ಜಿಲ್ಲೆ

ಸರ್ಕಾರಿ ನೌಕರರೆಂದು ಘೋಷಿಸಲು ಆಗ್ರಹ

ರಮೇಶ ಜಹಗೀರದಾರ್

ದಾವಣಗೆರೆ : ತಮ್ಮನ್ನು ಸರ್ಕಾರಿ ನೌಕರರೆಂದು ಘೋಷಿಸಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ಗ್ರಾಮ ಪಂಚಾಯಿತಿ ನೌಕರರು ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.  ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘದ (ಸಿಐಟಿಯು ಸಂಯೋಜಿತ) ನೇತೃತ್ವದಲ್ಲಿ ವಿಮಾನ ಮಟ್ಟಿಯಿಂದ ಮೆರವಣಿಗೆ ನಡೆಸಿದ ಗ್ರಾ.ಪಂ. ನೌಕರರು ಜಿಲ್ಲಾ ಪಂಚಾಯಿತಿ ಆವರಣದಲ್ಲಿ ಪ್ರತಿಭಟನೆ ನಡೆಸಿದರು. ನಂತರ ಉಪ ಕಾರ್ಯದರ್ಶಿ ಕೃಷ್ಣ ನಾಯ್ಕ ಅವರಿಗೆ ಮನವಿ ಸಲ್ಲಿಸಿದರು.  ಗ್ರಾ.ಪಂ.ಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕರ ವಸೂಲಿಗಾರರು, ಕ್ಲರ್ಕ್, ಡೇಟಾ ಎಂಟ್ರಿ ಆಪರೇಟರ್, ನೀರುಗಂಟಿಗಳು, ಜವಾನ, ಸ್ವಚ್ಛತಾಗಾರರನ್ನು ಏಕ ಕಾಲಕ್ಕೆ ಅನುಮೋದನೆ ಮಾಡಿ ಸರ್ಕಾರಿ ನೌಕರರನ್ನಾಗಿ ಘೋಷಿಸಬೇಕು ಎಂದು ಒತ್ತಾಯಿಸಿದರು.  ಗ್ರಾ.ಪಂ. ಸಿಬ್ಬಂದಿಗೆ ವಸೂಲಾತಿಯ ಶೇ. 40ರ ಅನುದಾನದಲ್ಲಿ ವೇತನ ಹಾಗೂ ಕಂದಾಯ ಉಪಕರಗಳನ್ನು ಪ್ರತಿ ತಿಂಗಳು ಪಾವತಿಸಲು ಅನುಕೂಲವಾಗುವಂತೆ ಪ್ರತ್ಯೇಕ ಖಾತೆ ತೆರೆಯಲು ಗ್ರಾ.ಪಂ.ಗಳಿಗೆ ಸೂಕ್ತ ನಿರ್ದೇಶನ ನೀಡಬೇಕು ಎಂದು ಮನವಿ ಮಾಡಿದರು.  ಇಂದಿನ ಬೆಲೆ ಏರಿಕೆಗೆ ಅನುಗುಣವಾಗಿ ಕನಿಷ್ಠ ವೇತನ 31 ಸಾವಿರ ರೂ. ನಿಗದಿಗೊಳಿಸಬೇಕು. ಗ್ರಾ.ಪಂ.ಗಳಲ್ಲಿ ಕೆಲಸ ನಿರ್ವಹಿಸುವ ನೌಕರರು ನಿವೃತ್ತರಾದರೆ ಪಿಂಚಣಿ ಅಥವಾ ಮರಣ ಹೊಂದಿದರೆ ಅವರ ಅವಲಂಬಿತರಿಗೆ ಪ್ರತಿ ತಿಂಗಳು ಕನಿಷ್ಠ 6 ಸಾವಿರ ರೂ. ನೀಡಬೇಕು ಎಂದು ಆಗ್ರಹಿಸಿದರು.  ವರ್ಗಾವಣೆಗೆ ಅವಕಾಶ ನೀಡಬೇಕು. ನೀರುಗಂಟಿಗಳಿಗೆ ಮಲ್ಟಿಪರ್ಪಸ್ ಎಂದಿರುವುದನ್ನು ಕೈಬಿಟ್ಟು ನಿರ್ದಿಷ್ಟ ಕೆಲಸ ನಿಗದಿಪಡಿಸಬೇಕು. ಆದಾಯಕ್ಕೆ ಅನುಗುಣವಾಗಿ ಕರ ವಸೂಲಿಗಾರರ ಹುದ್ದೆಗಳನ್ನು ನಿಗದಿಗೊಳಿಸಬೇಕು. ಸೇವಾ ಹಿರಿತನ ಪರಿಗಣಿಸಿ ವೇತನ ಹೆಚ್ಚಳ ಮಾಡಬೇಕು ಎಂದು ಒತ್ತಾಯಿಸಿದರು.  ತೀವ್ರ ಅನಾರೋಗ್ಯಕ್ಕೆ ತುತ್ತಾದ ನೌಕರರಿಗೆ ಆಸ್ಪತ್ರೆ ವೆಚ್ಚ ಭರಿಸಬೇಕು. ಐಪಿಡಿ ಸಾಲಪ್ಪ ವರದಿಯಂತೆ ಸ್ವಚ್ಛತಾಗಾರರನ್ನು ನೇಮಿಸಬೇಕು. ಇ-ಹಾಜರಾತಿ ಲೋಪದೋಷಗಳನ್ನು ಪಂಚತಂತ್ರದಲ್ಲಿ ಸರಿಪಡಿಸುವ ವರೆಗೆ ಸಿಬ್ಬಂದಿಗೆ ಪೂರ್ಣ ವೇತನ ಪಾವತಿಸಬೇಕು ಎಂದು ಆಗ್ರಹಿಸಿದರು.  ಸಂಘದ ಜಿಲ್ಲಾಧ್ಯಕ್ಷ ಎಸ್.ಸಿ. ಶ್ರೀನಿವಾಸಾಚಾರ್, ಗೌರವಾಧ್ಯಕ್ಷ ಕೆ.ಎಚ್. ಆನಂದರಾಜ್, ಪ್ರಧಾನ ಕಾರ್ಯದರ್ಶಿ ಜಿ.ಎಸ್. ಬಸವರಾಜ, ಖಜಾಂಚಿ ಚಂದ್ರಪ್ಪ, ತಿಪ್ಪೇಸ್ವಾಮಿ, ಮ