ಬೆಳ್ತಂಗಡಿ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಗೆ ಹೊಂದಿಕೊಂಡಿರುವ ಲಾಯಿಲ ಮತ್ತು ನಡ ಗ್ರಾಮಗಳ ಅಗಳಿ, ನಡ, ಕಿಂಡಾಜೆ, ಕೂಡೇಲು ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹುಲಿ ತಿರುಗಾಟದ ಶಂಕೆ ವ್ಯಕ್ತವಾಗಿದ್ದು, ಸ್ಥಳೀಯ ನಿವಾಸಿಗಳಲ್ಲಿ ಆತಂಕ ಮೂಡಿಸಿದೆ.
ಲಾಯಿಲ ಮತ್ತು ನಡ ಗ್ರಾಮಗಳ ವ್ಯಾಪ್ತಿಯ ಪ್ರದೇಶಗಳು ಒಂದಕ್ಕೊಂದು ಸಮೀಪದಲ್ಲಿದ್ದು ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಿವೆ. ಈ ಭಾಗದಲ್ಲಿ ಚಿರತೆಗಳ ಓಡಾಟ ಸಾಮಾನ್ಯವಾಗಿದ್ದು, ಇದೀಗ ಹುಲಿಯೂ ಕಾಣಿಸಿಕೊಂಡಿದೆ ಎಂಬ ಮಾಹಿತಿ ಹರಿದಾಡುತ್ತಿದೆ.
ಎರಡು ದಿನಗಳ ಹಿಂದೆ ಸ್ಥಳೀಯ ವ್ಯಕ್ತಿಯೊಬ್ಬರು ಮನೆ ಸಮೀಪ ಕಾಡಂಚಿನ ರಸ್ತೆಯಲ್ಲಿ ತೆರಳುತ್ತಿದ್ದಾಗ ಹುಲಿಯೊಂದು ಎದುರಾದ ಬಗ್ಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. ಆದರೆ ಕಂಡ ಪ್ರಾಣಿ ಹುಲಿಯೇ ಅಥವಾ ಚಿರತೆಯೇ ಎಂಬ ಬಗ್ಗೆ ಅಧಿಕೃತವಾಗಿ ದೃಢಪಟ್ಟಿಲ್ಲ. ಅರಣ್ಯ ಪ್ರದೇಶದ ಸಮೀಪದಲ್ಲಿರುವ ಮನೆಗಳಲ್ಲಿ ವಾಸಿಸುವ ಕುಟುಂಬಗಳು, ವಿಶೇಷವಾಗಿ ಶಾಲಾ ವಿದ್ಯಾರ್ಥಿಗಳ ಸುರಕ್ಷತೆ ಬಗ್ಗೆ ಚಿಂತಿತರಾಗಿದ್ದು, ಅರಣ್ಯ ಇಲಾಖೆ ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.