ಸುಳ್ಯ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ವಿವಿಧ ಇಲಾಖೆಗಳ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಿ, ಒಂದೇ ವೇದಿಕೆಯಲ್ಲಿ ಸಂಬಂಧಪಟ್ಟ ಅಧಿಕಾರಿಗಳನ್ನು ಸಂಪರ್ಕಿಸಿ ಪರಿಹಾರ ಪಡೆಯುವ ಉದ್ದೇಶದಿಂದ ಪ್ರಜಾಸೇವಾ ಅಭಿಯಾನ ಸಭೆ ನಡೆಸಲಾಗುತ್ತಿದೆ ಎಂದು ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರು.
ಪಂಜ ಗ್ರಾಪಂ ಸಭಾಂಗಣದಲ್ಲಿ ಸುಳ್ಯ ಹೋಬಳಿ ಮಟ್ಟದ ಪ್ರಜಾಸೇವಾ ಅಭಿಯಾನ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ವಿವಿಧ ಇಲಾಖೆಗಳ ಅಧಿಕಾರಿಗಳು ಒಂದೇ ಸ್ಥಳದಲ್ಲಿ ಲಭ್ಯವಿರುವುದರಿಂದ ಸಾರ್ವಜನಿಕರು ಅಹವಾಲುಗಳನ್ನು ನೇರವಾಗಿ ಸಲ್ಲಿಸಿ ಪರಿಹಾರ ಪಡೆಯಲು ಅವಕಾಶವಿದೆ ಎಂದರು.
ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ, ಸುಳ್ಯ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಕೆ.ಎಂ.ಮುಸ್ತಫ, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಶಾಹುಲ್ ಹಮೀದ್ ಕುತ್ತಮೊಟ್ಟೆ, ತಹಸೀಲ್ದಾರ್ ಮಂಜುಳಾ, ಇಒ ರಾಜಣ್ಣ ಇದ್ದರು.
ಹಿಂದಿನ ಅಭಿಯಾನದಲ್ಲಿ ಸ್ವೀಕರಿಸಿದ ಅರ್ಜಿಗಳ ವಿಲೇವಾರಿ ಹಾಗೂ ಪ್ರಸಕ್ತ ಸಭೆಯಲ್ಲಿ ಸಲ್ಲಿಕೆಯಾದ ಅರ್ಜಿಗಳ ಕುರಿತು ಪರಿಶೀಲನೆ ನಡೆಯಿತು. ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಅವರ ಜವಾಬ್ದಾರಿಗಳ ಕುರಿತು ಸಾರ್ವಜನಿಕರಿಗೆ ಸ್ಪಷ್ಟ ಮಾಹಿತಿ ದೊರೆಯುವಂತೆ ವ್ಯವಸ್ಥೆ ಮಾಡುವ ಬಗ್ಗೆ ಚರ್ಚಿಸಲಾಯಿತು.