ಜಿಲ್ಲೆ

ಬಾಲ್ಯವಿವಾಹ ಕುರಿತು ವ್ಯಾಪಕ ಅರಿವು ಮೂಡಿಸಿ

ರಮೇಶ ಜಹಗೀರದಾರ್

ದಾವಣಗೆರೆ :  ಬಾಲ್ಯವಿವಾಹ ಒಂದು ಸಾಮಾಜಿಕ ಪಿಡುಗಾಗಿದ್ದು, ಈ ಬಗ್ಗೆ ವ್ಯಾಪಕ ಅರಿವು ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಅಧಿಕಾರಿಗಳಿಗೆ ಸೂಚಿಸಿದರು.  ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.    ಜಿಲ್ಲೆಯ ಎಲ್ಲ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಲ್ಲಿ ಕಡ್ಡಾಯವಾಗಿ ಅರಿವು ಕಾರ್ಯಕ್ರಮ ಹಮ್ಮಿಕೊಂಡು ವರದಿ ನೀಡಬೇಕೆಂದು ತಿಳಿಸಿದರು.  ತಾಂಡಾಗಳಲ್ಲಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕುಟುಂಬಗಳಲ್ಲಿ ಮತ್ತು ಹಿಂದುಳಿದ ಸಮುದಾಯಗಳಲ್ಲಿ ಬಾಲ್ಯವಿವಾಹ ಹೆಚ್ಚಾಗಿ ಕಂಡು ಬರುತ್ತಿದೆ. ಈ ಸಮುದಾಯದ ಜನರು ವಾಸಿಸುವ ಪ್ರದೇಶಗಳಲ್ಲಿ ಜಾಗೃತಿ ಕಾರ್ಯಕ್ರಮ ಏರ್ಪಡಿಸಬೇಕು ಎಂದರು.  ಗ್ರಾಪಂ ಮಟ್ಟದಲ್ಲಿ ನರೇಗಾ ಕೂಲಿ ಕಾರ್ಮಿಕರಿಗೆ ಮತ್ತು ಸಾರ್ವಜನಿಕರಿಗೆ ಅರಿವು ಮೂಡಿಸಬೇಕು. ಈ ನಿಟ್ಟಿನಲ್ಲಿ ಅತ್ಯುತ್ತಮ ಕಾರ್ಯನಿರ್ವಹಿಸುವ ಗ್ರಾಪಂಗಳಿಗೆ ಪ್ರಶಂಸನಾ ಪತ್ರ ನೀಡಿ ಪ್ರೋತ್ಸಾಹಿಸಬೇಕು ಎಂದು ಹೇಳಿದರು.  ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ರಾಜನಾಯ್ಕ ಮಾಹಿತಿ ನೀಡಿ, ಪ್ರಸಕ್ತ ವರ್ಷದ ಏಪ್ರಿಲ್-ಮೇ ತಿಂಗಳಲ್ಲಿ ಒಟ್ಟು 26 ಬಾಲ್ಯವಿವಾಹದ ದೂರುಗಳು ಬಂದಿದ್ದವು. ಅವುಗಳಲ್ಲಿ 25 ಬಾಲ್ಯವಿವಾಹ ತಡೆದು 2 ಪ್ರಕರಣಗಳಲ್ಲಿ ಕೋರ್ಟ್‌ನಿಂದ ತಡೆಯಾಜ್ಞೆ ಪಡೆಯಲಾಗಿದೆ. ಇದೇ ಅವಧಿಯಲ್ಲಿ ಹೊನ್ನಾಳಿ ತಾಲೂಕಿನಲ್ಲಿ 1 ಬಾಲ್ಯವಿವಾಹ ನಡೆದಿದ್ದು ಎಫ್‌ಐಆರ್ ದಾಖಲಿಸಲಾಗಿದೆ ಎಂದು ತಿಳಿಸಿದರು.  ಬಾಲ್ಯ ವಿವಾಹ ತಡೆದ ಪ್ರಕರಣಗಳಲ್ಲಿ ಪಾಲಕರು ಮುಂದಿನ ದಿನಗಳಲ್ಲಿ ಮದುವೆ ಮಾಡಬಹುದಾಗಿದೆ ಎಂದು ಸಭೆಗೆ ತಿಳಿಸಿದಾಗ. ಈ ಎಲ್ಲ ಪ್ರಕರಣಗಳಲ್ಲಿ ಎಫ್‌ಐಆರ್ ದಾಖಲಿಸುವುದು ಅಥವಾ ಪೊಲೀಸರಿಗೆ ಮಾಹಿತಿ ನೀಡಿ ಅನುಸರಣೆ ಮಾಡಬೇಕೆಂದು ಜಿಲ್ಲಾಧಿಕಾರಿ ಹೇಳಿದರು.  ಹಿರಿಯ ಸಿವಿಲ್ ನ್ಯಾಯಾಧೀಶ ಮಹಾವೀರ್ ಮ. ಕರೆಣ್ಣವರ್, ಎಎಸ್‌ಪಿ ವಿಜಯ್ ಕುಮಾರ್ ಎಂ. ಸಂತೋಷ್, ಜಿಪಂ ಉಪಕಾರ್ಯದರ್ಶಿ ಕೃಷ್ಣನಾಯ್ಕ, ಡಿಡಿಪಿಐ ಕೊಟ್ರೇಶ್ ಇನ್ನಿತರ ಅಧಿಕಾರಿಗಳು ಇದ್ದರು.  ಜಿಲ್ಲಾಡಳಿತ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಪೊಲೀಸ್ ಇಲಾಖೆ ಸಹಯೋಗದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.