ಜಿಲ್ಲೆ

ಸಿದ್ದರಾಮಯ್ಯ ಪರ ನಾವಿದ್ದೇವೆ

ರಮೇಶ ಜಹಗೀರದಾರ್

ದಾವಣಗೆರೆ : ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ. ಅವರ ಪರವಾಗಿ ನಾವಿದ್ದೇವೆ. ಈ ವಿಚಾರದಲ್ಲಿ ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ ಎಂದು ಗಣಿ ಮತ್ತು ಭೂವಿಜ್ಞಾನ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಹೇಳಿದರು.  ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ಮುಡಾ ನಿವೇಶನ ಹಂಚಿಕೆಗೆ ಸಂಬಂಧಿಸಿದ ಪ್ರಕರಣದಲ್ಲಿ ಸಿಎಂ ಸಲ್ಲಿಸಿದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿರುವುದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ಅವಕಾಶವಿದೆ. ಕಾನೂನು ಹೋರಾಟವನ್ನು ಮುಂದುವರಿಸಲಾಗುವುದು. ನಾಳೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ತಿಳಿಸಿದರು.  ಸಿದ್ದರಾಮಯ್ಯ ಅವರ ಆಡಳಿತ ವೈಖರಿಯನ್ನು ಕಂಡು ಬಿಜೆಪಿ ಸೇಡಿನ ರಾಜಕಾರಣ ಮಾಡುತ್ತಿದೆ. ಸ್ವಚ್ಛ, ಪ್ರಾಮಾಣಿಕ ಆಡಳಿತ ನಡೆಸುತ್ತಿರುವವರಿಗೆ ಕಿರುಕುಳ ನೀಡಲಾಗುತ್ತಿದೆ. ರಾಜ್ಯಪಾಲರು ಪಕ್ಷಾತೀತವಾಗಿ ಕೆಲಸ ಮಾಡುತ್ತಿಲ್ಲ. ಬಿಜೆಪಿಯವರ ವಿರುದ್ಧ ತನಿಖೆಗೆ ಅನುಮತಿ ನೀಡುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.