ್ವ ಪೊಲೀಸ್ ಠಾಣೆ, ಉಳ್ಳಾಲ ಪೊಲೀಸ್ ಠಾಣೆ, ಕೊಣಾಜೆ ಪೊಲೀಸ್ ಠಾಣೆ, ಚಿಕ್ಕಬಳ್ಳಾಪುರ, ಬೆಂಗಳೂರು, ಉಡುಪಿ ನಗರ ಹಾಗೂ ಕುಶಾಲನಗರ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಮತ್ತು ಬಿಹಾರ, ತಮಿಳುನಾಡು, ಮಹಾರಾಷ್ಟ್ರ, ಉತ್ತರ ಪ್ರದೇಶ, ಛತ್ತೀಸ್‌ಗಢ, ಜಾಖರ್ಂಡ್ ಹಾಗೂ ಮಧ್ಯಪ್ರದೇಶ ರಾಜ್ಯಗಳಲ್ಲಿ ಮೋಸ, ವಂಚನೆ ಸೇರಿದಂತೆ ಸುಮಾರು 17 ಪ್ರಕರಣಗಳು ದಾಖಲಾಗಿರುವುದು ತಿಳಿದು ಬಂದಿದೆ. ಪ್ರಸ್ತುತ ಆರೋಪಿಯ ವಿರುದ್ಧ ಮಂಗಳೂರು ಉಳ್ಳಾಲ ಪೊಲೀಸ್ ಠಾಣೆ ಪ್ರಕರಣದಲ್ಲಿ 17 ಬಾರಿ ವಾರೆಂಟ್ ಹೊರಡಿಸಿರುತ್ತದೆ. ಮತ್ತು ಮಂಗಳೂರು ಪೂರ್ವ ಠಾಣೆ ಪ್ರಕರಣದಲ್ಲಿ 14 ಬಾರಿ ವಾರೆಂಟ್ ಹೊರಡಿಸಿ ಬಳಿಕ ಪ್ರೊಕ್ಲೊಮೇಷನ್(ಉದ್ಘೋಷಣೆ) ಆಗಿರುತ್ತದೆ. ಬಂಧಿತ ಆರೋಪಿಯನ್ನು ಮುಂದಿನ ಕಾನೂನು ಕ್ರಮಕ್ಕಾಗಿ ಮಂಗಳೂರು ಪೂರ್ವ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ.
ಆರೋಪಿಯ ಪತ್ತೆ ಮತ್ತು ಬಂಧನ ಕಾರ್ಯಾಚರಣೆಯಲ್ಲಿ ಮಂಗಳೂರು ನಗರ ಸಿಸಿಬಿ ಘಟಕದ ಅಧಿಕಾರಿಗಳು ಹಾಗೂ ಸಿಬ್ಬಂದಿ ಭಾಗವಹಿಸಿದ್ದರು.