ಜಿಲ್ಲೆ

ರಾಜ್ಯ ಮಾಹಿತಿ ಆಯುಕ್ತರ ಭೇಟಿ 19 ರಂದು

ರಮೇಶ ಜಹಗೀರದಾರ್

ದಾವಣಗೆರೆ :  ರಾಜ್ಯ ಮಾಹಿತಿ ಆಯುಕ್ತರಾದ ರುದ್ರಣ್ಣ ಹರ್ತಿಕೋಟೆ ಮತ್ತು ಎಸ್. ರಾಜಶೇಖರ್ ಅವರು ಜು. 19 ರಂದು ಜಿಲ್ಲೆಗೆ ಭೇಟಿ ನೀಡಲಿದ್ದಾರೆ ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ತಿಳಿಸಿದ್ದಾರೆ.  ಅಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾಧಿಕಾರಿ ಕಚೇರಿಯ ತುಂಗಭದ್ರಾ ಸಭಾಂಗಣದಲ್ಲಿ, ಮಾಹಿತಿ ಹಕ್ಕು ಅಧಿನಿಯಮ-2005 ರ ಕಾಯ್ದೆ ಅಡಿಯಲ್ಲಿ ಬರುವ ಪ್ರಥಮ ಮೇಲ್ಮನವಿ ಪ್ರಾಧಿಕಾರ ಮತ್ತು ಸಾರ್ವಜನಿಕ ಮಾಹಿತಿ ಹಕ್ಕು ಪ್ರಾಧಿಕಾರಗಳಿಗೆ ತರಬೇತಿ ಮತ್ತು ಪರಿಶೀಲನೆ ನಡೆಸಲಿದ್ದಾರೆ.  ಈ ಸಭೆಗೆ ಅಧಿಕಾರಿಗಳು ಕಳೆದ 3 ವರ್ಷಗಳಲ್ಲಿ ಸ್ವೀಕರಿಸಿದ ಅರ್ಜಿಗಳ ಮಾಹಿತಿಯನ್ನು ಕಡ್ಡಾಯವಾಗಿ ಇರಿಸಿಕೊಳ್ಳಬೇಕು ಮತ್ತು ಮೇಲ್ಮನವಿ ಪ್ರಕರಣಗಳ ವಿವರಗಳ ಪ್ರತ್ಯೇಕ ಮಾಹಿತಿಯನ್ನು ಇಟ್ಟುಕೊಳ್ಳಬೇಕು ಎಂದು ಹೇಳಿದ್ದಾರೆ.  ಜಿಲ್ಲೆಯಲ್ಲಿ ಮಾಹಿತಿ ಹಕ್ಕು ಅಧಿನಿಯಮ 2005 ರ ಅಡಿ ಬರುವ ಅರ್ಜಿಗಳನ್ನು ಇ-ಗವರ್ನನ್ಸ್ ಅಭಿವೃದ್ಧಿ ಪಡಿಸಿರುವ ಆನ್‌ಲೈನ್ ಪೋರ್ಟಲ್‌ನಲ್ಲಿ ಲಾಗಿನ್ ಆಗಿ, ಅಪ್‌ಲೋಡ್ ಮಾಡುವುದು. ಭೌತಿಕ ಪಟ್ಟಿಯನ್ನು ಮುಖ್ಯ ಆಯುಕ್ತರಿಗೆ ಸಲ್ಲಿಸಬೇಕು ಎಂದು ತಿಳಿಸಿದ್ದಾರೆ.  ಜಿಲ್ಲೆಯ ಎಲ್ಲ ಸಹಾಯಕ ಸಾರ್ವಜನಿಕ ಮಾಹಿತಿ ಹಕ್ಕು ಅಧಿಕಾರಿ, ಸಾರ್ವಜನಿಕ ಮಾಹಿತಿ ಅಧಿಕಾರಿ ಹಾಗೂ ಪ್ರಥಮ ಮೇಲ್ಮನವಿ ಪ್ರಾಧಿಕಾರಿಗಳು ಹಾಜರಿರಬೇಕು ಎಂದು ಸೂಚನೆ ನೀಡಿದ್ದಾರೆ.