ಜಿಲ್ಲೆ

ನೇರ ಸೇತುವೆ ನಿರ್ಮಾಣಕ್ಕೆ ಆಗ್ರಹ

ರಮೇಶ ಜಹಗೀರದಾರ್

ದಾವಣಗೆರೆ  : ನೇರ ಸೇತುವೆ ನಿರ್ಮಿಸುವಂತೆ ಆಗ್ರಹಿಸಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ತಡೆದು ಹಳೇ ಕುಂದುವಾಡ ಗ್ರಾಮಸ್ಥರು ಬುಧವಾರ ಪ್ರತಿಭಟನೆ ನಡೆಸಿದರು. ಇದೇ ವೇಳೆ ಪ್ರತಿಭಟನಾಕಾರರು ಗುತ್ತಿಗೆದಾರನಿಗೆ ತರಾಟೆಗೆ ತೆಗೆದುಕೊಂಡು ಬೆವರಿಳಿಸಿದರು.  ನಗರದ ಹಳೇ ಕುಂದುವಾಡ ಬಳಿ ಇರುವ ರಾಷ್ಟ್ರೀಯ ಹೆದ್ದಾರಿಯಲ್ಲಿ 24 ಮೀಟರ್ ಅಗಲ, 6 ಮೀಟರ್ ಎತ್ತರದ ನೇರ ಸೇತುವೆ ನಿರ್ಮಿಸಬೇಕು ಎಂದು ಒತ್ತಾಯಿಸಿದ ಗ್ರಾಮಸ್ಥರು ಕಾಮಗಾರಿ ತಡೆದು ಆಕ್ರೋಶ ವ್ಯಕ್ತಪಡಿಸಿದರು.  ಗ್ರಾಮಸ್ಥರ ಒತ್ತಡದ ಮೇರೆಗೆ ಹೆದ್ದಾರಿ ಪ್ರಾಧಿಕಾರದ ಇಂಜಿಯನಿಯರ್‌ಗೆ ಜಿಲ್ಲಾಧಿಕಾರಿ ಡಾ. ಗಂಗಾಧರ ಸ್ವಾಮಿ ಅವರು ದೂರವಾಣಿ ಮೂಲಕ ಸಂಪರ್ಕಿಸಿ ಕಾಮಗಾರಿ ನಿಲ್ಲಿಸುವಂತೆ ಸೂಚನೆ ನೀಡಿದ್ದಾರೆ, ಆದರೂ ಮಾತು ಕೇಳದ ಗುತ್ತಿಗೆದಾರ ಹಾಗೂ ಅಧಿಕಾರಿಗಳು ಕಾಮಗಾರಿ ನಡೆಸುತ್ತೇವೆ ಎಂದರು.  ಇದರಿಂದ ರೊಚ್ಚಿಗೆದ್ದ ಗ್ರಾಮಸ್ಥರು, ‘ನೀವು ಸಚಿವರು, ಸಂಸದರು, ಡಿಸಿ, ಎಸಿ ಅವರ ಮಾತಿಗೆ ಬೆಲೆ ನೀಡುತ್ತಿಲ್ಲ’ ಎಂದು ತರಾಟೆಗೆ ತೆಗೆದುಕೊಂಡರು. ಅಧಿಕಾರಿಗಳು ಹಾಗೂ ಗ್ರಾಮಸ್ಥರ ಮಧ್ಯೆ ವಾಗ್ವಾದ ಉಂಟಾಯಿತು. ಪ್ರತಿಭಟನೆ ಜೋರಾಗುತ್ತಿದ್ದಂತೆ ಗುತ್ತಿಗೆದಾರ ಅಲ್ಲಿಂದ ಕಾಲ್ಕಿತ್ತ ಪ್ರಸಂಗ ನಡೆಯಿತು. ಗ್ರಾಮಸ್ಥರು ಪಟ್ಟು ಬಿಡದ ಕಾರಣ ಕಾಮಗಾರಿಯನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ.  ಪ್ರತಿಭಟನಾ ಸ್ಥಳಕ್ಕೆ ಉಪ ವಿಭಾಗಾಧಿಕಾರಿ ಸಂತೋಷ್ ಪಾಟೀಲ್ ಆಗಮಿಸಿ ಮನವಿ ಸ್ವೀಕರಿಸಿದರು. ಈ ಹಿಂದೆಯೂ ಎರಡು ಸೇತುವೆಗಳನ್ನು ಅವೈಜ್ಞಾನಿಕವಾಗಿ ನಿರ್ಮಿಸಿದ್ದರಿಂದ ಅನಾನುಕೂಲವಾಗಿದೆ ಎಂದು ಗ್ರಾಮಸ್ಥರು ದೂರಿದ್ದಾರೆ. ಅವರ ಬೇಡಿಕೆಯಂತೆ ತಾತ್ಕಾಲಿಕವಾಗಿ ಕೆಲಸ ನಿಲ್ಲಿಸಿ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಸಭೆ ಕರೆದು ಚರ್ಚಿಸಿ ಮುಂದಿನ ನಿರ್ಣಯ ಕೈಗೊಳ್ಳಲಾಗುವುದು ಎಂದರು.  ಪ್ರತಿಭಟನೆ ವೇಳೆ ಮುಖಂಡರು ಮಾತನಾಡಿ, ಹಳೇ ಕುಂದುವಾಡ ಗ್ರಾಮ ರಾಷ್ಟ್ರೀಯ ಹೆದ್ದಾರಿ 48ಕ್ಕೆ ಹೊಂದಿಕೊಂಡಿದ್ದು ಈ ಗ್ರಾಮಕ್ಕೆ ತೆರಳಲು ನೇರ ಸೇತುವೆ ವ್ಯವಸ್ಥೆ ಇಲ್ಲ. ಈ ಹಿಂದೆ ಎರಡು ಸೇತುವೆಗಳನ್ನು ನಿರ್ಮಿಸಿದ್ದರೂ, ಅವು ಅವೈಜ್ಞಾನಿಕವಾಗಿವೆ. ಈಗ ಹೊಸದಾಗಿ ನಿರ್ಮಾಣವಾಗುತ್ತಿರುವ ಸೇತುವೆ ಕೂಡಾ ಅವೈಜ್ಞಾನಿಕವಾಗಿದೆ ಎಂದು ದೂರಿದರು.  ಬನ್ನಿಕೋಡು ಹಾಗೂ ಹಳೇ ಕುಂದುವಾಡಕ್ಕೆ ನೇರ ಸೇತುವೆ ನಿರ್ಮಾಣ ಮಾಡಿದರೆ ಹತ್ತಾರು ಹಳ್ಳಿಗಳಿಗೆ ಅನುಕೂಲವಾಗಲಿದೆ. ಈ ರಸ್ತೆ ಹೊಸಪೇಟೆ-ಶಿವಮೊಗ್ಗ ರಾಜ್ಯ ಹೆದ್ದಾರಿಗೆ ಸಂಪರ್ಕ ಕಲ್ಪಿಸಿಕೊಡುತ್ತಿದೆ. ಪಕ್ಕದಲ್ಲಿ ಶಾಲೆ, ಹಾಸ್ಟೆಲ್ ಇದ್ದು ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ. ಬಸ್, ಟ್ರ್ಯಾಕ್ಟರ್ ಸಂಚರಿಸಲು ಅನಾನುಕೂಲವಾಗಿದೆ ಎಂದು ಹೇಳಿದರು.  ಇದೇ ವೇಳೆ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ಮುಖ್ಯ ಶಿಕ್ಷಕರು ಕೂಡಾ ಮನವಿ ಸಲ್ಲಿಸಿದರು. ಗ್ರಾಮದ ಮುಖಂಡರು, ಯುವಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.