ದಾವಣಗೆರೆ : ಅಪ್ರಾಪ್ತ ವಯಸ್ಸಿನ ಮಗನಿಗೆ ಬೈಕ್ ಚಾಲನೆ ಮಾಡಲು ನೀಡಿದ್ದ ವ್ಯಕ್ತಿಗೆ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶ ಮತ್ತು ಸಿಜೆಎಂ ನ್ಯಾಯಾಲಯ 25 ಸಾವಿರ ರೂ.ಗಳ ದಂಡ ವಿಧಿಸಿದೆ. ನಗರ ಡಿವೈಎಸ್ಪಿ ಮಲ್ಲೇಶ್ ದೊಡ್ಮನಿ ಮಾರ್ಗದರ್ಶನದಲ್ಲಿ ದಕ್ಷಿಣ ಸಂಚಾರ ಠಾಣೆ ಪಿಎಸ್‌ಐ ಡಿ.ಎಚ್. ನಿರ್ಮಲಾ ನೇತೃತ್ವದಲ್ಲಿ ಇತ್ತೀಚೆಗೆ ವಿಶೇಷ ಕಾರ್ಯಾಚರಣೆ ನಡೆಸಿ, ನಗರದ ನೂತನ ಕಾಲೇಜು ರಸ್ತೆಯಲ್ಲಿ ಬೈಕ್ ಚಾಲನೆ ಮಾಡುತ್ತಿದ್ದ 17 ವರ್ಷದ ಬಾಲಕನನ್ನು ವಿಚಾರಿಸಿ ಈ ಬಗ್ಗೆ ದಕ್ಷಿಣ ಸಂಚಾರ ಠಾಣೆಯಲ್ಲಿ ಭಾರತೀಯ ಮೋಟಾರು ವಾಹನ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದರು. ಸಂಚಾರ ನಿಯಮ ಉಲ್ಲಂಘನೆ ಮಾಡುವ ಸವಾರರ ಮೇಲೆ ವಿಶೇಷ ಕಾರ್ಯಾಚರಣೆ ನಡೆಸಿ ಕ್ರಮ ಜರುಗಿಸಲಾಗುವುದು. ಆದ್ದರಿಂದ ಸಾರ್ವಜನಿಕರು ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಪೊಲೀಸ್ ಅಧೀಕ್ಷಕಿ ಉಮಾ ಪ್ರಶಾಂತ್ ಹೇಳಿದ್ದಾರೆ.