ಜಿಲ್ಲೆ

ಶೂನ್ಯಕ್ಕೆ ಇಳಿಯಲಿ ಬಾಲ್ಯವಿವಾಹ ಪ್ರಕರಣ

ರಮೇಶ ಜಹಗೀರದಾರ್

ದಾವಣಗೆರೆ  : ಜಿಲ್ಲೆಯಲ್ಲಿ ಬಾಲ್ಯವಿವಾಹ, ಪೋಕ್ಸೋ ಹಾಗೂ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳ ಸಂಖ್ಯೆ ಶೂನ್ಯಕ್ಕೆ ತರುವಲ್ಲಿ ಅಧಿಕಾರಿಗಳು ಪ್ರಯತ್ನಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಸಿಇಒ ಗಿತ್ತೆ ಮಾಧವ ವಿಠಲ ರಾವ್ ತಿಳಿಸಿದರು.  ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗಳು ಹಾಗೂ ಮಕ್ಕಳ ರಕ್ಷಣಾ ಘಟಕದ ಸಹಯೋಗದೊಂದಿಗೆ ಜಿಲ್ಲಾಡಳಿತ ಭವನದಲ್ಲಿ ಗುರುವಾರ, ಬಾಲ್ಯವಿವಾಹ ನಿಷೇಧಾಧಿಕಾರ ಮತ್ತು ಕರ್ತವ್ಯ ಹಾಗೂ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಅಪರಾಧ ತಡೆ ಕಾಯ್ದೆ 2012ರ ಕುರಿತು ಆಯೋಜಿಸಲಾದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.  ಬಾಲ್ಯವಿವಾಹ ಪ್ರಕರಣಗಳು ಗ್ರಾಮೀಣ ಭಾಗದಲ್ಲೇ ಹೆಚ್ಚಾಗಿವೆ. ಇದಕ್ಕೆ ಪ್ರಮುಖ ಕಾರಣ ಶಿಕ್ಷಣದ ಕೊರತೆ. ಬಾಲ್ಯವಿವಾಹ ಮಾಡುವುದರಿಂದ ಮಕ್ಕಳ ಮೇಲೆ ದೈಹಿಕ ಮತ್ತು ಮಾನಸಿಕವಾಗಿ ಗಾಢವಾದ ಪರಿಣಾಮ ಬೀರುವುದಲ್ಲದೇ ತಾಯಿ ಮತ್ತು ಶಿಶು ಮರಣದ ಸಾಧ್ಯತೆ ಇರುತ್ತದೆ ಎಂದು ಹೇಳಿದರು.  ಆದ್ದರಿಂದ ಜಿಲ್ಲೆ, ತಾಲೂಕು ಮತ್ತು ಗ್ರಾಮೀಣ ಮಟ್ಟದಲ್ಲಿ ಬಾಲ್ಯವಿವಾಹ, ಮಹಿಳೆ ಮತ್ತು ಮಕ್ಕಳ ಸುರಕ್ಷತೆ ಕುರಿತು ಶಿಕ್ಷಣ ಇಲಾಖೆ ಹಾಗೂ ಮಕ್ಕಳ ರಕ್ಷಣಾ ಇಲಾಖೆ ವತಿಯಿಂದ ಮತ್ತಷ್ಟು ಜಾಗೃತಿ ಮೂಡಿಸಬೇಕು ಎಂದು ಸೂಚನೆ ನೀಡಿದರು.  ಬಾಲ್ಯವಿವಾಹ ಮತ್ತು ಪೋಕ್ಸೋ ಅತ್ಯಂತ ಕಠಿಣವಾಗಿದ್ದು, ಇಂತಹ ಪ್ರಕರಣಗಳಲ್ಲಿ ಸಿಲುಕಿದವರಿಗೆ ಎರಡು ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ 1 ಲಕ್ಷದ ವರೆಗೆ ದಂಡ ವಿಧಿಸಲು ಅವಕಾಶವಿದೆ. ಹಾಗಾಗಿ ಜಿಲ್ಲೆ, ತಾಲೂಕು ಹಾಗೂ ಗ್ರಾಮೀಣ ಭಾಗದಲ್ಲಿ ಇಂತಹ ಪ್ರಕರಣಗಳು ಕಂಡುಬಂದಲ್ಲಿ ಮಕ್ಕಳ ಸಹಾಯವಾಣಿ ಸಂಖ್ಯೆ 1098 ಗೆ ಕರೆ ಮಾಡಿ ಮಾಹಿತಿ ನೀಡಬೇಕು ಎಂದು ಮನವಿ ಮಾಡಿದರು.  ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ರಾಜಾನಾಯ್ಕ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ನಾಗೇಂದ್ರಪ್ಪ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಡಾ.ಷಣ್ಮುಖಪ್ಪ, ಡಿವೈಎಸ್ಪಿ ಶರಣಬಸವ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.