ಜಿಲ್ಲೆ

ಭದ್ರಾ ಡ್ಯಾಂ ಬಳಿ ಅವೈಜ್ಞಾನಿಕ ಕಾಮಗಾರಿಗೆ ವಿರೋಧ

ರಮೇಶ ಜಹಗೀರದಾರ್

ದಾವಣಗೆರೆ :  ಭದ್ರಾ ಜಲಾಶಯದ 16 ಎಕರೆ ಬಫರ್ ಜೋನ್ ಪ್ರದೇಶದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಾಣ ವಿರೋಧಿಸಿ ಜಿಲ್ಲಾ ಬಿಜೆಪಿ ರೈತ ಮೋರ್ಚಾದಿಂದ ಅಪರ ಜಿಲ್ಲಾಧಿಕಾರಿಗೆ ಬುಧವಾರ ಮನವಿ ಸಲ್ಲಿಸಲಾಯಿತು.  ತರೀಕೆರೆ ಮತ್ತು ಹೊಸದುರ್ಗ ತಾಲೂಕಿನ ಗ್ರಾಮಾಂತರ ಪ್ರದೇಶದ ಹಳ್ಳಿಗಳಿಗೆ ಕುಡಿಯುವ ನೀರೊದಗಿಸಲು ಜೆಜೆಎಂ ಯೋಜನೆಯಡಿ ಅಂದಾಜು 500 ಕೋಟಿ ರೂ. ವೆಚ್ಚದಲ್ಲಿ ಕೈಗೊಳ್ಳಲಾಗಿದೆ. ಇದು ಸಂಪೂರ್ಣ ಅವೈಜ್ಞಾನಿಕವಾಗಿದ್ದು, ಜಲಾಶಯದ ಅಭದ್ರತೆಗೆ ಕಾರಣವಾಗಿದೆ ಎಂದು ಜಿಲ್ಲಾ ಬಿಜೆಪಿ ವಕ್ತಾರ ಕೊಳೇನಹಳ್ಳಿ ಬಿ.ಎಂ.ಸತೀಶ್ ದೂರಿದರು.  ಮಧ್ಯ ಕರ್ನಾಟಕದ ಜನರ ಜೀವನಾಡಿ ಭದ್ರಾ ಜಲಾಶಯ 6 ಜಿಲ್ಲೆಗಳ ಸುಮಾರು 4.5 ಲಕ್ಷ ಎಕರೆ ಕೃಷಿ ಮತ್ತು ಕುಡಿಯುವ ನೀರಿನ ನೀರಾವರಿ ಮೂಲವಾಗಿದೆ. ಈ ನೀರನ್ನು ನಂಬಿ ಲಕ್ಷಾಂತರ ರೈತರು ಬದುಕು ಕಟ್ಟಿಕೊಂಡಿದ್ದು, ಸದ್ದಿಲ್ಲದೆ ಕುಡಿಯುವ ನೀರಿನ ಶುದ್ಧೀಕರಣ ಘಟಕ ಮತ್ತು ವಸತಿ ಸಮುಚ್ಚಯಗಳ ನಿರ್ಮಾಣ ಕಾಮಗಾರಿ ನಡೆಸುತ್ತಿರುವುದು ಸರಿಯಲ್ಲ ಎಂದು ಆಕ್ಷೇಪಿಸಿದರು.  ಭದ್ರಾ ಡ್ಯಾಂ ತಳಭಾಗದಲ್ಲಿ ಜೆಜೆಎಂ ಯೋಜನೆಯಡಿ ಕೈಗೊಳ್ಳಲಾದ ಅವೈಜ್ಞಾನಿಕ ಕಾಮಗಾರಿಯನ್ನು ತಕ್ಷಣ ನಿಲ್ಲಿಸಬೇಕು. ಭದ್ರಾ ಡ್ಯಾಂ ಸುರಕ್ಷತೆ ಬಗ್ಗೆ ಸಮೀಕ್ಷೆ ಮಾಡಿ, ಸೂಕ್ತ ಭದ್ರತೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.  1962ರಲ್ಲಿ ಗಾರೆ, ಸುಣ್ಣ ಮತ್ತು ಕಲ್ಲು ಬಳಸಿ ಭದ್ರಾ ಡ್ಯಾಂ ನಿರ್ಮಿಸಲಾಗಿದ್ದು, ಸಹಜವಾಗಿ ಡ್ಯಾಂನ ತಳಭಾಗದಲ್ಲಿ ನೀರು ಸೋರಿಕೆಯಾಗುತ್ತಿದೆ. ಇದನ್ನು ತಡೆಗಟ್ಟಬೇಕು. ಹಳೆಯ ಡ್ಯಾಂ ಗೇಟ್‌ಗಳನ್ನು ಸರಿಪಡಿಸಿ ಗಟ್ಟಿಗೊಳಿಸಬೇಕು.  ಜರ್ಮನ್ ತಂತ್ರಜ್ಞಾನದಡಿ ಸಿದ್ಧಪಡಿಸಿರುವ ಜಲಾಶಯ ನಿರ್ವಹಣೆಯ ಕ್ರೇನ್‌ಗಳನ್ನು ರೀ ಕಂಡೀಷನ್ ಮಾಡಿಸಬೇಕು. ಸೇತುವೆ ಬಳಿ ಆಗಾಗ ಕುಸಿಯುವ ತಡೆಗೋಡೆ ಸರಿಪಡಿಸಿ ಭದ್ರಗೊಳಿಸಬೇಕು. ಡ್ಯಾಂನ ಸುತ್ತಲೂ ಬೇಲಿ ನಿರ್ಮಿಸಿ ಸುಭದ್ರತೆ ಕಾಪಾಡಬೇಕು ಎಂದು ಆಗ್ರಹಿಸಿದರು.  ಜಲಾಶಯದ ಸುರಕ್ಷತೆಯ ಮೇಲ್ವಿಚಾರಣೆ ನಡೆಸುವ ಕೇಂದ್ರದ ಜಲ ಆಯೋಗ ಡ್ಯಾಂನ ಪುನರುತ್ಥಾನ ಮತ್ತು ಅಭಿವೃದ್ಧಿ ಯೋಜನೆಯಡಿ ಡ್ಯಾಂನ ಸುರಕ್ಷತೆಗೆ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, ಸರ್ಕಾರ 100 ಕೋಟಿ ರೂ. ಬಿಡುಗಡೆ ಮಾಡಿ, ಡ್ಯಾಂನ ಸುರಕ್ಷತೆ ಕಾಪಾಡಬೇಕು ಎಂದು ಒತ್ತಾಯಿಸಿದರು.  ದೂಡ ಮಾಜಿ ಅಧ್ಯಕ್ಷರಾದ ರಾಜನಹಳ್ಳಿ ಶಿವಕುಮಾರ್, ಎ.ವೈ.ಪ್ರಕಾಶ್, ಮಾಜಿ ಮೇಯರ್ ಎಚ್.ಎನ್.ಗುರುನಾಥ್, ಜಿಲ್ಲಾ ಬಿಜೆಪಿ ಮುಖಂಡರಾದ ಎ.ಬಿ.ಹನುಮಂತಪ್ಪ, ಎಚ್.ಎನ್.ಶಿವಕುಮಾರ್, ಕೆ.ವಿ.ಚನ್ನಪ್ಪ, ವಕೀಲ ಕೆ.ಎಚ್.ಧನಂಜಯ ಇತರರು ಭಾಗವಹಿಸಿದ್ದರು.