ಬೆಳ್ತಂಗಡಿ: ಪಟ್ಟಣದ ಚರ್ಚ್ ರೋಡ್‌ನಲ್ಲಿ ಸಂಭವಿಸಿದ ಭೀಕರ ಸರಣಿ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಇಬ್ಬರು ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದಾರೆ. ನಾವೂರು ನಿವಾಸಿ ಸಂತೋಷ್ (43) ಹಾಗೂ ಕಣಿಯೂರು ಗ್ರಾಮದ ಪಿಲಿಗೂಡು ನಿವಾಸಿ ಮೋಹನ್ ಕುಮಾರ್ (33) ಮೃತರು.
ಮಂಗಳೂರಿನಿಂದ ಚಿಕ್ಕಮಗಳೂರು ಕಡೆಗೆ ಪುನೀತ್ ಎಂಬಾತ ಚಲಾಯಿಸುತ್ತಿದ್ದ ಗೂಡ್ಸ್ ಟೆಂಪೋ ಹಾಗೂ ಗುರುವಾಯನಕೆರೆ ಕಡೆಗೆ ಸಾಗುತ್ತಿದ್ದ ಎರಡು ದ್ವಿಚಕ್ರ ವಾಹನಗಳ ನಡುವೆ ಭೀಕರ ಅಪಘಾತ ಸಂಭವಿಸಿದೆ. ಗೂಡ್ಸ್ ವಾಹನ ಎರಡು ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಸವಾರರು ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ. ಅಪಘಾತದ ತೀವ್ರತೆಗೆ ವಾಹನಗಳಿಗೂ ಹಾನಿಯಾಗಿದೆ.
ಸಂತೋಷ್ ಮಂಗಳೂರಿನಲ್ಲಿ ಚಾಲಕ ವೃತ್ತಿ ನಿರ್ವಹಿಸುತ್ತಿದ್ದರು. ತಂದೆ, ತಾಯಿ, ಪತ್ನಿ ಹಾಗೂ ಇಬ್ಬರು ಪುಟ್ಟ ಮಕ್ಕಳನ್ನು ಅಗಲಿದ್ದಾರೆ. ಮೋಹನ್ ಕುಮಾರ್ ಬೆಳ್ತಂಗಡಿಯಲ್ಲಿ ಯೋಗದೀಪ್ ಪ್ರಿಂಟರ್ಸ್ ಸಂಸ್ಥೆ ನಡೆಸುತ್ತಿದ್ದರು. ತಾಯಿ ಹಾಗೂ ಸಹೋದರಿಯನ್ನು ಅಗಲಿದ್ದಾರೆ. ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.