ಜಿಲ್ಲೆ

ಭದ್ರಾ ಮೇಲ್ದಂಡೆಗೆ ಹಣ ನೀಡದ ಕೇಂದ್ರ

ರಮೇಶ ಜಹಗೀರದಾರ್

ದಾವಣಗೆರೆ : ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ರೂ. ನೀಡುವುದಾಗಿ ಘೋಷಿಸಿದ್ದ ಕೇಂದ್ರ ಸರ್ಕಾರ ನುಡಿದಂತೆ ನಡೆದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದರು.  ನಗರದ ಹೈಸ್ಕೂಲ್ ಮೈದಾನದಲ್ಲಿ ಸೋಮವಾರ, 1350 ಕೋಟಿ ರೂ.ಗಳ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಮತ್ತು ಫಲಾನುಭವಿಗಳಿಗೆ ಸವಲತ್ತು ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದರು.  ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್‌ನಲ್ಲಿ ಈ ಯೋಜನೆಗೆ ಹಣ ಬಿಡುಗಡೆ ಮಾಡುವುದಾಗಿ ಪ್ರಸ್ತಾಪಿಸಿದ್ದರು. ರಾಷ್ಟ್ರೀಯ ಯೋಜನೆ ಎಂದು ಘೋಷಿಸುವುದಾಗಿಯೂ ಹೇಳಿದ್ದರು. ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು ಸಂಸತ್ ಅಧಿವೇಶನದಲ್ಲಿ ಈ ವಿಷಯ ಪ್ರಸ್ತಾಪಿಸಿದ್ದರು. ಆದರೆ ಇದುವರೆಗೂ ಹಣ ಬಿಡುಗಡೆಯಾಗಿಲ್ಲ ಎಂದು ತಿಳಿಸಿದರು.  ನಾವು ನುಡಿದಂತೆ ನಡೆದಿದ್ದೇವೆ. ಸರ್ಕಾರಿ ಕಚೇರಿಗಳಲ್ಲಿ ಬಸವಣ್ಣನ ಭಾವಚಿತ್ರ ಹಾಕುವ ನಿರ್ಧಾರ ಮಾಡಿದ್ದು ನಾವು. ಬಸವಣ್ಣನನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಣೆ ಮಾಡಿದ್ದು, ಕಿತ್ತೂರು ರಾಣಿ ಚನ್ನಮ್ಮ ಜಯಂತ್ಯುತ್ಸವ ಆಚರಣೆ ಆರಂಭಿಸಿದ್ದು, ಮಹಿಳಾ ವಿಶ್ವವಿದ್ಯಾಲಯಕ್ಕೆ ಅಕ್ಕಮಹಾದೇವಿ ಹೆಸರಿಟ್ಟಿದ್ದು, ಬಸವಕಲ್ಯಾಣದಲ್ಲಿ ಅನುಭವ ಮಂಟಪ ಮರುಸ್ಥಾಪನೆ ಮಾಡಿದ್ದು ನಮ್ಮ ಸರ್ಕಾರ ಎಂದು ಸಾಧನೆಗಳ ಪಟ್ಟಿ ಮಾಡಿದರು.  ಬಿಜೆಪಿ ಮತ್ತು ಜೆಡಿಎಸ್ ಇಬ್ಬರೂ ಒಂದಾದರೂ, ವಿಧಾನಸಭೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವೇ ಗೆದ್ದಿತು. ಮುಂದೆಯೂ ನಾವೇ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ದಾವಣಗೆರೆ ಜಿಲ್ಲೆಯಲ್ಲಿ 7ಕ್ಕೆ ಏಳೂ ಸ್ಥಾನಗಳನ್ನು ಮುಂದೆ ಗೆಲ್ಲಬೇಕು ಎಂದು ಹೇಳಿದರು.  ಗೃಹ ಸಚಿವ ಡಾ. ಜಿ. ಪರಮೇಶ್ವರ್, ಯೋಜನೆ ಮತ್ತು ಸಾಂಖ್ಯಿಕ ಸಚಿವ ಸುಧಾಕರ್, ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್, ಶಾಸಕರಾದ ಡಿ.ಜಿ. ಶಾಂತನಗೌಡ, ಬಿ. ದೇವೇಂದ್ರಪ್ಪ, ಕೆ.ಎಸ್. ಬಸವಂತಪ್ಪ, ಶಿವಗಂಗಾ ಬಸವರಾಜ್, ಬಿ.ಪಿ. ಹರೀಶ್, ವೀರೇಂದ್ರ ಪಪ್ಪಿ, ತಾಂಡಾ ಅಭಿವೃದ್ಧಿ ನಿಗಮ ಅಧ್ಯಕ್ಷ ಜಯದೇವ ನಾಯ್ಕ, ದೂಡಾ ಅಧ್ಯಕ್ಷ ದಿನೇಶ ಕೆ. ಶೆಟ್ಟಿ, ಬ್ರಾಹ್ಮಣ ಅಭಿವೃದ್ಧಿ ನಿಗಮದ ಅಧ್ಯಕ್ಷ ಅಸಗೋಡು ಜಯಸಿಂಹ, ಮುಖಂಡರಾದ ಶಾಮನೂರು ಟಿ. ಬಸವರಾಜ ಇದ್ದರು. ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ಸ್ವಾಗತಿಸಿದರು.