ಜಿಲ್ಲೆ

ಮಾಗನೂರು ಬಸಪ್ಪ ಪ್ರಶಸ್ತಿ ಪ್ರದಾನ ಸಮಾರಂಭ

ರಮೇಶ ಜಹಗೀರದಾರ್

ದಾವಣಗೆರೆ :  ಆರೂಢ ದಾಸೋಹಿ ಶರಣ ಮಾಗನೂರು ಬಸಪ್ಪ ಹೆಸರಿನಲ್ಲಿ ದಾವಣಗೆರೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಶರಣ ಮಾಗನೂರು ಬಸಪ್ಪ ಪ್ರತಿಷ್ಠಾನ ನೀಡುವ ‘ಆರೂಢ ದಾಸೋಹಿ ಶರಣ ಮಾಗನೂರು ಬಸಪ್ಪ’ ಪ್ರಶಸ್ತಿ ಪ್ರದಾನ ಸಮಾರಂಭ ಶನಿವಾರ ಬೆಳಗ್ಗೆ 11 ಗಂಟೆಗೆ ನಗರದ ಕುವೆಂಪು ಕನ್ನಡ ಭವನದಲ್ಲಿ ನಡೆಯಲಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬಿ. ವಾಮದೇವಪ್ಪ ತಿಳಿಸಿದ್ದಾರೆ.  ಈ ಬಾರಿಯ ಪ್ರಶಸ್ತಿಯನ್ನು ವಚನ ಸಾಹಿತ್ಯ ಸಂಶೋಧನೆಯಲ್ಲಿ ಗಣನೀಯ ಸಾಧನೆ ಮಾಡಿರುವ ಧಾರವಾಡದ ಶರಣ ಡಾ.ವೀರಣ್ಣ ಬಿ. ರಾಜೂರ ಅವರಿಗೆ ನೀಡಲಾಗುವುದು. ಪ್ರಶಸ್ತಿಯು 50 ಸಾವಿರ ರೂ. ನಗದು, ಫಲಕ, ಶಾಲು, ಫಲ ತಾಂಬೂಲ ಒಳಗೊಂಡಿದೆ.  ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದ ಶ್ರೀ ವಚನಾನಂದ ಸ್ವಾಮೀಜಿ ಸಮಾರಂಭದ ಸಾನ್ನಿಧ್ಯ ವಹಿಸುವರು. ಮಾಗನೂರು ಬಸಪ್ಪ ಪ್ರತಿಷ್ಠಾನದ ಅಧ್ಯಕ್ಷ ಎಂ.ಬಿ.ಸಂಗಮೇಶ್ವರ ಗೌಡರು ಅಧ್ಯಕ್ಷತೆ ವಹಿಸುವರು. ಪ್ರಶಸ್ತಿ ಪುರಸ್ಕೃತರ ಕುರಿತಾಗಿ ಶರಣ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಡಾ.ಸಿ.ಸೋಮಶೇಖರ ಅಭಿನಂದನಾ ನುಡಿಗಳನ್ನು ನುಡಿಯುವರು.  ಮಾಗನೂರು ಬಸಪ್ಪ ಅವರ ವ್ಯಕ್ತಿತ್ವದ ಕುರಿತು ಸಿರಿಗೆರೆಯ ಶ್ರೀ ತರಳಬಾಳು ಜಗದ್ಗುರು ವಿದ್ಯಾಸಂಸ್ಥೆಯ ಆಡಳಿತಾಧಿಕಾರಿ ಡಾ.ಎಚ್.ವಿ. ವಾಮದೇವಪ್ಪ ಉಪನ್ಯಾಸ ನೀಡುವರು. ಜವಳಿ ಉದ್ಯಮಿ ಬಿ.ಸಿ.ಉಮಾಪತಿ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷ ಡಾ.ಎಚ್.ಎಸ್. ಮಂಜುನಾಥ ಕುರ್ಕಿ ಭಾಗವಹಿಸುವರು. ಮಾಗನೂರು ಬಸಪ್ಪ ಶಾಲಾ ವಿದ್ಯಾರ್ಥಿಗಳು ವಚನಗೀತೆ ಹಾಗೂ ನಾಡಗೀತೆಯನ್ನು ಪ್ರಸ್ತುತಪಡಿಸುವರು.