ದಾವಣಗೆರೆ : ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ನ. 2 ರಂದು ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆಸೆಟ್) ನಡೆಯಲಿದ್ದು, ಯಾವುದೇ ಅಕ್ರಮಗಳಿಗೆ ಅವಕಾಶವಾಗದಂತೆ ಜಾಗರೂಕತೆ ವಹಿಸಬೇಕು ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಡಳಿತ ಭವನದಲ್ಲಿ ಬುಧವಾರ ಆಯೋಜಿಸಿದ್ದ ಪೂರ್ವಸಿದ್ಧತಾ ಸಭೆಯಲ್ಲಿ ಮಾತನಾಡಿ, ಖಜಾನೆ ಅಧಿಕಾರಿ, ಮಾರ್ಗಾಧಿಕಾರಿಗಳು, ಪರೀಕ್ಷಾ ಕೇಂದ್ರ ಮುಖ್ಯಸ್ಥರು ಹಾಗೂ ಕೊಠಡಿ ಮೇಲ್ವಿಚಾರಕರು ಪ್ರಶ್ನೆಪತ್ರಿಕೆ ಹಾಗೂ ಒಎಂಆರ್ ನಿರ್ವಹಣೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡಬೇಕು ಎಂದು ಹೇಳಿದರು. ನಗರದ 21 ಕೇಂದ್ರಗಳಲ್ಲಿ ಬೆಳಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ ನಡೆಯಲಿದೆ. ಒಟ್ಟು 9710 ಅಭ್ಯರ್ಥಿಗಳು 19 ವಿವಿಧ ವಿಷಯಗಳಿಗೆ ಪರೀಕ್ಷೆ ಎದುರಿಸಲಿದ್ದಾರೆ. ಪರೀಕ್ಷಾ ಕೇಂದ್ರ ಸುತ್ತ ಸೂಕ್ತ ಪೊಲೀಸ್ ಬಂದೋಬಸ್ತ್ ಮಾಡಬೇಕು. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಹೊರಡಿಸಿರುವ ಪರೀಕ್ಷಾ ನಿಯಮಗಳನ್ನು ತಪ್ಪದೇ ಪಾಲಿಸಬೇಕು ಎಂದು ತಿಳಿಸಿದರು. ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ತೆರಳುವ ಮುಂಚೆ ಸೂಕ್ತವಾಗಿ ತಪಾಸಣೆ ನಡೆಸಬೇಕು. ಪರೀಕ್ಷಾ ಪ್ರಾಧಿಕಾರ ಹೊರಡಿಸಿರುವ ವಸ್ತ್ರ ಸಹಿಂತೆಯನ್ನು ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಕಡ್ಡಾಯವಾಗಿ ಪಾಲಿಸಬೇಕು. ಮೊಬೈಲ್ ಸೇರಿದಂತೆ ಯಾವುದೇ ರೀತಿಯ ಎಲೆಕ್ಟ್ರಾನಿಕ್ ವಸ್ತುಗಳನ್ನು ಪರೀಕ್ಷಾ ಕೇಂದ್ರಕ್ಕೆ ತರುವಂತಿಲ್ಲ ಎಂದರು.