ಮೈಸೂರು: ಎರಡನೇ ವರ್ಷದ ಪಿಜಿ ಪರೀಕ್ಷೆಗಳನ್ನು ಮುಂದೂಡಬೇಕೆಂದು ಒತ್ತಾಯಿಸಿ ದಲಿತ ವಿದ್ಯಾರ್ಥಿಗಳ ಒಕ್ಕೂಟದ ವತಿಯಿಂದ ಬುಧವಾರ ಮಾನಸಗಂಗೋತ್ರಿಯ ರೌಂಡ್ ಕ್ಯಾಂಟೀನ್ ಬಳಿ ಪ್ರತಿಭಟನೆ ನಡೆಸಲಾಯಿತು.
ಪಿಜಿ ಪರೀಕ್ಷೆಗಳನ್ನು ಪ್ರಕಟಿಸಲಾಗಿದೆ. ಆದರೆ ಪರೀಕ್ಷೆಗಳ ನಡುವೆ ಸಮಯಾವಕಾಶ ನೀಡಿಲ್ಲ. ಇದರಿಂದ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳಲು ಸರಿಯಾದ ಸಮಯಾವಕಾಶ ಸಿಗುತ್ತಿಲ್ಲ. ಹೀಗಾಗಿ ಕೂಡಲೇ ಪರೀಕ್ಷೆಗಳನ್ನು ಮುಂದೂಡಬೇಕು ಎಂದು ಒತ್ತಾಯಿಸಿದರು. ಜತೆಗೆ ದೈಹಿಕ ಶಿಕ್ಷಣ ವಿಭಾಗದ ಮುಖ್ಯಸ್ಥ ಪ್ರೊ ವೆಂಕಟೇಶ್ ಅವರನ್ನು ಅಮಾನತುಗೊಳಿಸುವಂತೆ ಆಗ್ರಹಿಸಿದರು.
ಈ ವೇಳೆ ಪ್ರತಿಭಟನಾ ಸ್ಥಳಕ್ಕಾಗಮಿಸಿದ ಕುಲಸಚಿವೆ ಶೈಲಜಾ ಹಾಗೂ ಪರೀಕ್ಷಾಂಗ ವಿಭಾಗದ ರಿಜಿಸ್ಟ್ರಾರ್ ಮಹಾದೇವಯ್ಯ ಪ್ರತಿಭಟಾಕಾರರ ಅಹವಾಲು ಆಲಿಸಿದರು. ಪರೀಕ್ಷೆಯನ್ನು ಮುಂದೂಡುವ ಬಗ್ಗೆ ಪರಿಶೀಲನೆ ಮಾಡಲಾಗುವುದು. ಈ ಬಗ್ಗೆ ನಾಳೆ ಹೊಸದಾಗಿ ಪರೀಕ್ಷಾ ವೇಳಾಪಟ್ಟಿ ತಯಾರಿಸಲಾಗುವುದು. ಅಮಾನತು ವಿಚಾರಕ್ಕೆ ಸಂಬಂಧಿಸಿದಂತೆ ಉನ್ನತ ಮಟ್ಟದ ಸಮಿತಿ ರಚಿಸಲಾಗಿದ್ದು, ತನಿಖೆ ನಂತರ ಸೂಕ್ತ ಕ್ರಮಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.