ಜಿಲ್ಲೆ

ಬಾಲ್ಯವಿವಾಹ ಮುಕ್ತ ಜಿಲ್ಲೆಯಾಗಿಸಲು ಶ್ರಮಿಸಿ

ರಮೇಶ ಜಹಗೀರದಾರ್

ದಾವಣಗೆರೆ : ಜಿಲ್ಲೆಯಲ್ಲಿ ಬಾಲ್ಯವಿವಾಹ, ಪೋಕ್ಸೋ ಪ್ರಕರಣಗಳನ್ನು ಗುರುತಿಸಿ ಸೂಕ್ತ ಕ್ರಮ ಕೈಗೊಳ್ಳುವ ಮೂಲಕ  ಬಾಲ್ಯವಿವಾಹ ಮುಕ್ತ ಜಿಲ್ಲೆಯನ್ನಾಗಿಸಲು ಅಧಿಕಾರಿಗಳು ಪ್ರಯತ್ನಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಮಹಾವೀರ ಮ. ಕರಣ್ಣವರ್ ತಿಳಿಸಿದರು.  ಜಿಲ್ಲಾಡಳಿತ, ಜಿ.ಪಂ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಕಾರ್ಮಿಕ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗಳು, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಮತ್ತು ಸ್ಫೂರ್ತಿ ಸಂಸ್ಥೆ ಸಹಯೋಗದಲ್ಲಿ ಶುಕ್ರವಾರ ಜಿ.ಪಂ. ಸಭಾಂಗಣದಲ್ಲಿ ಬಾಲ್ಯವಿವಾಹ ನಿಷೇಧಾಧಿಕಾರಿಗಳಿಗೆ ಆಯೋಜಿಸಿದ್ದ ಚಿಂತನ ಮಂಥನ ಕಾರ್ಯಾಗಾರದಲ್ಲಿ ಮಾತನಾಡಿದರು.  ಜಿಲ್ಲೆಯಲ್ಲಿ 6 ತಾಲೂಕುಗಳಿವೆ. ಗ್ರಾಮೀಣ, ತಾಲೂಕು ಹಾಗೂ ಜಿಲ್ಲಾಮಟ್ಟದಲ್ಲಿ 2 ಸಾವಿರ ಬಾಲ್ಯವಿವಾಹ ನಿಷೇಧಾಧಿಕಾರಿಗಳಿದ್ದಾರೆ. ಆದರೆ ಬಾಲ್ಯ ವಿವಾಹ ಪ್ರಕರಣ ತಡೆಯುವಲ್ಲಿ ವಿಫಲರಾಗುತ್ತಿದ್ದಾರೆ ಎಂದರು.  ಯಾವುದೇ ಗ್ರಾಮ ಅಥವಾ ಸ್ಥಳೀಯ ಮಟ್ಟದ ಅಧಿಕಾರಿಗಳಿಗೆ ವಿವಾಹ ಸಿದ್ಧತೆ, ಪೂರ್ವ ತಯಾರಿ ಕುರಿತು ಮಾಹಿತಿ ಲಭ್ಯವಿಲ್ಲದೇ ಇರುವುದಿಲ್ಲ. ಆದರೂ ಇಂತಹ ಪ್ರಕರಣಗಳು ಇಂದಿಗೂ ದಾಖಲಾಗುತ್ತಿರುವುದು ವಿಷಾದನೀಯ. ಬಾಲ್ಯವಿವಾಹ ಮತ್ತು ಪೋಕ್ಸೋ ತಡೆದಲ್ಲಿ ಒಂದು ಮಗುವಿನ ಸರ್ವಾಂಗೀಣ ಬೆಳವಣಿಗೆಗೆ ಕಾರಣವಾಗಬಹುದು ಎಂದು ಹೇಳಿದರು.  ಇದೇ ಸಂದರ್ಭದಲ್ಲಿ ನ್ಯಾಯಾಧೀಶ ಮಹಾವೀರ ಮ. ಕರೆಣ್ಣವರ ಬಾಲ್ಯವಿವಾಹ ನಿಷೇಧ ಕಾಯ್ದೆ ಮತ್ತು ಸಹಾಯವಾಣಿ ಸಂಖ್ಯೆ ಕುರಿತ ಭಿತ್ತಿಪತ್ರ ಬಿಡುಗಡೆಗೊಳಿಸಿ ಪ್ರತಿಜ್ಞಾವಿಧಿ ಬೋಧಿಸಿದರು.  ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಮಾಜಿ ಸದಸ್ಯ ಡಿ.ಶಂಕರಪ್ಪ ಉಪನ್ಯಾಸ ನೀಡಿದರು. ಜಿಲ್ಲಾ ಸರ್ಜನ್ ಡಾ.ನಾಗೇಂದ್ರಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ರಾಜಾನಾಯ್ಕ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ನಾಗರಾಜ್, ಡಿಡಿಪಿಐ ಕೊಟ್ರೇಶ್, ಸ್ಫೂರ್ತಿ ಸಂಸ್ಥೆ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಹಾಗೂ ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಮಾಜಿ ಸದಸ್ಯ ರೂಪನಾಯ್ಕ, ವಿವಿಧ ಇಲಾಖೆಯ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು. ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಟಿ.ಎನ್. ಕವಿತಾ ಸ್ವಾಗತಿಸಿದರು.  ...