ದಾವಣಗೆರೆ : ರಾಜ್ಯದ ಗಡಿಗೆ ಹೊಂದಿಕೊಂಡಿರುವ ಹೊಸೂರಿನಲ್ಲಿ ಹಾಡುಹಗಲೇ ನಡೆದ ವಕೀಲ ಕಣ್ಣನ್ ಅವರ ಕೊಲೆ ಘಟನೆ ಖಂಡಿಸಿ ಜಿಲ್ಲಾ ವಕೀಲರ ಸಂಘದಿಂದ ನಗರದಲ್ಲಿ ಗುರುವಾರ ಪ್ರತಿಭಟನೆ ನಡೆಸಲಾಯಿತು. ಜಿಲ್ಲಾ ನ್ಯಾಯಾಲಯದ ಆವರಣಲ್ಲಿ ಸಭೆ ಸೇರಿದ ವಕೀಲರು ಮಾನವ ಸರಪಳಿ ರಚಿಸಿ ವಕೀಲನನ್ನು ಹತ್ಯೆಗೈದ ಪಾತಕಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಆಗ್ರಹಿಸಿದರು. ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು. ಈ ಘಟನೆಯಿಂದ ವಕೀಲರಿಗೆ ಯಾವುದೇ ಭದ್ರತೆ ಇಲ್ಲದೆ ಭಯದಿಂದ ನ್ಯಾಯಾಲಯಗಳಿಗೆ ಹಾಜರಾಗುವಂತೆ ಹಾಗೂ ಭಯಭೀತರಾಗಿ ಓಡಾಡುವ ಪರಿಸ್ಥಿತಿ ಉಂಟಾಗಿದೆ ಎಂದು ದೂರಿದರು. ನ್ಯಾಯಾಲಯದ ಆವರಣದಲ್ಲಿ ವಕೀಲನ ಮಾರಣಾಂತಿಕ ಹಲ್ಲೆ ಮಾಡಿದವರ ವಿರುದ್ಧ ಹಾಗೂ ಕೃತ್ಯದಲ್ಲಿ ಭಾಗಿಯಾದವರನ್ನು ಕೂಡಲೇ ಬಂಧಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸ್ ಇಲಾಖೆಗೆ ನಿರ್ದೇಶನ ನೀಡಬೇಕು ಹಾಗೂ ವಕೀಲರಿಗೆ ಸೂಕ್ತ ಭದ್ರತೆ ಒದಗಿಸಬೇಕೆಂದು ಸರ್ಕಾರಕ್ಕೆ ಆಗ್ರಹಿಸಿದರು. ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಲ್.ಹೆಚ್. ಅರುಣ್‌ಕುಮಾರ್, ಕಾರ್ಯದರ್ಶಿ ಎಸ್.ಬಸವರಾಜ್, ಉಪಾಧ್ಯಕ್ಷ ಜಿ.ಕೆ. ಬಸವರಾಜ್ ಗೋಪನಾಳ್, ಎಸ್. ಬಸವರಾಜ್, ಸಹ ಕಾರ್ಯದರ್ಶಿ ಎ.ಎಸ್. ಮಂಜುನಾಥ್, ಬಿ. ಅಜ್ಜಯ್ಯ ಆವರಗೆರೆ, ಆರ್.ಭಾಗ್ಯಲಕ್ಷ್ಮಿ ಇತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.