ಮಂಗಳೂರು: ನಿಷೇಧಿತ ಮಾದಕವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಮೂವರನ್ನು ಮಂಗಳೂರು ನಗರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಸುಮಾರು 24 ಲಕ್ಷ ರೂ.ಮೌಲ್ಯದ 240 ಗ್ರಾಂ ಎಂಡಿಎಂಎ ವಶಪಡಿಸಿಕೊಂಡಿದ್ದಾರೆ.
ಉಳ್ಳಾಲ ತಾಲೂಕು ಮುಡಿಪು ಕೈರಂಗಳ ಗ್ರಾಮದ ನವಾಜ್ ಅಲಿಯಾಸ್ ನವ್ವಾ ಅಲಿಯಾಸ್ ಮುಡಿಪು ನವಾಜ್ (35), ಕೈರಂಗಳ ನಟ್ಟಿಹಿತ್ತಲು ಮನೆಯ ಮೊಹಮ್ಮದ್ ಆರೀಫ್ ಎನ್. (36) ಮತ್ತು ಕೈರಂಗಳದ ಲಾಯ್ಡ ಡಿಸೊಜ (35) ಬಂಧಿತ ಆರೋಪಿಗಳು.
ಆರೋಪಿಗಳು ಬೆಂಗಳೂರು ನಗರದಿಂದ ಎಂಡಿಎಂಎ ಖರೀದಿಸಿ ತಂದು ಅದನ್ನು ಮಂಗಳೂರು ನಗರದಲ್ಲಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸರು ಸೆ.26ರಂದು ಸಂಜೆ ಮುಡಿಪು ಕಾಯರ್ ಗೋಳಿ ಕ್ರಾಸ್ ಬಳಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳಿಂದ 24 ಲಕ್ಷ ರೂ. ಮೌಲ್ಯದ 240 ಗ್ರಾಂ ಎಂಡಿಎಂಎ ಹಾಗೂ 4 ಮೊಬೈಲ್ ಫೋನ್, ಮಾದಕ ವಸ್ತು ಸಾಗಾಟಕ್ಕೆ ಬಳಸಿದ ಟೆಂಪೋ ವಾಹನ ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ 29.80 ಲಕ್ಷ ರೂ. ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ಆರೋಪಿ ನವಾಜ್ ವಿರುದ್ಧ ಮಂಗಳೂರು ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ಹಲ್ಲೆ, ಬೆದರಿಕೆ, ಕೊಲೆಯತ್ನ, ಅಪಹರಣ, ಅತ್ಯಾಚಾರ, ವಂಚನೆ, ಮೋಸ, ದನಗಳ್ಳತನ ಹಾಗೂ ಮಾದಕವಸ್ತು ಮಾರಾಟ ಸೇರಿದಂತೆ ವಿವಿಧ ಅಪರಾಧಗಳಿಗೆ ಸಂಬಂಧಿಸಿದಂತೆ ಒಟ್ಟು ಸುಮಾರು 16 ಪ್ರಕರಣಗಳು ದಾಖಲಾಗಿವೆ. ಕೊಣಾಜೆ ಪೊಲೀಸ್ ಠಾಣೆಯಲ್ಲಿ 12 ಪ್ರಕರಣ, ಉಳ್ಳಾಲ ಪೊಲೀಸ್ ಠಾಣೆಯಲ್ಲಿ 2, ಮೂಲ್ಕಿ ಪೊಲೀಸ್ ಠಾಣೆಯಲಿ ್ಲ1 ಹಾಗೂ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ 1 ಪ್ರಕರಣ ದಾಖಲಾಗಿವೆ. ಮಾದಕವಸ್ತು ಮಾರಾಟಕ್ಕೆ ಸಂಬಂಧಿಸಿದಂತೆ ಈತನ ವಿರುದ್ಧ ಈ ಹಿಂದೆ ಉಳ್ಳಾಲ ಪೊಲೀಸ್ ಠಾಣೆ ಮತ್ತು ಕೊಣಾಜೆ ಪೊಲೀಸ್ ಠಾಣೆಯಲ್ಲಿ ತಲಾ ಎರಡು ಪ್ರಕರಣ ದಾಖಲಾಗಿವೆ
ಈ ಮಾದಕವಸ್ತು ಮಾರಾಟ ಹಾಗೂ ಸಾಗಾಟ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಆರೋಪಿಗಳ ಪತ್ತೆ ಕಾರ್ಯ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.