ಜಿಲ್ಲೆ

ಸಂಸದ ಸಿದ್ದೇಶ್ವರ ವಿರುದ್ಧ ಇಡಿ ವಿಚಾರಣೆಗೆ ಆಗ್ರಹ

ರಮೇಶ ಜಹಗೀರದಾರ್

ದಾವಣಗೆರೆ : ಸಂಸದ ಜಿ.ಎಂ. ಸಿದ್ದೇಶ್ವರ ಬಗ್ಗೆ ಆರೋಪ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಅವರ ವಿರುದ್ಧ ಆದಾಯ ತೆರಿಗೆ ಇಲಾಖೆ ಮತ್ತು ಕೇಂದ್ರೀಯ ಜಾರಿ ನಿರ್ದೇಶನಾಲಯದಿಂದ ವಿಚಾರಣೆ ನಡೆಸುವಂತೆ ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.
 ಅಂಬೇಡ್ಕರ್ ವೃತ್ತದಲ್ಲಿ ಸೇರಿದ ಪ್ರತಿಭಟನಾಕಾರರು ಅಲ್ಲಿಂದ ಘೋಷಣೆಗಳನ್ನು ಕೂಗುತ್ತ ಮೆರವಣಿಗೆ ಮೂಲಕ ಹದಡಿ ರಸ್ತೆಯಲ್ಲಿರುವ ಆದಾಯ ತೆರಿಗೆ ಇಲಾಖೆ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು.
 ಕಳೆದ 8-10 ವರ್ಷಗಳಿಂದ 500 ಕೋಟಿ ರೂ.ಗೂ ಹೆಚ್ಚು ಹವಾಲಾ ದಂಧೆ ನಡೆದಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ನಿರಂತರವಾಗಿ ಬರುತ್ತಿದೆ. ಬೆಂಗಳೂರಿನ ಹಲಸೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಿ ಸಿದ್ದೇಶ್ವರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
 ಹರಿಹರದ ಮಾಜಿ ಶಾಸಕ ಎಸ್. ರಾಮಪ್ಪ ಮಾತನಾಡಿ, ಬಿಜೆಪಿ ಅವಧಿಯಲ್ಲಿ ಅನೇಕ ಹಗರಣಗಳು ನಡೆದಿವೆ. ಬಿಜೆಪಿಯವರದೇ ತಪ್ಪುಗಳು ಸಾಕಷ್ಟಿದ್ದರೂ, ಡಿ.ಕೆ. ಶಿವಕುಮಾರ್ ವಿರುದ್ಧ ಸುಳ್ಳು ಆರೋಪ ಹೊರಿಸಿದರು. ಈಗ ರಾಮನ ಹೆಸರಿನಲ್ಲಿ ರಾಜಕಾರಣ ಮಾಡುತ್ತಿದ್ದಾರೆ. ಮೊದಲು ಅವರು ಬಡವರ ಕಷ್ಟಗಳಿಗೆ ಸ್ಪಂದಿಸಲಿ ಎಂದು ಸಲಹೆ ನೀಡಿದರು.
 ಕೆಪಿಸಿಸಿ ವಕ್ತಾರ ಡಿ. ಬಸವರಾಜ ಮಾತನಾಡಿ, ಬಿಜೆಪಿ ಸರ್ಕಾರವಿದ್ದಾಗ ಸಿದ್ದೇಶ್ವರ ಅವರು ಜಿಲ್ಲೆಯ ಒಬ್ಬ ಶಾಸಕರನ್ನೂ ಮಂತ್ರಿ ಮಾಡಲಿಲ್ಲ. ಈಗ ಅವರ ವಿರುದ್ಧ ಆರೋಪ ಕೇಳಿಬಂದಿದ್ದು ಅವರನ್ನು ಬಂಧಿಸಿ ಮಂಪರು ಪರೀಕ್ಷೆಗೆ ಒಳಪಡಿಸಬೇಕು ಎಂದು ಒತ್ತಾಯಿಸಿದರು.
 ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ. ಶೆಟ್ಟಿ ಮಾತನಾಡಿ, ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೋಟ್ಯಂತರ ರೂ. ಭ್ರಷ್ಟಾಚಾರ ನಡೆದಿದೆ. ಹವಾಲಾ ದಂಧೆ ಆರೋಪದ ಹಿನ್ನೆಲೆಯಲ್ಲಿ ಸಿದ್ದೇಶ್ವರ ಅವರನ್ನು ತನಿಖೆಗೆ ಒಳಪಡಿಸಬೇಕು ಎಂದು ಆಗ್ರಹಿಸಿದರು.
 ಪಾಲಿಕೆ ಸದಸ್ಯ ಚಮನ್‌ಸಾಬ್, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅನಿತಾಬಾಯಿ, ಮುಖಂಡರಾದ ಅಯೂಬ್ ಪೈಲ್ವಾನ್, ಕೆ.ಜಿ. ಶಿವಕುಮಾರ್, ರೇವಣಸಿದ್ದಪ್ಪ, ಅಬ್ದುಲ್ ಲತೀಫ್, ಎಲ್.ಎಂ.ಎಚ್. ಸಾಗರ್, ಅಬ್ದುಲ್ ಜಬ್ಬಾರ್, ಕೋಳಿ ಇಬ್ರಾಹಿಂ, ಮೈನುದ್ದೀನ್ ಇದ್ದರು.