ದಾವಣಗೆರೆ: ದೇಶ ವಿಭಜನೆ ಕುರಿತ ಸಂಸದ ಡಿ.ಕೆ. ಸುರೇಶ್ ಹೇಳಿಕೆ ಖಂಡಿಸಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಸೋಮವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.
ಬಿಜೆಪಿ ಜಿಲ್ಲಾ ಕಚೇರಿಯಿಂದ ಮೆರವಣಿಗೆ ಹೊರಟ ಪ್ರತಿಭಟನಾಕಾರರು ಜಯದೇವ ವೃತ್ತದಲ್ಲಿ ಜಮಾಯಿಸಿ ಡಿ.ಕೆ.ಸುರೇಶ್ ವಿರುದ್ಧ ಧಿಕ್ಕಾರ ಕೂಗಿದರು. ಸಂಸದ ಸ್ಥಾನದಿಂದ ವಜಾಗೊಳಿಸಿ ಬಂಧಿಸುವಂತೆಯೂ ಒತ್ತಾಯಿಸಿದರು.
ಮಹಾನಗರ ಪಾಲಿಕೆ ಮಾಜಿ ಮೇಯರ್ ಎಸ್.ಟಿ.ವೀರೇಶ್ ಮಾತನಾಡಿ, ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ ದಕ್ಷಿಣ ಭಾರತವನ್ನು ಪ್ರತ್ಯೇಕ ರಾಷ್ಟ್ರವನ್ನಾಗಿಸಿ ದೇಶದ ಅಖಂಡತೆ ವಿರುದ್ಧದ ಹೇಳಿಕೆ ನೀಡಿರುವುದು ಖಂಡನೀಯ ಎಂದರು.
ಕಾಂಗ್ರೆಸ್ ಹುಟ್ಟಿದಾಗಿನಿಂದ ಇಲ್ಲಿಯವರೆಗೂ ದೇಶ, ಸಮಾಜ ಹಾಗೂ ಧರ್ಮ ಒಡೆಯುವ ಕೆಲಸ ಮಾಡುತ್ತಿದೆ. ಇದೀಗ ಡಿ.ಕೆ. ಸಹೋದರರು ಅದನ್ನು ಮುಂದುವರೆಸುತ್ತಿದ್ದಾರೆ ಎಂದು ದೂರಿದರು.
ರಾಜ್ಯದಲ್ಲಿ ಲಿಂಗಾಯತ ಧರ್ಮವನ್ನು ಒಡೆಯಲು ಯತ್ನಿಸಿದ ಪರಿಣಾಮ ಜನತೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ತಕ್ಕ ಪಾಠ ಕಲಿಸಿರುವುದನ್ನು ಮನಗಾಣಬೇಕು ಎಂದು ತಿಳಿಸಿದರು.
ರಾಷ್ಟ್ರ ವಿಭಜನೆ ಬಗ್ಗೆ ಮಾತನಾಡಿರುವ ಡಿ.ಕೆ.ಸುರೇಶ್ ಅವರನ್ನು ತಕ್ಷಣ ಸಂಸದ ಸ್ಥಾನದಿಂದ ವಜಾಗೊಳಿಸಿ ಬಂಧಿಸಬೇಕು ಹಾಗೂ ಹೇಳಿಕೆ ಹಿನ್ನೆಲೆಯಲ್ಲಿ ಸುರೇಶ್ ದೇಶದ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿದರು.
ಹೇಳಿಕೆ ವಿರೋಧಿಸಿ ಪ್ರತಿಭಟನೆಗಿಳಿದಿದ್ದ ಬಿಜೆಪಿ ಕಾರ್ಯಕರ್ತರ ಮೇಲೆ ಪೊಲೀಸರ ಮೂಲಕ ಗಂಭೀರ ಹಲ್ಲೆ ನಡೆಸಿರುವುದು ಸರಿಯಲ್ಲ. ಬಂಧಿತ ಕಾರ್ಯಕರ್ತರನ್ನು ಬಿಡುಗಡೆಗೊಳಿಸಬೇಕು. ಅಖಂಡ ಭಾರತದ ಉಳಿವಿಗೆ ಯಾವುದೇ ಹೋರಾಟಕ್ಕೂ ಸಿದ್ಧ್ದ ಎಂದರು.
ಪಾಲಿಕೆ ವಿಪಕ್ಷ ನಾಯಕ ಕೆ. ಪ್ರಸನ್ನಕುಮಾರ್ ಮಾತನಾಡಿ, ಒಂದೆಡೆ ಕಾಂಗ್ರೆಸ್ ನಾಯಕ ರಾಹುಲ್‌ಗಾಂಧಿ ಭಾರತ್ ಜೋಡೋ ಯಾತ್ರೆ ನಡೆಸುತ್ತಿದ್ದರೆ ಸಂಸದ ಡಿ.ಕೆ.ಸುರೇಶ್ ಅವರು ಪ್ರತ್ಯೇಕ ರಾಷ್ಟ್ರದ ಮಾತನಾಡಿರುವುದು ಕಾಂಗ್ರೆಸ್ ನಾಟಕವನ್ನು ಬಯಲು ಮಾಡಿದೆ. ಲೋಕಸಭಾ ಚುನಾವಣೆಯಲ್ಲಿ ಇದಕ್ಕೆ ತೆರೆ ಬೀಳಲಿದೆ ಎಂದು ಹೇಳಿದರು.
ಕಾಂಗ್ರೆಸ್ ಸರ್ಕಾರ ಪ್ರತಿಭಟನಾನಿರತರ ಮೇಲೆ ಗೂಂಡಾಗಿರಿ ಪ್ರದರ್ಶಿದೆ. ರಾಜ್ಯದಲ್ಲಿ ಇದಕ್ಕೆ ಅವಕಾಶ ನೀಡುವುದಿಲ್ಲ. ದೇಶದ ಭಾರತೀಯ ಜನತಾ ಪಕ್ಷದಿಂದ ದೇಶ ಕಾಪಾಡಲು ನಿರಂತರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.
ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಆರ್.ಎಲ್.ಶಿವಪ್ರಕಾಶ್, ಪ್ರಧಾನ ಕಾರ್ಯದರ್ಶಿ ಯಲ್ಲೇಶ್, ಶಿವನಗೌಡ ಪಾಟೀಲ್, ಕೆ.ವಿ.ಗುರು, ಪ್ರವೀಣ್ ಜಾಧವ್, ಸಚಿನ್, ರಾಕೇಶ್, ಚಂದ್ರು, ಕಿರಣ್, ಕಿಶೋರ್, ಶಿವರಾಜ್ ಪಾಟೀಲ್, ಟಿಂಕರ್ ಮಂಜಣ್ಣ, ಮಂಜಾನಾಯ್ಕ ಇತರರು ಪ್ರತಿಭಟನೆಯಲ್ಲಿದ್ದರು.