ಜಿಲ್ಲೆ

ಸದ್ಯಕ್ಕೆ ಮುಖ್ಯಮಂತ್ರಿ ಬದಲಾವಣೆ ಇಲ್ಲ

ರಮೇಶ ಜಹಗೀರದಾರ್

ದಾವಣಗೆರೆ : ಯಾರು ಏನೇ ಹೇಳಿದರೂ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ. ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದು ಗಣಿ ಮತ್ತು ಭೂವಿಜ್ಞಾನ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಹೇಳಿದರು.  ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರೇ ಸ್ಪಷ್ಟನೆ ನೀಡಿದ್ದಾರೆ ಎಂದು ತಿಳಿಸಿದರು.  ಸಿಎಂ ಬದಲಾವಣೆ ಮಾಧ್ಯಮಗಳ ಸೃಷ್ಟಿ. ಹೊಸ ವರ್ಷದ ಹಿನ್ನೆಲೆಯಲ್ಲಿ ಕೆಲ ಸಚಿವರು ಊಟಕ್ಕೆ ಸೇರಿದ್ದರ ಬಗ್ಗೆ ಬೇರೆ ಅರ್ಥ ಕಲ್ಪಿಸುವುದು ಬೇಡ ಎಂದರು.  ಡಿ.ಕೆ. ಶಿವಕುಮಾರ್ ಸಿಎಂ ಆಗುತ್ತಾರೆ ಎಂಬ ಶಾಸಕ ಶಿವಗಂಗಾ ಬಸವರಾಜ್ ಹೇಳಿಕೆಗೆ ಪ್ರತಿಕ್ರಿಯಿಸಿ, ಅವರು ಡಿಕೆಶಿ ಅವರ ಶಿಷ್ಯ, ಅವರ ಹೆಸರಿನಲ್ಲಿ ಪ್ರಮಾಣ ವಚನ ತೆಗೆದುಕೊಂಡಿದ್ದರು. ತಮ್ಮ ಅನಿಸಿಕೆ ಹೇಳಿರಬಹುದು ಎಂದು ಉತ್ತರಿಸಿದರು.  ಸಿಡಬ್ಲುಸಿ ಸಭೆಯಲ್ಲಿ ಬೆಳಗಾವಿ ಕಾಂಗ್ರೆಸ್ ಸಮಾವೇಶ ಪೂರ್ಣಗೊಳಿಸುವ ಬಗ್ಗೆ ಚರ್ಚೆ ನಡೆಯುತ್ತದೆ ಎಂದು ತಿಳಿಸಿದರು.  ಜಿಲ್ಲೆಯ ಕೆಲವೆಡೆ ಅಕ್ರಮ ಮರಳು ಗಣಿಗಾರಿಕೆ ನಡೆಯುತ್ತಿದೆ ಎಂಬ ಆರೋಪದ ಬಗ್ಗೆ ಪ್ರತಿಕ್ರಿಯಿಸಿ. ಆ ರೀತಿ ಏನೂ ಇಲ್ಲ ಎಂಬ ಮಾಹಿತಿ ಇದೆ. ಸೂಕ್ತ ದಾಖಲೆ ನೀಡಿದರೆ ಕ್ರಮ ಕೈಗೊಳ್ಳಲಾಗುವುದು ಎಂದರು.